ಬೆಳಗಾವಿ: ‘ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ 39 ವಸತಿ ಶಾಲೆಗಳಲ್ಲಿ 2023–24ನೇ ಸಾಲಿನಲ್ಲಿ ಹೆಚ್ಚುವರಿಯಾಗಿ 141 ವಿದ್ಯಾರ್ಥಿಗಳಿಗೆ ನಿಯಮ ಉಲ್ಲಂಘಿಸಿ ಪ್ರವೇಶ ಕಲ್ಪಿಸಿದ ಇಬ್ಬರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಸಮಾಜ ಕಲ್ಯಾಣ ಸಚಿವರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ’ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಆಗ್ರಹಿಸಿದರು.
ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾಗಿದ್ದ ಲಕ್ಷ್ಮಣ ಬಬಲಿ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ ಅವರು ಪರೀಕ್ಷೆಯಲ್ಲಿ ಗಳಿಸಿದ ಅಂಕ ಮತ್ತು ಜಾತಿ ಪರಿಗಣಿಸದೆ ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಿದ್ದಾರೆ. ಈ ಬಗ್ಗೆ ಇಲಾಖೆ ವಿಚಾರಣೆ ನಡೆಸಿ, ಕ್ರಮ ವಹಿಸುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಮತ್ತು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘವು 40 ದಿನಗಳ ಹಿಂದೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ವರದಿ ಸಲ್ಲಿಸಿದೆ. ಇಬ್ಬರೂ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ದೃಢಪಟ್ಟಿದ್ದರಿಂದ ತಕ್ಷಣವೇ ಸೇವೆಯಿಂದ ಅಮಾನತುಗೊಳಿಸಬೇಕು’ ಎಂದು ಒತ್ತಾಯಿಸಿದರು.
‘ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸದೆ ವಿಚಾರಣೆ ನಡೆಸಿದರೆ, ಅವರು ಸಾಕ್ಷಿಗಳ ಮೇಲೆ ಒತ್ತಡ ಹೇರಬಹುದು. ಅಲ್ಲದೆ, ದಾಖಲೆಗಳನ್ನು ತಿರುಚಬಹುದು’ ಎಂದು ಆರೋಪಿಸಿದ ಅವರು, ‘ವಸತಿ ಶಾಲೆಗೆ ಪ್ರವೇಶ ಕಲ್ಪಿಸಲು ಪ್ರತಿ ವಿದ್ಯಾರ್ಥಿಯಿಂದ ತಲಾ ₹20 ಸಾವಿರದಿಂದ ₹40 ಸಾವಿರ ಪಡೆಯಲಾಗಿದೆ. ಸರ್ಕಾರಕ್ಕೆ ಸಲ್ಲಿಕೆಯಾದ ವರದಿಯಲ್ಲಿ ಈ ಅಂಶವನ್ನೇ ಪ್ರಸ್ತಾಪಿಸಿಲ್ಲ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.