ADVERTISEMENT

ಸಚಿವೆ ಹೆಬ್ಬಾಳಕರ ರಾಜೀನಾಮೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2024, 15:36 IST
Last Updated 5 ನವೆಂಬರ್ 2024, 15:36 IST
ಸಚಿವೆ ಲಕ್ಷ್ಮಿ ಹೆಬ್ಬಾಳಕರ ರಾಜೀನಾಮೆಗೆ ಆಗ್ರಹಿಸಿ, ಬೆಳಗಾವಿಯಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಸಚಿವೆ ಲಕ್ಷ್ಮಿ ಹೆಬ್ಬಾಳಕರ ರಾಜೀನಾಮೆಗೆ ಆಗ್ರಹಿಸಿ, ಬೆಳಗಾವಿಯಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕನ ಕಿರುಕುಳದಿಂದ ಬೇಸತ್ತು, ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ದ್ವಿತೀಯ ದರ್ಜೆ ನೌಕರ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೈತಿಕ ಹೊಣೆ ಹೊತ್ತು ಸಚಿವೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿ, ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಇಲ್ಲಿನ ರಾಣಿ ಚನ್ನಮ್ಮ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಕೆಲಕಾಲ ಸಂಚಾರ ಬಂದ್‌ ಮಾಡಿ ಧರಣಿ ನಡೆಸಿದರು. ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಭಾವಚಿತ್ರ ಹಿಡಿದು ಘೋಷಣೆ ಕೂಗಿದರು. ‘ಹೆಬ್ಬಾಳಕರ ಹಠಾವೋ, ಬೆಳಗಾವಿ ಬಚಾವೋ’ ಘೋಷಣೆ ಹಾಕಿದರು.

‘ರಾಜ್ಯದಲ್ಲಿ ಜನರ ಸರ್ಕಾರ ಇಲ್ಲ. ಆತ್ಮಹತ್ಯೆಗೆ ಪ್ರಚೋದನೆ ನೀಡುವ ಕೊಲೆಗಡುಕ ಸರ್ಕಾರವಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಒಬ್ಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡರು. ಈಗ ಬೆಳಗಾವಿ ತಹಶೀಲ್ದಾರ್ ಕಚೇರಿ ನೌಕರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸಾಯುವ ಮುನ್ನ ವಾಟ್ಸ್‌ಆ್ಯಪ್‌ ಗ್ರೂಪಿನಲ್ಲೇ ಸಚಿವೆ ಹೆಬ್ಬಾಳಕರ ಅವರ ಆಪ್ತ ಸಹಾಕನ ಹೆಸರು ಬರೆದಿದ್ದಾನೆ’ ಎಂದು ಮಾಜಿ ಶಾಸಕ ಸಂಜಯ ಪಾಟೀಲ ದೂರಿದರು.

ADVERTISEMENT

‘ಸಿದ್ದರಾಮಯ್ಯ ಅವರು ಉದ್ದುದ್ದ ಭಾಷಣ ಮಾಡುತ್ತಾರೆ. ಧೈರ್ಯವಿದ್ದರೆ ಲಕ್ಷ್ಮಿ ಹೆಬ್ಬಾಳಕರ ಅವರ ರಾಜೀನಾಮೆ ಪಡೆಯಲಿ’ ಎಂದೂ ಅವರು ಆಗ್ರಹಿಸಿದರು.

‘ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ‘ಹಫ್ತಾ’ ವಸೂಲಿ ಜೋರಾಗಿದೆ.‌ ಲಕ್ಷ್ಮಿ ಹೆಬ್ಬಾಳಕರ ಸಚಿವರಾದ ನಂತರ ಮಟಕಾ ಸೇರಿ ಅಕ್ರಮ ಚಟುವಟಿಕೆಗಳು ಹೆಚ್ಚಿವೆ. ಸಚಿವ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಅವರಿಗೆ ಇಲ್ಲ’ ಎಂದು ಕಿಡಿ ಕಾರಿದರು.

ಬಿಜೆಪಿ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ, ಮುಖಂಡರಾದ ಮಲ್ಲಿಕಾರ್ಜುನ ಮಾದಮ್ಮನವರ, ಡಾ.ರಾಜೇಶ ನೇರ್ಲಿ, ಡಾ.ಸೋನಾಲಿ‌ ಸರ್ನೋಬತ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.