ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ಪಟ್ಟಣ ಪಂಚಾಯಿತಿ ಸದಸ್ಯ ನಾಗರಾಜ ಅಸುಂಡಿ ಅವರನ್ನು ಅಪಹರಣ ಮಾಡಿದ ಹಿನ್ನೆಲೆಯಲ್ಲಿ, ಸೆ.3ರಂದು ನಡೆಯಬೇಕಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷ– ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್‌ನ ಧಾರವಾಡ ಪೀಠ ತಡೆ ನೀಡಿದೆ.
ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಯ 9 ಸದಸ್ಯರಿದ್ದಾರೆ. ಐವರು ಕಾಂಗ್ರೆಸ್ ಹಾಗೂ ನಾಲ್ವರು ಪಕ್ಷೇತರರು ಸೇರಿ ಕಾಂಗ್ರೆಸ್ ಬಲವೂ 9ಕ್ಕೆ ಏರಿದೆ. ಬಿಜೆಪಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಕಾಂಗ್ರೆಸ್‌ಗೆ ಶಾಸಕ ಬಾಬಾಸಾಹೇಬ ಪಾಟೀಲ ಅವರ ಮತಗಳೂ ಇವೆ. ಹೀಗಾಗಿ, ಎರಡೂ ಪಕ್ಷಗಳಲ್ಲಿ ತಲಾ 10 ಮತಗಳಿವೆ.
‘ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ. ಒಬ್ಬ ಬಿಜೆಪಿ ಸದಸ್ಯರನ್ನು ಅಪಹರಣ ಮಾಡಿದರೆ ಗೆಲ್ಲಬಹುದು ಎಂಬ ಉದ್ದೇಶದಿಂದ ಕಾಂಗ್ರೆಸ್ ಈ ಕೃತ್ಯ ಎಸಗಿದೆ’ ಎಂದು ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ.
ಇದೇ ವಿಚಾರವಾಗಿ ಕಳೆದ ನಾಲ್ಕು ದಿನಗಳಿಂದ ಬಿಜೆಪಿ ನಿರಂತರ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಸದಸ್ಯನನ್ನು ಹುಡುಕಿಕೊಂಡು ಬರಬೇಕು ಅಲ್ಲಿಯವರೆಗೂ ಚುನಾವಣೆ ಮುಂದೂಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಚುನಾವಣೆಗೆ ತಡೆಯೊಡ್ಡಿ ಸೋಮವಾರ ಆದೇಶ ಹೊರಡಿಸಿದೆ.
ಸಂಸದರು ಭಾಗಿ– ಪ್ರತಿಭಟನೆಗೆ ಕಿಚ್ಚು: ಸೋಮವಾರ ನಡೆದ ಪ್ರತಿಭಟನೆಯಲ್ಲಿ ಸಂಸದರಾದ ಜಗದೀಶ ಶೆಟ್ಟರ್, ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಸ ಪಾಟೀಲ ಕೂಡ ಪಾಲ್ಗೊಂಡರು. ಪ್ರತಿಭಟನೆಯಲ್ಲಿ ಪಾಲ್ಗೊಂಡ ನಾಗರಾಜ ಅವರ ತಂದೆ ಬಸವರಾಜ ಅವರು ಕೆಲಕಾಲ ಭಾವುಕರಾಗಿ ಕಣ್ಣೀರು ಹಾಕಿದರು.
ನಾಯಕರ ಪಾಲ್ಗೊಳ್ಳುವಿಕೆಯಿಂದ ಬಿಜೆಪಿ ಬಲ ಮತ್ತಷ್ಟು ಹೆಚ್ಚಿದೆ. ಸೋಮವಾರ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಕೂಡ ಪಾಲ್ಗೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.