ಬೆಳಗಾವಿ:ಜಿಲ್ಲೆಯಾದ್ಯಂತ ಗುರುವಾರವೂ ಬಿರುಸಿನ ಮಳೆ ಮುಂದುವರಿದಿದೆ. ನದಿಗಳು ಮೈದುಂಬಿ ಹರಿಯುತ್ತಿದ್ದು, ಜಲಾಶಯಗಳಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ.
ಹುಕ್ಕೇರಿ ತಾಲ್ಲೂಕಿನ ಶಿರೂರು ಬಳಿ ಮಾರ್ಕಂಡೇಯ ನದಿಗೆ ನಿರ್ಮಿಸಲಾಗಿರುವ ಜಲಾಶಯವು ಬಹುತೇಕ ಭರ್ತಿಯಾಗಿದೆ. 3.69 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ 3.40 ಟಿಎಂಸಿ ಅಡಿಗಳಷ್ಟು ನೀರು ಭರ್ತಿಯಾಗಿದೆ. 9,500 ಕ್ಯುಸೆಕ್ ನೀರು ಹರಿದುಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಜಲಾಶಯದಿಂದ ಹೊರಬಿಡಲಾಗುತ್ತಿದೆ.
ಘಟಪ್ರಭಾ ನದಿಗೂ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಹಿಡಕಲ್ ಬಳಿ ಜಲಾಶಯಕ್ಕೆ 43,402 ಕ್ಯುಸೆಕ್ ನೀರು ಹರಿದುಬರುತ್ತಿದೆ. 51 ಟಿಎಂಸಿ ಅಡಿ ಸಾಮರ್ಥ್ಯದ ಜಲಾಶಯದಲ್ಲಿ 36 ಟಿಎಂಸಿ ಅಡಿಗಳಷ್ಟು ನೀರು ಭರ್ತಿಯಾಗಿದೆ.
ಖಾನಾಪುರ ಹಾಗೂ ಸುತ್ತಮುತ್ತಲಿನ ಅರಣ್ಯ ಪ್ರದೇಶದಲ್ಲಿ ಕಳೆದ 2–3 ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಮಲಪ್ರಭಾ ನದಿಯ ಒಳಹರಿವು ತೀವ್ರ ಹೆಚ್ಚಳಗೊಂಡಿದೆ. 48,821 ಕ್ಯುಸೆಕ್ ನೀರು ಹರಿದುಬರುತ್ತಿದೆ. 37 ಟಿಎಂಸಿ ಅಡಿಗಳ ಸಾಮರ್ಥ್ಯದ ಸವದತ್ತಿಯ ನವಿಲುತೀರ್ಥ ಜಲಾಶಯದಲ್ಲಿ 22.514 ಟಿಎಂಸಿ ಅಡಿಗಳಷ್ಟು ಭರ್ತಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.