ADVERTISEMENT

ಪೋಷಣ್ ಅಭಿಯಾನ ಅನುಷ್ಠಾನದಲ್ಲಿ ಪ್ರಥಮ: ಎಂ.ಜಿ. ಹಿರೇಮಠ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2021, 14:16 IST
Last Updated 2 ಫೆಬ್ರುವರಿ 2021, 14:16 IST
ಬೆಳಗಾವಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಬೆಳಗಾವಿಯಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು   

ಬೆಳಗಾವಿ: ‘ಪೋಷಣ್ ಅಭಿಯಾನ ಅನುಷ್ಠಾನದಲ್ಲಿ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ. ಅಪೌಷ್ಟಿಕತೆ ಮುಕ್ತ ಜಿಲ್ಲೆಯಾಗಿಸುವ ನಿಟ್ಟಿನಲ್ಲಿ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹೇಳಿದರು.

ಇಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಮನ್ವಯ ಹಾಗೂ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಎಲ್ಲ ಯೋಜನೆಗಳು ಪ್ರತಿ ಹಳ್ಳಿಗೂ ತಲುಪುವಂತೆ ಜಾಗೃತಿ ಮೂಡಿಸಬೇಕು’ ಎಂದರು.

ADVERTISEMENT

‘ಪೋಷಣ್ ಅಭಿಯಾನವು 0–6 ವರ್ಷದ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರ ಪೌಷ್ಟಿಕತೆಯ ಸ್ಥಿತಿಯನ್ನು ನಿರ್ದಿಷ್ಟ ಅವಧಿಗೆ ಅನುಗುಣವಾಗಿ ಸುಧಾರಿಸುವ ಉದ್ದೇಶ ಹೊಂದಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಬಸವರಾಜ ವರವಟ್ಟಿ ತಿಳಿಸಿದರು.

‘ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಐಸಿಡಿಎಸ್ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಮೊಬೈಲ್‌ ಫೋನ್ ನೀಡಲಾಗಿದೆ. ಪವರ್ ಬ್ಯಾಂಕ್ ಹಾಗೂ ಇಂಟರ್ನೆಟ್ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅಂಗನವಾಡಿಯಲ್ಲಿ ನಡೆಯುವ ಪ್ರತಿ ದಿನದ ಚಟುವಟಿಕೆಗಳನ್ನು ಈ ಫೋನ್‌ಗಳನ್ನು ಬಳಸಿ ಆನ್‌ಲೈನ್‌ನಲ್ಲಿ ದಾಖಲಿಸುತ್ತಿದ್ದಾರೆ. ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರದ ವಿತರಣೆ ಹಾಗೂ ಮಕ್ಕಳ ಬೆಳವಣಿಗೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ’ ಎಂದರು.

‘ಕೌಟುಂಬಿಕ ಹಿಂಸೆಯಿಂದ ಮಹಿಳೆಯರ ಸಂರಕ್ಷಣಾ ಕಾಯ್ದೆ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ರಚಿಸಲಾಗಿದೆ. ಕೌಟುಂಬಿಕ ಕಲಹಗಳನ್ನು ಬಗೆಹರಿಸಲು ಕೂಡ ಸಮಿತಿ ರಚಿಸಲಾಗಿದೆ. ಪ್ರತಿ ಬುಧವಾರ ಹಾಗೂ ಶುಕ್ರವಾರ ಸಿಡಿಪಿಒ ಕಚೇರಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಕೆಲ ವಕೀಲರು ಗೈರುಹಾಜರಿ ಆಗುತ್ತಿದ್ದಾರೆ. ಪ್ರಕರಣ ದಾಖಲಿಸಿದ 19 ದಿನಗಳಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ವರವಟ್ಟಿ ತಿಳಿಸಿದರು.

‘ಫೆ. 27ರಂದು ನಡೆಯಲಿರುವ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ಕೌಟುಂಬಿಕ ಕಲಹಗಳನ್ನು ಬಗೆಹರಿಸಿಕೊಳ್ಳಬೇಕು’ ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿಜಯದೇವರಾಜ್ ಅರಸು ಸಲಹೆ ನೀಡಿದರು.

‘ಕೆಲಸದ ಸ್ಥಳಗಳಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟುವ ನಿಟ್ಟಿನಲ್ಲಿ ಸಮಿತಿ ರಚಿಸಲಾಗಿದೆ. ಲೈಂಗಿಕ ಅಥವಾ ಇನ್ಯಾವುದೆ ಕಿರುಕುಳಕ್ಕೆ ಒಳಗಾದ ಮಹಿಳೆಗೆ ಕೂಡಲೇ ಒಂದೇ ಸ್ಥಳದಲ್ಲಿ ಪರಿಹಾರ ನೀಡಲು ಜಿಲ್ಲಾಸ್ಪತ್ರೆಯಲ್ಲಿ ‘ಸಖಿ ಒನ್ ಸ್ಟಾಪ್ ಸೆಂಟರ್’ ಆರಂಭಿಸಲಾಗಿದೆ’ ಎಂದು ವರವಟ್ಟಿ ಮಾಹಿತಿ ನೀಡಿದರು.

‘ಪ್ರಧಾನ ಮಂತ್ರಿ ಮಹಿಳಾ ಸಶಕ್ತಿಕರಣ ಯೋಜನೆಯಲ್ಲಿ ಕೌಶಲ ಅಭಿವೃದ್ಧಿ, ಉದ್ಯೋಗ, ಡಿಜಿಟಲ್ ಸಾಕ್ಷರತೆ, ಆರೋಗ್ಯ ಮತ್ತು ಪೌಷ್ಟಿಕತೆ ಮೂಲಕ ಸಬಲೀಕರಣಗೊಳಿಸಲು ಮಹಿಳಾ ಶಕ್ತಿ ಕೇಂದ್ರ ಯೋಜನೆಯನ್ನು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನಗೊಳಿಸಲಾಗಿದೆ’ ಎಂದರು.

‘ತೃತೀಯ ಲಿಂಗಿಗಳಿಗೆ ಪಡಿತರ ಚೀಟಿಗಳನ್ನು ವಿತರಿಸಲು ಕ್ರಮ ವಹಿಸಲಾಗುವುದು. ಸಭೆ ನಡೆಸಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುವುದು’ ಎಂದು ಭರವಸೆ ನೀಡಿದರು.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಸಿ.ಬಿ. ಕೊಡ್ಲಿ, ವಿವಿಧ ಸಮಿತಿಗಳ ಸದಸ್ಯರು ಹಾಗೂ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.