ADVERTISEMENT

ಪೀರನವಾಡಿಯಲ್ಲಿ ವರ್ಷದೊಳಗೆ ಬಯಲು ರಂಗಮಂದಿರ ನಿರ್ಮಾಣ: ಶಾಸಕ ಅಭಯ ಪಾಟೀಲ ಭರವಸೆ

ಗಾಂಧಿ ಭವನ ಉದ್ಘಾಟನಾ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 27 ಜೂನ್ 2022, 15:26 IST
Last Updated 27 ಜೂನ್ 2022, 15:26 IST
ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗಾಂಧಿ ಭವನ ಉದ್ಘಾಟಿಸಿದರು – ಪ್ರಜಾವಾಣಿ ಚಿತ್ರ
ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಗಾಂಧಿ ಭವನ ಉದ್ಘಾಟಿಸಿದರು – ಪ್ರಜಾವಾಣಿ ಚಿತ್ರ   

ಬೆಳಗಾವಿ: ‘ನೂತನ ಗಾಂಧಿ ಭವನ ಆವರಣದಲ್ಲಿ ಒಂದು ವರ್ಷದೊಳಗೆ ಬಯಲು ರಂಗಮಂದಿರ ಮತ್ತು ಡಿಜಿಟಲ್ ಲೈಬ್ರರಿ ನಿರ್ಮಿಸಲಾಗುವುದು’ ಎಂದು ದಕ್ಷಿಣ ಶಾಸಕ ಅಭಯ ಪಾಟೀಲ ಭರವಸೆ ನೀಡಿದರು.

ತಾಲ್ಲೂಕಿನ ಪೀರನವಾಡಿಯಲ್ಲಿ ಸೋಮವಾರ ನಡೆದ ಗಾಂಧಿ ಭವನ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಬೆಳಗಾವಿಯಲ್ಲಿ ನಡೆದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ಅಧಿವೇಶನದಲ್ಲಿಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದರು. ಆ ಐತಿಹಾಸಿಕ ಕ್ಷಣಕ್ಕೆ 100ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಈ ಭವನದಲ್ಲಿ ಸರ್ಕಾರದಿಂದ ಒಂದು ವರ್ಷದವರೆಗೆ ನಿರಂತರವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.

ADVERTISEMENT

ಗಾಂಧಿ ಭವನ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ‘ರಾಷ್ಟ್ರಪಿತ ಗಾಂಧೀಜಿ ಅವರ ಸತ್ಯ, ಶಾಂತಿ, ಅಹಿಂಸಾ ಗುಣಗಳು ಯುವ ಸಮುದಾಯಕ್ಕೆ ಪ್ರೇರಕವಾಗಿವೆ. ರಾಮ ರಾಜ್ಯ, ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದ ಮಹಾತ್ಮ ಗಾಂಧಿ ಅವರ ಆಶಯಗಳನ್ನು ನಮ್ಮ ಸರ್ಕಾರ ನನಸಾಗಿಸುವಲ್ಲಿ ನಿರತವಾಗಿದೆ’ ಎಂದು ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಚನ್ನಮ್ಮನ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಧಾರವಾಡ ಕಚೇರಿ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ್ ಡೊಳ್ಳಿನ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.