ADVERTISEMENT

ಚಿಕ್ಕೋಡಿ: ತಾಯಿ, ಮಕ್ಕಳ ಆಸ್ಪತ್ರೆ ಉದ್ಘಾಟಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2024, 13:01 IST
Last Updated 16 ಅಕ್ಟೋಬರ್ 2024, 13:01 IST
ಚಿಕ್ಕೋಡಿ ಪಟ್ಟಣದ ಹೊರ ವಲಯದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕೋಡಿ ತಾಲ್ಲೂಕು ಘಟಕದಿಂದ ತಹಶೀಲ್ದಾರ್ ಚಿದಂಬರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು
ಚಿಕ್ಕೋಡಿ ಪಟ್ಟಣದ ಹೊರ ವಲಯದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಚಿಕ್ಕೋಡಿ ತಾಲ್ಲೂಕು ಘಟಕದಿಂದ ತಹಶೀಲ್ದಾರ್ ಚಿದಂಬರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು   

ಚಿಕ್ಕೋಡಿ: ‘5ಎಕರೆ ಪ್ರದೇಶದಲ್ಲಿ ₹20 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ 100 ಹಾಸಿಗೆಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಶೀಘ್ರದಲ್ಲಿ ಉದ್ಘಾಟನೆ ಮಾಡಿ ಬಡ ಜನರಿಗೆ ಅನುಕೂಲ ಮಾಡಿಕೊಡಬೇಕು. ಇಲ್ಲದಿದ್ದರೆ ನೂತನ ಕಟ್ಟಡದ ಎದುರು ಧರಣಿ ಮಾಡಲಾಗುವುದು’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಂಚಾಲಕ ಸಂಜು ಬಡಿಗೇರ ಒತ್ತಾಯಿಸಿದರು.

ಪಟ್ಟಣದ ಮಿನಿವಿಧಾನಸೌಧ ಎದುರು ಬುಧವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿ, ‘ಸಾವಿರಾರು ರೂಪಾಯಿ ವೆಚ್ಚ ಮಾಡಿ ಖಾಸಗಿ ಆಸ್ಪತ್ರೆಗಳಲ್ಲಿ ಹೆರಿಗೆ ಮಾಡಿಸಲು ಆರ್ಥಿಕವಾಗಿ ಹಿಂದುಳಿದವರು ಹೆಣಗಾಡುವಂತಾಗಿದೆ. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವೇ ಆಸ್ಪತ್ರೆ ಉದ್ಘಾಟನೆ ವಿಳಂಬಕ್ಕೆ ಕಾರಣವಾಗಿದೆ’ ಎಂದರು.

ಸಾಮಾಜಿಕ ಕಾರ್ಯಕರ್ತ ಚಂದ್ರಕಾಂತ ಹುಕ್ಕೇರಿ ಮಾತನಾಡಿ, ‘100 ಹಾಸಿಗೆಯುಳ್ಳ ಆಸ್ಪತ್ರೆ ಲೋಕಾರ್ಪಣೆಗೊಂಡರೆ ಬಡವರಿಗೆ ಅನುಕೂಲವಾಗುತ್ತದೆ. ಕಟ್ಟಡ ಕಾಮಗಾರಿ ಪೂರ್ಣಗೊಂಡಿದ್ದರೂ ಲೋಕಾರ್ಪಣೆ ಮಾಡದೇ ವಿಳಂಬ ಮಾಡಲಾಗುತ್ತಿದೆ. ಕೂಡಲೇ ಸರ್ಕಾರ ಕ್ರಮ ಕೈಗೊಂಡು ಸ್ಥಳೀಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೇಳಿದರು.

ADVERTISEMENT

ತಹಶೀಲ್ದಾರ್‌ ಚಿದಂಬರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಲಾಯಿತು. ದುಂಡಪ್ಪ ಬಡಿಗೇರ, ಅಮೂಲ ನಾವಿ, ಸಂಜು ಹಿರೇಮಠ, ಬಸವರಾಜ ಸಾಜನೆ, ಖಾನಪ್ಪ ಬಾಡಕರ ಮುಂತಾದವರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.