ADVERTISEMENT

‘ಗ್ಯಾರಂಟಿಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಶ್ರಮಿಸಿ’

ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕಚೇರಿ ಉದ್ಘಾಟನೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2024, 6:55 IST
Last Updated 19 ಸೆಪ್ಟೆಂಬರ್ 2024, 6:55 IST
ಬೆಳಗಾವಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಮಟ್ಟದ ನೂತನ ಕಚೇರಿಯನ್ನು ಸಚಿವ ಸತೀಶ ಜಾರಕಿಹೊಳಿ ಹಾಗೂ ಎಚ್.ಎಂ.ರೇವಣ್ಣ ಉದ್ಘಾಟಿಸಿದರು. ರಾಹುಲ್‌ ಶಿಂಧೆ, ವಿನಯ ನಾವಲಗಟ್ಟಿ, ಮೊಹಮ್ಮದ್‌ ರೋಷನ್‌ ಭಾಗವಹಿಸಿದ್ದರು
ಬೆಳಗಾವಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಮಟ್ಟದ ನೂತನ ಕಚೇರಿಯನ್ನು ಸಚಿವ ಸತೀಶ ಜಾರಕಿಹೊಳಿ ಹಾಗೂ ಎಚ್.ಎಂ.ರೇವಣ್ಣ ಉದ್ಘಾಟಿಸಿದರು. ರಾಹುಲ್‌ ಶಿಂಧೆ, ವಿನಯ ನಾವಲಗಟ್ಟಿ, ಮೊಹಮ್ಮದ್‌ ರೋಷನ್‌ ಭಾಗವಹಿಸಿದ್ದರು   

ಬೆಳಗಾವಿ: ‘ಜನರಿಗೆ ನೆರವಾಗುವ ನಿಟ್ಟಿನಲ್ಲಿ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮತ್ತು ಸಮಿತಿ ಪದಾಧಿಕಾರಿಗಳು ಶ್ರಮಿಸಬೇಕು. ಒಬ್ಬ ಫಲಾನುಭವಿಯೂ ಯೋಜನೆಯಿಂದ ವಂಚಿತವಾಗಬಾರದು’ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು.

ಇಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಮಟ್ಟದ ನೂತನ ಕಚೇರಿಯನ್ನು ಬುಧವಾರ  ಉದ್ಘಾಟಿಸಿದ ನಂತರ, ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸಮಾಜದಲ್ಲಿ ಪ್ರತಿಯೊಬ್ಬರಿಗೂ ಈ ಯೋಜನೆಯ ಪ್ರಯೋಜನ ತಲುಪಬೇಕು ಎಂಬುದು ನಮ್ಮ ಉದ್ದೇಶ. ಹಾಗಾಗಿ ಈ ಕಚೇರಿ ಆರಂಭಿಸಿದ್ದೇವೆ. ಗ್ಯಾರಂಟಿಗಳಿಗೆ ಸಂಬಂಧಿಸಿ ಯಾವುದೇ ಗೊಂದಲವಿದ್ದರೆ ಜನರು ಇಲ್ಲಿಗೆ ಸಂಪರ್ಕಿಸಬಹುದು’ ಎಂದರು.

ADVERTISEMENT

‘ಕಾಂಗ್ರೆಸ್‌ ಸರ್ಕಾರ ಈಗ ಮಾತ್ರವಲ್ಲ; ಈ ಹಿಂದೆಯೂ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಬ್ಬರೂ ಸರ್ಕಾರಿ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಕೋರಿದರು.

ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್.ಪಾಟೀಲ, ‘ಸಮಾಜದಲ್ಲಿ ಪ್ರತಿಯೊಬ್ಬರಿಗೂ ನೆರವಾಗುವ ದಿಸೆಯಿಂದ ಕಾಂಗ್ರೆಸ್‌ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಎಲ್ಲರ  ಸಹಕಾರ ಅಗತ್ಯವಿದೆ’ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ‘ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಒಂದು ವರ್ಷವಾಗಿದೆ. ಇವುಗಳಿಗೆ ಸಂಬಂಧಿಸಿ ಯಾವುದೇ ದೂರುಗಳಿದ್ದರೆ, ಜಿಲ್ಲಾ ಮತ್ತು ತಾಲ್ಲೂಕು ಹಂತದ ಅಧಿಕಾರಿಗಳು ಸ್ಪಂದಿಸಬೇಕು. ಸಮಿತಿಯವರು ತಾಲ್ಲೂಕು ಹಂತದಲ್ಲಿ ಜನರೊಂದಿಗೆ ಸಂವಾದ ನಡೆಸಿ, ಗ್ಯಾರಂಟಿ ಯೋಜನೆ ಲಾಭವನ್ನು ಪ್ರತಿಯೊಬ್ಬರಿಗೂ ತಲುಪಿಸಲು ಕ್ರಮ ವಹಿಸಬೇಕು’ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.