ADVERTISEMENT

ಕಾಂಗ್ರೆಸ್ ಟಿಕೆಟ್‌ಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಹೋದರ ಲಾಬಿ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2021, 12:33 IST
Last Updated 13 ನವೆಂಬರ್ 2021, 12:33 IST

ಬೆಳಗಾವಿ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಡಿ.10ರಂದು ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಭಾರಿ ಪೈಪೋಟಿ ಕಂಡುಬಂದಿದೆ.

ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿ ಟಿಕೆಟ್‌ಗೆ ಲಾಬಿ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೊದಲಾದವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಸಹೋದರಿಯ ಮೂಲಕವೂ ಹೈಕಮಾಂಡ್‌ ಮೇಲೆ ಒತ್ತಡ ಹಾಕಿಸುತ್ತಿದ್ದಾರೆ. ಪಕ್ಷದ ಜಿಲ್ಲಾ ಘಟಕದಿಂದ ಕೆಪಿಸಿಸಿಗೆ ಶಿಫಾರಸು ಮಾಡಿರುವ ಪಟ್ಟಿಯಲ್ಲೂ ಚನ್ನರಾಜ ಹೆಸರಿದೆ ಎಂದು ಮೂಲಗಳು ತಿಳಿಸಿವೆ. ಹಲವು ತಿಂಗಳಿಂದಲೂ ಕ್ಷೇತ್ರದಲ್ಲಿ ಸಂಚರಿಸಿ ಪರೋಕ್ಷವಾಗಿ ಪ್ರಚಾರ ಆರಂಭಿಸಿದ್ದಾರೆ. ದೀಪಾವಳಿ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರೆಲ್ಲರಿಗೂ ಶುಭಾಶಯ ಪತ್ರ ಕಳುಹಿಸಿದ್ದರು ಎಂದು ತಿಳಿದುಬಂದಿದೆ.

ಹೋದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದಿದ್ದ ವಿವೇಕರಾವ್ ಪಾಟೀಲ ಈ ಬಾರಿ ಕಾಂಗ್ರೆಸ್ ಟೆಕೆಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮುಖಂಡರಾದ ಪ್ರಕಾಶ ಹುಕ್ಕೇರಿ, ವೀರಕುಮಾರ ಪಾಟೀಲ, ಕಿರಣ ಸಾಧುನವರ ಮತ್ತು ಸುನೀಲ ಹನಮಣ್ಣವರ ಕೂಡ ಆಕಾಂಕ್ಷಿಗಳಾಗಿದ್ದಾರೆ.

ADVERTISEMENT

ಬಿಜೆಪಿಯಿಂದ ಹಾಲಿ ಸದಸ್ಯ ಮಹಾಂತೇಶ ಕವಟಗಿಮಠ ಅವರು 3ನೇ ಬಾರಿಗೆ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ‘ಕಾಡಾ’ ಅಧ್ಯಕ್ಷ ಡಾ.ವಿ.ಐ. ಪಾಟೀಲ, ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ ಹೆಸರುಗಳು ಕೇಳಿಬಂದಿವೆ. ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಸಹೋದರ ಲಖನ್‌ ಜಾರಕಿಹೊಳಿ ಅವರಿಗೆ ಟಿಕೆಟ್‌ ಕೊಡಿಸಲು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.