ADVERTISEMENT

ಡೆಂಗಿ: ಸಮಗ್ರ ಮಾಹಿತಿಗೆ ಸಂಸದ ಜಗದೀಶ ಶೆಟ್ಟರ್ ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 11:55 IST
Last Updated 9 ಜುಲೈ 2024, 11:55 IST
   

ಬೆಳಗಾವಿ: ‘ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಡೆಂಗಿಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆ ಕಡಿಮೆ ಇದೆ. ಹಾಗಾಗಿ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಈ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.

ಇಲ್ಲಿನ ಜಿಲ್ಲಾಸ್ಪತ್ರೆಗೆ ಮಂಗಳವಾರ ಭೇಟಿ ನೀಡಿ ಡೆಂಗಿ ಕಾಯಿಲೆಯಿಂದ ಬಳಲುತ್ತಿರುವವರ ಆರೋಗ್ಯ ವಿಚಾರಿಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು.

‘ಜಿಲ್ಲಾಸ್ಪತ್ರೆಯಲ್ಲಿ 189 ರೋಗಿಗಳು ಡೆಂಗಿಗೆ ಚಿಕಿತ್ಸೆ ಪಡೆದಿದ್ದಾರೆ ಎಂದು ಬಿಮ್ಸ್‌ ಅಧಿಕಾರಿಗಳು ಹೇಳಿದ್ದಾರೆ. ಜಿಲ್ಲೆಯಲ್ಲಿ 177 ಡೆಂಗಿ ಪ್ರಕರಣ ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಈ ವ್ಯತ್ಯಾಸದ ಬಗ್ಗೆ ಇಬ್ಬರನ್ನೂ ವಿಚಾರಿಸಿದಾಗ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಗೋವಾ ಮತ್ತು ಮಹಾರಾಷ್ಟ್ರದ ರೋಗಿಗಳೂ ಇದ್ದಾರೆ. ಅವರನ್ನು ಜಿಲ್ಲೆಯ ಡೆಂಗಿ ಪ್ರಕರಣಗಳ ಪಟ್ಟಿಯಲ್ಲಿ ಸೇರಿಸಿಲ್ಲ ಎಂದಿದ್ದಾರೆ. ಮಳೆ ಹಿನ್ನೆಲೆಯಲ್ಲಿ ಜೂನ್, ಜುಲೈನಲ್ಲಿ ಡೆಂಗಿ ಪ್ರಕರಣ ಹೆಚ್ಚಿವೆ. ಈ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅಗತ್ಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ’ ಎಂದರು.

ADVERTISEMENT

‘ಡೆಂಗಿ ಸಾಂಕ್ರಾಮಿಕವಲ್ಲದ ಕಾಯಿಲೆ. ಹಾಗಾಗಿ ರೋಗಿಗಳಿಗೆ ಪ್ರತ್ಯೇಕ ವಾರ್ಡ್‌ಗಳ ಅಗತ್ಯವಿಲ್ಲ. ಡೆಂಗಿ ಕಾಯಿಲೆಯಿಂದ ಬಳಲುತ್ತಿರುವವರಿಗೆ ಇತರೆ ರೋಗಿಗಳೊಂದಿಗೆ ಚಿಕಿತ್ಸೆ ನೀಡಬಹುದು. ಸ್ಥಳೀಯ ಸಂಸ್ಥೆಗಳು ಸ್ವಚ್ಛತೆ ಕಾಪಾಡುತ್ತವೆ. ಆದರೆ, ಎಲ್ಲವನ್ನೂ ಸರ್ಕಾರದಿಂದಲೇ ಮಾಡಲಾಗದು. ಜನರೂ ತಮ್ಮ ಮನೆಗಳ ಬಳಿ ನೈರ್ಮಲ್ಯ ಕಾಪಾಡಿಕೊಳ್ಳಬೇಕು. ಶುಚಿತ್ವಕ್ಕೆ ಒತ್ತು ಕೊಟ್ಟರೆ, ಸೊಳ್ಳೆಗಳ ಉತ್ಪತ್ತಿ ತಡೆಯಬಹುದು. ಈ ಕಾಯಿಲೆ ತಡೆಗಟ್ಟಬಹುದು ಮತ್ತು ನಿಯಂತ್ರಿಸಬಹುದು’ ಎಂದು ಹೇಳಿದರು.

‘ರಾಜ್ಯದಾದ್ಯಂತ ಡೆಂಗಿ ಪ್ರಕರಣ ಹೆಚ್ಚಿವೆ. ಆದರೆ, ವೈದ್ಯಕೀಯ ತುರ್ತು ಪರಿಸ್ಥಿತಿ ಎಂದು ಘೋಷಿಸುವ ಪರಿಸ್ಥಿತಿ ಉದ್ಭವಿಸಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಆದರೆ, ಅದನ್ನು ಘೋಷಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

‘ನೆರೆಯ ಮಹಾರಾಷ್ಟ್ರದಲ್ಲಿ ಝಿಕಾ ಸೋಂಕಿನ ಪ್ರಕರಣ ಪತ್ತೆಯಾಗಿವೆ. ಹಾಗಾಗಿ ಈ ಪರಿಸ್ಥಿತಿ ನಿಗಾ ಇರಿಸಲು ಮತ್ತು ಡೆಂಗಿ ನಿಯಂತ್ರಣಕ್ಕಾಗಿ ತರಲು ಜಿಲ್ಲೆ ಹಾಗೂ ತಾಲ್ಲೂಕುಮಟ್ಟದಲ್ಲಿ ಕಾರ್ಯ ಪಡೆಗಳನ್ನು ರಚಿಸುವ ಅಗತ್ಯವಿದೆ’ ಎಂದು ಹೇಳಿದರು.

ಬಿಮ್ಸ್‌ ನಿರ್ದೇಶಕ ಡಾ.ಅಶೋಕಕುಮಾರ ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ, ಮಾಜಿ ಶಾಸಕ ಸಂಜಯ ಪಾಟೀಲ, ಬಿಜೆಪಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಇದ್ದರು.

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿತ’

‘ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದ್ದು, ಅಧಿಕಾರಿಗಳು ತಮ್ಮ ಮನಸ್ಸಿಗೆ ಬಂದಂತೆ ಕೆಲಸ ಮಾಡುತ್ತಿದ್ದಾರೆ. ಸೋಮವಾರ ನಡೆದ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಜಿಲ್ಲಾಧಿಕಾರಿಗಳಿಗೆ ಎಚ್ಚರಿಕೆ ನೀಡಿರುವುದು ಇದರ ಸೂಚನೆಯಾಗಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ದೂರಿದರು.

ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಸರ್ಕಾರಿ ಯಂತ್ರಗಳು ನಿಷ್ಕ್ರಿಯವಾಗಿವೆ. ಎಲ್ಲ ಜಿಲ್ಲೆಗಳಲ್ಲಿ ಆಡಳಿತ ಕುಸಿದಿದ್ದು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಬೇಕಿದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲೂ ಭಾರಿ ಮಳೆಯಾಗುತ್ತಿದ್ದು, ನದಿಗಳಲ್ಲಿ ನೀರಿನ ಸಂಗ್ರಹ ಮಟ್ಟ ಏರಿಕೆಯಾಗುತ್ತಿದೆ. ಆದರೆ, ಅಧಿಕಾರಿಗಳು ಸಕ್ರಿಯವಾಗಿ ಕೆಲಸ ಮಾಡದಿರುವುದು ಅವರ ಕಾರ್ಯವೈಖರಿ ತೋರಿಸುತ್ತದೆ. ಪ್ರಕೃತಿ ವಿಕೋಪದ ಸಂದರ್ಭ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕ್ರಿಯಾಶೀಲರಾಗಿ ಕೆಲಸ ಮಾಡಿ, ಜನರ ಕುಂದುಕೊರತೆಗಳಿಗೆ ಸ್ಪಂದಿಸಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.