ADVERTISEMENT

ಬೆಳಗಾವಿ: ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 20 ಜೂನ್ 2024, 9:11 IST
Last Updated 20 ಜೂನ್ 2024, 9:11 IST
   

ಬೆಳಗಾವಿ: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಇಲ್ಲಿನ ಧರ್ಮವೀರ ಸಂಭಾಜಿ ವೃತ್ತದಲ್ಲಿ ಬಿಜೆಪಿ ಉತ್ತರ ಮಂಡಳದವರು ಗುರುವಾರ ಪ್ರತಿಭಟನೆ ನಡೆಸಿದರು‌.

ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು‌.

ನೇತೃತ್ವ ವಹಿಸಿದ್ದ ಸಂಸದ ಜಗದೀಶ ಶೆಟ್ಟರ್, 'ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ರಾಜ್ಯ ಸರ್ಕಾರ ಅಗತ್ಯ ವಸ್ತುಗಳ ದರ ಹೆಚ್ಚಿಸುತ್ತಿದೆ. ಅದರಲ್ಲೂ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಎಲ್ಲದರ ಮೇಲೆ ಪರಿಣಾಮ ಬೀರುತ್ತದೆ. ಇದು ಸರಿಯಾದ ಕ್ರಮವಲ್ಲ. ಸರ್ಕಾರ ಇದೇ ನೀತಿ ಮುಂದುವರಿಸಿದರೆ ಜನ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಲಿದೆ' ಎಂದು ಎಚ್ಚರಿಸಿದರು.

ADVERTISEMENT

'ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲೂ ಪೆಟ್ರೋಲ್ ದರ ಏರಿಕೆಯಾಗಿದೆ' ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಶೆಟ್ಟರ್, 'ನೆರೆ ರಾಜ್ಯವಾದ ಗೋವಾದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಅಲ್ಲಿ ಕರ್ನಾಟಕಕ್ಕಿಂತ ಪೆಟ್ರೋಲ್ ದರ ₹9 ಕಡಿಮೆಯಿದೆ. ಇದಕ್ಕೆ ಸಿದ್ದರಾಮಯ್ಯ ಅವರ ಬಳಿ ಉತ್ತರವಿದೆಯೇ' ಎಂದು ಪ್ರಶ್ನಿಸಿದರು.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅನಿಲ ಬೆನಕೆ, ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ ಪಾಟೀಲ ಇತರರಿದ್ದರು‌.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.