ADVERTISEMENT

ಗೋಕಾಕ ಆಸ್ಪತ್ರೆ ಮೇಲ್ದರ್ಜೆಗೆ: ಲಖನ್‌

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2022, 15:50 IST
Last Updated 29 ಏಪ್ರಿಲ್ 2022, 15:50 IST
ಗೋಕಾಕದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳವನ್ನು ವಿಧಾನಪರಿಷತ್‌ ಸದಸ್ಯ ಲಖನ್‌ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉದ್ಘಾಟಿಸಿದರು
ಗೋಕಾಕದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳವನ್ನು ವಿಧಾನಪರಿಷತ್‌ ಸದಸ್ಯ ಲಖನ್‌ ಜಾರಕಿಹೊಳಿ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಉದ್ಘಾಟಿಸಿದರು   

ಗೋಕಾಕ: ‘ಇಲ್ಲಿನ ಸಾರ್ವಜನಿಕ ಆಸ್ಪತ್ರೆಯನ್ನು 250 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸಲಾಗುವುದು’ ಎಂದು ವಿಧಾನಪರಿಷತ್‌ ಸದಸ್ಯ ಲಖನ್‌ ಜಾರಕಿಹೊಳಿ ತಿಳಿಸಿದರು.

ಆಸ್ಪತ್ರೆ ಆವರಣದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಉಚಿತ ಆರೋಗ್ಯ ಮೇಳ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಜಾಗೃತಿ ಅಭಿಯಾನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು.

‘ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಉತ್ತಮ ಕಾರ್ಯ ಮಾಡುತ್ತಿದೆ. ಈ ಸರ್ಕಾರಿ ಆಸ್ಪತ್ರೆ ಉತ್ತಮವಾಗಿ ಕಾರ್ಯನಿರ್ವಹಿಸಲು ಶಾಸಕ ರಮೇಶ ಜಾರಕಿಹೊಳಿ ಅವರು ವಹಿಸಿದ ಮುತುವರ್ಜಿ ಕಾರಣವಾಗಿದೆ’ ಎಂದು ಹೇಳಿದರು.

ADVERTISEMENT

‘ಎರಡು ವರ್ಷಗಳಲ್ಲಿ ನಗರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡುವ ಕನಸನ್ನು ಶಾಸಕರು ಹೊಂದಿದ್ದಾರೆ’ ಎಂದರು.

‘ಕೊರೊನಾ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಎಲ್ಲ ಹಂತದ ಸಿಬ್ಬಂದಿಯ ಕಾರ್ಯ ಶ್ಲಾಘನೀಯವಾದುದು’ ಎಂದು ತಿಳಿಸಿದರು.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಸರ್ಕಾರವು ಜನರ ಆರೋಗ್ಯದ ದೃಷ್ಟಿಯಿಂದಯಿಂದ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ದೇಹ ಮತ್ತು ನೇತ್ರ ದಾನ ಮಾಡಿದವರನ್ನು ಗೌರವಿಸಲಾಯಿತು.

ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ ಮತ್ತು ಉಪಾಧ್ಯಕ್ಷ ಬಸವರಾಜ ಆರೆನ್ನವರ, ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೊಳ, ಮೂಡಲಗಿ ತಹಶೀಲ್ದಾರ್ ಡಿ.ಜಿ. ಮಹಾತ್, ತಾ.ಪಂ. ಇಒ ಮುರಳೀಧರ ದೇಶಪಾಂಡೆ, ಎಫ್.ಜಿ. ಚನ್ನಣ್ಣವರ, ಎಡಿಎಚ್‌ಒ ಡಾ.ಶರಣಪ್ಪ ಗಡೇದ, ಡಾ.ಎಂ.ವಿ. ಕಿವಡಸಣ್ಣವರ, ಡಿವೈಎಸ್ಪಿ ಮನೋಜಕುಮಾರ ನಾಯಿಕ, ಡಾ.ಆರ್.ಎಸ್. ಬೆಣಚಿನಮರಡಿ, ಟಿಎಚ್‌ಒ ಡಾ.ಮುತ್ತಣ್ಣ ಕೊಪ್ಪದ, ಮುಖ್ಯ ವೈದ್ಯಾಧಿಕಾರಿ ಡಾ.ರವೀಂದ್ರ ಅಂಟಿನ, ಪ್ರಭಾರ ಪೌರಾಯುಕ್ತ ಶಿವಾನಂದ ಹಿರೇಮಠ, ಸಿಡಿಪಿಒಗಳಾದ ಜಯಶ್ರೀ ಶೀಲವಂತ ಮತ್ತು ವೈ.ಕೆ. ಗದಾಡಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.