ಬೆಳಗಾವಿ: 'ರೈತರು ಬರಗಾಲದಿಂದ ತತ್ತರಿಸಿದ್ದಾರೆ. ಅವರ ಸಂಕಷ್ಟಕ್ಕೆ ಸ್ಪಂದಿಸುವ ಬದಲು ಕಾಂಗ್ರೆಸ್ ಸರ್ಕಾರ ರಾಜಕಾರಣ ಮಾಡುತ್ತಿದೆ. ಅಲ್ಪಸಂಖ್ಯಾತರನ್ನು ಒಲೈಸುವುದಕ್ಕೆ ಮಾತ್ರ ಆದ್ಯತೆ ನೀಡಿದೆ' ಎಂದು ಬಿಜೆಪಿ ರಾಜ್ಯ ಘಟಕದ ಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿ ಕಾರಿದರು.
ನಗರದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ರೈತರಿಗೆ ಪರಿಹಾರ ಕೊಡುವ ಪ್ರಾಮಾಣಿಕ ಕಳಕಳಿ ಸರ್ಕಾರಕ್ಕೆ ಇಲ್ಲ. ರೈತರಿಗೆ ಪರಿಹಾರ ಕೊಡಲು ಖಜಾನೆಯಲ್ಲಿ ಹಣ ಇಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಅದರೆ, ಅಲ್ಪಸಂಖ್ಯಾತರಿಗೆ ₹10 ಸಾವಿರ ಕೋಟಿ ಹಣ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಅವರು ಘೋಷಣೆ ಮಾಡಿದ್ದಾರೆ. ಅಲ್ಲದೇ ಎಸ್ಸಿಪಿ, ಟಿಎಸ್ಪಿ ಅನುದಾನವನ್ನು ಬೇರೆ ಕಡೆ ವರ್ಗಾಯಿಸಿದ್ದಾರೆ. ಈ ಬಗ್ಗೆ ಸದನದಲ್ಲಿ ಪ್ರಶ್ನಿಸುತ್ತೇನೆ' ಎಂದರು.
'ಈಗಾಗಲೇ ರಾಜ್ಯದಲ್ಲಿ 50ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ನಮಗೆ 136 ಶಾಸಕರ ಬೆಂಬಲವಿದೆ ಎಷ್ಟು ರೈತರು ಆತ್ಮಹತ್ಯೆ ಮಾಡಿಕೊಂಡರೂ ಕವಡೆ ಕಾಸಿನ ಕಿಮ್ಮತ್ತು ಕೊಡುವುದಿಲ್ಲ ಎಂಬಂತೆ ಮಂತ್ರಿಗಳು ವರ್ತಿಸುತ್ತಿದ್ದಾರೆ. ಇದೆಲ್ಲವನ್ನು ಸದನದಲ್ಲಿ ನಾವು ಪ್ರಶ್ನಿಸುತ್ತೇವೆ' ಎಂದರು.
'ಬಿಜೆಪಿ ಕಾರ್ಯಕರ್ತ ಪೃಥ್ವಿ ಸಿಂಗ್ ಮೇಲಿನ ಹಲ್ಲೆ ಬಗ್ಗೆ ನಿನ್ನೆ ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡಿದ್ದೇನೆ. ಅಧಿವೇಶನ ನಡೆಯುವ ಸಂದರ್ಭದಲ್ಲೆಯೇ ಬಿಜೆಪಿಯ ದಲಿತ ಮುಖಂಡನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಆಗಿದೆ. ಪೊಲೀಸ್ ಅಧಿಕಾರಿಗಳು ಕೊಲೆ ಯತ್ನ ಪ್ರಕರಣ ದಾಖಲಿಸಿಲ್ಲ. ಇದು ಅನ್ಯಾಯ’ ಎಂದರು.
'ಸಚಿವ ಪ್ರಿಯಾಂಕ್ ಖರ್ಗೆ ಅವರ ವಿಚಾರದಲ್ಲಿ ಮಣಿಕಂಠ ರಾಠೋಡ ಬಗ್ಗೆ ಪೊಲೀಸರು ಏನೇ ವರದಿ ಕೊಟ್ಟಿರಬಹುದು. ಪೊಲೀಸರು ಹೇಳಿರುವುದು ಎಲ್ಲವೂ ಸತ್ಯ ಎಂದು ನಾನು ನಂಬುವುದಿಲ್ಲ. ಪಕ್ಷದ ಅಧ್ಯಕ್ಷನಾಗಿ ನಮ್ಮ ಕಾರ್ಯಕರ್ತರ ರಕ್ಷಣೆ ನನ್ನ ಜವಾಬ್ದಾರಿ' ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.