ADVERTISEMENT

ಗಡಿ ಕನ್ನಡಿಗರ ಅಭಿವೃದ್ಧಿಗೆ ವಿಶೇಷ ಯೋಜನೆ: ಬಸವರಾಜ ಬೊಮ್ಮಾಯಿ

ರಾಮದುರ್ಗ: ₹ 671.28 ಕೋಟಿ ವೆಚ್ಚದ ಕಾಮಗಾರಿಗಳ ಭೂಮಿಪೂಜೆ ನೆರವೇರಿಸಿದ ಸಿ.ಎಂ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2022, 11:26 IST
Last Updated 2 ಡಿಸೆಂಬರ್ 2022, 11:26 IST
ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ದೀಪ ಬೆಳಗಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಸಮಾರಂಭದಲ್ಲಿ ದೀಪ ಬೆಳಗಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ರಾಮದುರ್ಗ (ಬೆಳಗಾವಿ): 'ಗಡಿ ಕನ್ನಡಿಗರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಎರಡು ವಿಶೇಷ ಯೋಜನೆಗಳನ್ನು ಜಾರಿಗೊಳಿಸಿದ್ದು, ಇದೇ ವರ್ಷ ಕಾರ್ಯಗತ ಮಾಡುತ್ತೇವೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಸಂನ್ಮೂಲ ಇಲಾಖೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಶ್ರಯದಲ್ಲಿ ರಾಮದುರ್ಗ ತಾಲ್ಲೂಕಿನ ಸಾಲಹಳ್ಳಿಯಲ್ಲಿ ಶುಕ್ರವಾರ ₹ 671.28 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

'ಮಹಾರಾಷ್ಟ್ರ, ತಮಿಳುನಾಡು, ಗೋವಾ, ತೆಲಂಗಾಣ ಸೇರಿದಂತೆ ಎಲ್ಲ ಗಡಿಭಾಗದಲ್ಲಿರುವ 1,800 ಗ್ರಾಮ ಪಂಚಾಯಿತಿಗಳನ್ನು ಅಭಿವೃದ್ಧಿಪಡಿಸುವ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ರಸ್ತೆಗಳ ಸುಧಾರಣೆ, ಕುಡಿಯುವ ನೀರಿಗಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ' ಎಂದರು.

ADVERTISEMENT

ಹೊರರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಅಲ್ಲಿನ ಸರ್ಕಾರಗಳು ಕಡೆಗಣಿಸಿವೆ. ಗಡಿ ಒಳಗಿನ ಹಾಗೂ ಹೊರಗಿನ ಎಲ್ಲ ಕನ್ನಡ ಶಾಲೆಗಳ ಅಭಿವೃದ್ಧಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ₹100 ಕೋಟಿ ನೀಡುತ್ತೇನೆ. ಈ ಕೆಲಸ ಕೂಡ ಇದೇ ವರ್ಷ ಆಗಲಿದೆ' ಎಂದರು.

'ಕನ್ನಡಿಗರ ಅಭಿವೃದ್ಧಿ ಹಾಗೂ ರಕ್ಷಣೆ ಸರ್ಕಾರದ ಜವಾಬ್ದಾರಿ. ಕನ್ನಡಿಗರು ವಿಶ್ವದ ಯಾವುದೇ ಮೂಲೆಯಲ್ಲಿರಲಿ ಅಥವಾ ಯಾವುದೇ ರಾಜ್ಯದಲ್ಲಿರಲಿ ಅವರ ಅಭಿವೃದ್ಧಿಗೆ ಬದ್ಧ' ಎಂದೂ ಹೇಳಿದರು.

ಗೋವಾದಲ್ಲಿ ₹10 ಕೋಟಿ‌ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಮಾಡಲಾಗುತ್ತಿದ್ದು, ಜಾಗ ಕೇಳಲಾಗಿದೆ. ಮಹಾರಾಷ್ಟ್ರದ ಸೊಲ್ಲಾಪುರ ಹಾಗೂ ಕೇರಳದ ಕಾಸರಗೋಡಿನಲ್ಲಿ ಕೂಡ ತಲಾ ₹ 10 ಕೋಟಿಯಲ್ಲಿ ಕನ್ನಡ ಭವನ ನಿರ್ಮಿಸಲಾಗುವುದು' ಎಂದು ಹೇಳಿದರು.

ತಡೆಗೋಡೆ ನಿರ್ಮಾಣ; ಕೆರೆಗೆ ನೀರು:
ರಾಮದುರ್ಗ ತಾಲ್ಲೂಕಿನ ಕೆಲ ಗ್ರಾಮಗಳು ಪದೇಪದೇ ಪ್ರವಾಹದಿಂದ ಬಾಧಿತಗೊಳ್ಳುವುದನ್ನು ತಪ್ಪಿಸಲು ಮಲಪ್ರಭಾ ನದಿತೀರದಲ್ಲಿ ತಡೆಗೋಡೆ ನಿರ್ಮಿಸಲು ಸರ್ಕಾರ ಮುಂದಾಗಿದೆ.

ಏತ ನೀರಾವರಿಯಿಂದ ವಂಚಿತಗೊಂಡಿರುವ 19 ಗ್ರಾಮಗಳ ಕೆರೆ ತುಂಬಿಸುವ ಯೋಜನೆ ಜಾರಿಗೆ ತರಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಅವರು ನಿರಂತರ ಒತ್ತಡ ತಂದಿದ್ದಾರೆ.

ಕ್ಷೇತ್ರದ ಬಗ್ಗೆ ಅವರ ಕಳಕಳಿಯನ್ನು ಅರಿತುಕೊಂಡು ಅವರ ಒತ್ತಾಯದಂತೆ 19 ಕೆರೆಗಳನ್ನು ತುಂಬಿಸುವ ಯೋಜನೆಗೆ ಬಜೆಟ್ ನಲ್ಲಿ ಅನುದಾನ ತೆಗೆದಿರಿಸಲಾಗುವುದು' ಎಂದು ಮುಖ್ಯಮಂತ್ರಿ ಘೋಷಿಸಿದರು.

'ಕಾಯಕ, ಸ್ತ್ರೀ ಸಾಮರ್ಥ್ಯ ಯೋಜನೆ ಮೂಲಕ ಎಲ್ಲ ವರ್ಗದ ಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ ನೆರವು ನೀಡುತ್ತಿದೆ.
ನಮ್ಮ ಕ್ಲಿನಿಕ್, ಶಾಲಾ ಕೊಠಡಿಗಳ ನಿರ್ಮಾಣ, ಆರೋಗ್ಯ ಸೌಲಭ್ಯ ಹೆಚ್ಚಳ ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿದ ಅವರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಆದ್ಯತೆ ನೀಡಲಾಗಿದೆ' ಎಂದರು.

'ಪ್ರಜಾಪ್ರಭುತ್ವ ಎಂದರೆ ಮತ ಹಾಕುವುದು ಮಾತ್ರವಲ್ಲ; ದೇಶ ಕಟ್ಟುವುದರಲ್ಲಿ ಸರ್ವರ ಪಾಲ್ಗೊಳ್ಳುವಿಕೆಯು ಪ್ರಜಾಪ್ರಭುತ್ವದ ಶಕ್ತಿಯಾಗಿದೆ' ಎಂದರು.

ಬೆಳಗಾವಿ ಕರ್ನಾಟಕದ ಕಿರೀಟ:

'ಬೆಳಗಾವಿಯು ರಾಜ್ಯದ ಕಿರೀಟವಿದ್ದಂತೆ. ಈ ಜಿಲ್ಲೆಯ ನೀರಾವರಿ, ಕೈಗಾರಿಕೋದ್ಯಮ, ಕೃಷಿ ಅಭಿವೃದ್ಧಿಗೆ ಸರ್ಕಾರ ನೆರವು ನೀಡಲಿದೆ' ಎಂದು ಭರವಸೆ ನೀಡಿದರು.

'ಉತ್ತರ ಕರ್ನಾಟಕದ ಸಮಗ್ರ ಪ್ರಗತಿಗೆ ಮುಂಬರುವ ದಿನಗಳಲ್ಲಿ ಸರ್ಕಾರ ವಿಶೇಷ ಯೋಜನೆ ಪ್ರಕಟಿಸಲಿದೆ' ಎಂದೂ ಹೇಳಿದರು.

'ಮಹಾದೇವಪ್ಪ ಯಾದವಾಡ ಜನಪ್ರಿಯ ಅಲ್ಲ; ಜನೋಪಯೋಗಿ ಶಾಸಕ' ಎಂದು ಬಣ್ಣಿಸಿದರು.

ಬಸವೇಶ್ವರ ಪುತ್ಥಳಿ ಅನಾವರಣ:

ಇದಕ್ಕೂ ಮುಂಚೆ ರಾಮದುರ್ಗದ ಬಸವೇಶ್ವರ ವೃತ್ತದಲ್ಲಿ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.