ಕಾಗವಾಡ: ‘ಅಥಣಿ ಮತ್ತು ಕಾಗವಾಡ ಕ್ಷೇತ್ರಗಳ ಶಾಸಕರು ಅಭಿವೃದ್ಧಿಯತ್ತ ಗಮನಹರಿಸುತ್ತಿಲ್ಲ. ಬದಲಿಗೆ, ದ್ವೇಷ ಮತ್ತು ದಬ್ಬಾಳಿಕೆಯ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಮಂಜೂರುಗೊಳಿಸಿದ್ದ ಅಭಿವೃದ್ಧಿ ಕಾಮಗಾರಿಗಳಿಗೆ ತಡೆಯೊಡ್ಡುತ್ತಿದ್ದಾರೆ’ ಎಂದು ಗೋಕಾಕ ಕ್ಷೇತ್ರದ ಶಾಸಕ ರಮೇಶ ಜಾರಕಿಹೊಳಿ ಆರೋಪಿಸಿದರು.
ಕಾಗವಾಡ, ಅಥಣಿ ಕ್ಷೇತ್ರಗಳ ಶಾಸಕರ ವಿರುದ್ಧ ಇಲ್ಲಿ ಭಾನುವಾರ ಮಾಜಿ ಸಚಿವ ಶ್ರೀಮಂತ ಪಾಟೀಲ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಾಸಕರು ಅಭಿವೃದ್ಧಿ ಕೆಲಸ ಕೈಗೊಳ್ಳುತ್ತಿಲ್ಲ. ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡುವುದನ್ನು ಅವರು ನಿಲ್ಲಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರಹೋರಾಟ ಮಾಡಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.
ಶ್ರೀಮಂತ ಪಾಟೀಲ, ‘ಕಾಗವಾಡ ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿಗಳಿಗೆ ಸರ್ಕಾರದಿಂದ ಮಂಜೂರಾದ ಮನೆಗಳನ್ನು ಹಂಚಿಕೆಗೊಳಿಸುವಲ್ಲಿ ಶಾಸಕರು ತಾರತಮ್ಯ ಮಾಡುತ್ತಿದ್ದಾರೆ. ಇದನ್ನು ಪ್ರಶ್ನಿಸಿದವರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದಬ್ಬಾಳಿಕೆ ಮಾಡುತ್ತಿದ್ದಾರೆ. ನನ್ನ ಅಧಿಕಾರವಧಿಯಲ್ಲಿ ಮಂಜೂರಾದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತಡೆಹಿಡಿಯಲಾಗಿದೆ. ಬಸವೇಶ್ವರ ಏತ ನೀರಾವರಿ ಯೋಜನೆ ಕಾಮಗಾರಿ ಕುಂಟುತ್ತ ಸಾಗಿದೆ’ ಎಂದು ಆಪಾದಿಸಿದರು.
ಮಾಜಿ ಶಾಸಕ ಮಹೇಶ ಕುಮಟಳ್ಳಿ, ಪಕ್ಷದ ಮುಖಂಡರಾದ ಶ್ರೀನಿವಾಸ ಪಾಟೀಲ, ದಾದಾ ಪಾಟೀಲ, ತಮ್ಮಣ್ಣ ಪಾರಶೆಟ್ಟಿ, ಆರ್.ಎಂ.ಪಾಟೀಲ, ಮಹಾದೇವ ಕೋರೆ, ರಾಮ ಸೊಡ್ಡಿ ಇದ್ದರು.
ಪ್ರತಿಭಟನೆ ವೇಳೆ ಅಥಣಿ-ಚಿಕ್ಕೋಡಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಿದ್ದರಿಂದ ಪ್ರಯಾಣಿಕರಿಗೆ ಕೆಲಕಾಲ ತೊಂದರೆಯಾಯಿತು. ಪೋಲಿಸರು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.