ADVERTISEMENT

ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಿ: ಸಫಾಯಿ ಕರ್ಮಚಾರಿ ಕಾವಲು ಸಮಿತಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 11:36 IST
Last Updated 23 ಸೆಪ್ಟೆಂಬರ್ 2024, 11:36 IST
   

ಬೆಳಗಾವಿ: ಸರ್ಕಾರಿ ಮಾರ್ಗಸೂಚಿ ಪ್ರಕಾರ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು ಎಂದು ಆಗ್ರಹಿಸಿ, ಸಫಾಯಿ ಕರ್ಮಚಾರಿ ಕಾವಲು ಸಮಿತಿ–ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕದ ನೇತೃತ್ವದಲ್ಲಿ ಪೌರ ಕಾರ್ಮಿಕರು ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪೌರ ಕಾರ್ಮಿಕರ ದಿನಾಚರಣೆ ಬಹಿಷ್ಕರಿಸಿದ ಅವರು, ಕೈಗೆ ಕಪ್ಪು ಪಟ್ಟಿ ಧರಿಸಿಕೊಂಡು ಪ್ರತಿಭಟಿಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರ ಪೌರ ಕಾರ್ಮಿಕರ ದಿನವನ್ನು ಅದ್ದೂರಿಯಾಗಿ ಆಚರಿಸಿದರೆ ಸಾಲದು. ಪೌರ ಕಾರ್ಮಿಕರ ಸಮಸ್ಯೆಗಳನ್ನೂ ಬಗೆಹರಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

‘ಆನಂದವಾಡಿಯ ರಮಾಬಾಯಿ ಅಂಬೇಡ್ಕರ್‌ ಹಾಲ್‌ನಲ್ಲಿ ವ್ಯಾಯಾಮ ಶಾಲೆ, ಗ್ರಂಥಾಲಯ ನಿರ್ಮಾಣಕ್ಕಾಗಿ 2023-24ನೇ ಸಾಲಿನ ಕ್ರಿಯಾ ಯೋಜನೆಯಡಿ ₹38 ಲಕ್ಷ ಅನುದಾನ ಮೀಸಲಿಟ್ಟ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಬೇಕು. 154 ಕಾಯಂ ಪೌರ ಕಾರ್ಮಿಕರ ಬಾಕಿ ವೇತನ ಪಾವತಿಸಬೇಕು’ ಎಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ್ ವಾಘೇಲಾ, ‘ಬೆಳಗಾವಿ ಪಾಲಿಕೆಯಲ್ಲಿ ಈಗ 1,350 ಪೌರ ಕಾರ್ಮಿಕರು ದುಡಿಯುತ್ತಿದ್ದೇವೆ. ಈ ಪೈಕಿ 540 ಕಾಯಂ ಪೌರ ಕಾರ್ಮಿಕರಿದ್ದೇವೆ. ಉಳಿದವರ ಸೇವೆಯನ್ನು ಸರ್ಕಾರ ಕಾಯಂಗೊಳಿಸಬೇಕು. ಹುಬ್ಬಳ್ಳಿ-ಧಾರವಾಡ, ಬೆಂಗಳೂರು, ಮೈಸೂರು ಪಾಲಿಕೆಗಳ ಮಾದರಿಯಲ್ಲಿ ಇಲ್ಲಿಯೂ ಪೌರ ಕಾರ್ಮಿಕರಿಗೆ ಬೆಳಗಿನ ಉಪಾಹಾರ ನೀಡಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ವಿಜಯ ನೀರಗಟ್ಟಿ, ಮುನಿಸ್ವಾಮಿ ಭಂಡಾರಿ, ಷಣ್ಮುಖ ಆದಿಯಂದ್ರ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.