ADVERTISEMENT

ಸಂತ್ರಸ್ತರಿಗೆ ವಸತಿ ವ್ಯವಸ್ಥೆ ಕಲ್ಪಿಸಿ-ಬಾಲಚಂದ್ರ ಜಾರಕಿಹೊಳಿ

ಜಿಲ್ಲಾಧಿಕಾರಿ ಜೊತೆ ಬಾಲಚಂದ್ರ ಚರ್ಚೆ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 13:58 IST
Last Updated 20 ನವೆಂಬರ್ 2020, 13:58 IST
ಕೆಎಂಎಫ್‌ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಶುಕ್ರವಾರ ಭೇಟಿಯಾಗಿ ಸಂತ್ರಸ್ತರ ಸಮಸ್ಯೆಗಳ ಕುರಿತು ಚರ್ಚಿಸಿದರು
ಕೆಎಂಎಫ್‌ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಶುಕ್ರವಾರ ಭೇಟಿಯಾಗಿ ಸಂತ್ರಸ್ತರ ಸಮಸ್ಯೆಗಳ ಕುರಿತು ಚರ್ಚಿಸಿದರು   

ಗೋಕಾಕ: ‘ಕಳೆದ ವರ್ಷದ ಪ್ರವಾಹ ಹಾಗೂ ಅತಿವೃಷ್ಟಿಯಿಂದ ಸಂತ್ರಸ್ತರಾದ ಕುಟುಂಬಗಳಿಗೆ 15 ದಿನಗಳೊಳಗೆ ವಸತಿ ಸೌಕರ್ಯ ಕಲ್ಪಿಸಿಕೊಡಬೇಕು’ ಎಂದು ಅರಭಾವಿ ಶಾಸಕರೂ ಆಗಿರುವ ಕೆಎಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಒತ್ತಾಯಿಸಿದರು.

ಇಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರನ್ನು ಭೇಟಿಯಾದ ಅವರು, ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳ ನೆರೆ ಸಂತ್ರಸ್ತರ ಬೇಡಿಕೆಗಳಿಗೆ ಸ್ಪಂದಿಸಿ ತಕ್ಷಣ ಪರಿಹಾರ ಕಂಡುಕೊಳ್ಳಬೇಕೆಂದು ಒತ್ತಾಯಿಸಿದರು.

‘2019ರ ಆಗಸ್ಟ್‌ ಮತ್ತು ಸೆಪ್ಟೆಂಬರ್‌ನಲ್ಲಿ ಪ್ರವಾಹ ಮತ್ತು ಮಳೆಯಿಂದಾಗಿ ಸಾವಿರಾರು ಮನೆಗಳು ಜಲಾವೃತಗೊಂಡಿದ್ದವು. ಇದರಲ್ಲಿ ಪರಿಹಾರಕ್ಕಾಗಿ ಫಲಾನುಭವಿಗಳ ಪಟ್ಟಿಯಲ್ಲಿ 1,283 ಮಂದಿಯ ಹೆಸರು ಸೇರಿಲ್ಲ. ತಾಂತ್ರಿಕ ಕಾರಣಗಳಿಂದ ಹೀಗಾಗಿದೆ ಎಂದು ಹೇಳಲಾಗುತ್ತಿದೆ. ಸಂತ್ರಸ್ತರ ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಬೇಕು’ ಎಂದು ಕೋರಿದರು.

ADVERTISEMENT

ಕೂಡಲೇ ವರದಿ ಸಲ್ಲಿಸಿ: ನೆರೆ ಸಂತ್ರಸ್ತರ ವಸತಿ ಸೌಲಭ್ಯಕ್ಕಾಗಿ ತಮ್ಮ ಗೃಹ ಕಚೇರಿ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ದೂರವಾಣಿ ಮೂಲಕ ಸಭೆ ನಡೆಸಿದ ಅವರು, ಕೂಡಲೇ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಸಂತ್ರಸ್ತರು ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ವಾಸಿಸಲು ಈಗಲೂ ವಸತಿ ಸೌಲಭ್ಯವಿಲ್ಲ. ನಿಜವಾದ ಸಂತ್ರಸ್ತರಿಗೇ ಸರ್ಕಾರದಿಂದ ಪರಿಹಾರ ಧನ ಸಿಕ್ಕಿಲ್ಲ. ಈ ಸಂಬಂಧ ವಸತಿ ಸಚಿವ ವಿ. ಸೋಮಣ್ಣ ಮತ್ತು ಜಿಲ್ಲಾಧಿಕಾರಿಯನ್ನು ಎರಡೆರಡು ಬಾರಿ ಭೇಟಿ ಮಾಡಿ, ಜನರಿಗೆ ಅನ್ಯಾಯ ಸರಿಪಡಿಸಲು ಮನವಿ ಮಾಡಿಕೊಂಡಿದ್ದೇನೆ. ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗಬೇಕು’ ಎಂದರು.

ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಶೀಲ್ದಾರ್ ಡಿ.ಜೆ. ಮಹಾತ್, ತಾ.ಪಂ. ಇಒ ಬಸವರಾಜ ಹೆಗ್ಗನಾಯಿಕ, ಪಿಡಿಒಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.