ನಿಪ್ಪಾಣಿ(ಬೆಳಗಾವಿ ಜಿಲ್ಲೆ): ‘ಮಲ್ಲಿಕಾರ್ಜುನ ಖರ್ಗೆ ನಮ್ಮ ಪಕ್ಷದ ವರಿಷ್ಠರು. ದೆಹಲಿಗೆ ಹೋದಾಗ ಅವರನ್ನು ಭೇಟಿ ಆಗಲೇಬೇಕು. ಇದು ಸಹಜ ಭೇಟಿ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯದಲ್ಲಿ ಪರಿಶಿಷ್ಟ ಮುಖ್ಯಮಂತ್ರಿ ಕೂಗು ಎದ್ದಿಲ್ಲ. ಖರ್ಗೆ ಅವರೊಂದಿಗೆ ಮುಡಾ ಪ್ರಕರಣದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ರಾಜಕೀಯವಾಗಿ ನಮ್ಮ ಸಮಸ್ಯೆಗಳ ಕುರಿತಾಗಿ ಚರ್ಚಿಸಿದ್ದೇವೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಹೊಸ ಬೆಳವಣಿಗೆ ನಡೆಯುವ ಯಾವ ಲಕ್ಷಣವೂ ಕಾಣಸಿಗುತ್ತಿಲ್ಲ’ ಎಂದರು.
ಮುಖ್ಯಮಂತ್ರಿ ಸ್ಥಾನ ತೊರೆಯುವಂತೆ ಕಾಂಗ್ರೆಸ್ ವರಿಷ್ಠರು ಸಿದ್ದರಾಮಯ್ಯ ಮೇಲೆ ಒತ್ತಡ ತರುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ‘ನಮ್ಮ ಪಕ್ಷದಿಂದ ಸಿ.ಎಂ ಮೇಲೆ ಯಾವುದೇ ಒತ್ತಡವಿಲ್ಲ. ಎರಡು ತಿಂಗಳಿನಿಂದ ವಿರೋಧ ಪಕ್ಷಗಳು ಈ ವಿಚಾರವಾಗಿ ಒತ್ತಡ ತರುತ್ತಿವೆ. ಆದರೆ, ನಾವು ಕಾನೂನು ರೀತಿಯಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದೇವೆ. ಇ.ಡಿಯವರು ಪ್ರಕರಣ ದಾಖಲಿಸಿ ತನಿಖೆ ಮಾಡಿ ಸತ್ಯಾಂಶ ಹೊರತರಲಿ. ಇದರಿಂದ ಏನೂ ತೊಂದರೆ ಇಲ್ಲ’ ಎಂದರು.
‘ಬೆಳಗಾವಿ ಸಚಿವರೊಬ್ಬರು ಭೂಕಬಳಿಕೆ ಮಾಡಿದ್ದಾರೆ’ ಎಂಬ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸತೀಶ, ‘ಅವರು ಯಾರು ಮತ್ತು ಎಲ್ಲಿ ಭೂಕಬಳಿಕೆ ಮಾಡಿದ್ದಾರೆ ಎಂದು ಪೂರ್ಣವಾಗಿ ಹೇಳಬೇಕು. ನಂತರ ಪ್ರತಿಕ್ರಿಯೆ ನೀಡುತ್ತೇನೆ’ ಎಂದು ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.