ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಕಿತ್ತೂರು ರಾಣಿ ಚನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಗಾಂಧೀಜಿ ಹಾಗೂ ಅಂಬೇಡ್ಕರ್ ಅವರ ಪ್ರತಿಮೆ ಸ್ಥಾಪನೆಗೆ ಗುರುವಾರ ಗುದ್ದಲಿ ಪೂಜೆ ನಡೆಯಲಿದೆ.
ಬೆಳಿಗ್ಗೆ 10.15ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಭಾಪತಿ ಬಸವರಾಜ ಹೊರಟ್ಟಿ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್ ಅವರು ಭಾಗವಹಿಸಲಿದ್ದಾರೆ.
ಹಿಂದಿನ ವರ್ಷ ನಡೆದ ಅಧಿವೇಶನದ ವೇಳೆ, ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಅವಮಾನ ಮಾಡಿದ್ದಾರೆ ಎಂದು ತಕರಾರು ತೆಗೆದಿದ್ದ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದರು. ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಅಲ್ಲದೇ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ಬೇಡಿಕೆ ಮುಂದಿಟ್ಟು, ಈ ವರ್ಷ ನಡೆದ ಮಾದರಿಯಲ್ಲೇ ವಿವಾದ ಸೃಷ್ಟಿಸಿದ್ದರು.
ಆಗ, ಸದನದಲ್ಲಿ ಉತ್ತರ ನೀಡಿದ್ದ ಬೊಮ್ಮಾಯಿ, ‘ಬೆಳಗಾವಿ ನಮ್ಮದು; ಕರ್ನಾಟಕದ ಒಂದಿಂಚೂ ಜಾಗವನ್ನೂ ಬಿಡುವುದಿಲ್ಲ. ಸುವರ್ಣ ಸೌಧದ ಆವರಣದಲ್ಲಿಯೇ ಚನ್ನಮ್ಮ, ರಾಯಣ್ಣ ಪ್ರತಿಮೆಯನ್ನು ಸ್ಥಾಪಿಸುತ್ತೇವೆ’ ಎಂದು ಘೋಷಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.