ADVERTISEMENT

ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಆರಂಭ

​ಪ್ರಜಾವಾಣಿ ವಾರ್ತೆ
Published 15 ಅಕ್ಟೋಬರ್ 2024, 15:45 IST
Last Updated 15 ಅಕ್ಟೋಬರ್ 2024, 15:45 IST
ಖಾನಾಪುರದ ಶಾಂತಿನಿಕೇತನ ಪಿಯು ಕಾಲೇಜು ಆವರಣದಲ್ಲಿ ಆಯೋಜಿಸಿದ ಕುಸ್ತಿ ಪಂದ್ಯಾವಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಚಾಲನೆ ನೀಡಿದರು
ಖಾನಾಪುರದ ಶಾಂತಿನಿಕೇತನ ಪಿಯು ಕಾಲೇಜು ಆವರಣದಲ್ಲಿ ಆಯೋಜಿಸಿದ ಕುಸ್ತಿ ಪಂದ್ಯಾವಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಂಗಳವಾರ ಚಾಲನೆ ನೀಡಿದರು   

ಖಾನಾಪುರ: ಪಟ್ಟಣ ಹೊರವಲಯದ ಶಾಂತಿನಿಕೇತನ ಪಿಯು ಕಾಲೇಜಿನ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳವಾರ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು.

ಆನಂತರ ಮಾತನಾಡಿದ ಅವರು, ‘ಈ ಭಾಗದ ಗ್ರಾಮೀಣ ಕ್ರೀಡೆಯಾದ ಕುಸ್ತಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದ್ದೇನೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವಿಠ್ಠಲ ಹಲಗೇಕರ ಮಾತನಾಡಿ, ‘ಶಾಂತಿನಿಕೇತನ ಕಾಲೇಜು ಹಾಗೂ ತೋಪಿನಕಟ್ಟಿ ಶ್ರೀ ಮಹಾಲಕ್ಷ್ಮಿ ಗ್ರೂಪ್ ಎಜುಕೇಶನ್ ಸೊಸೈಟಿ ಈ ಪಂದ್ಯಾವಳಿಯ ಪ್ರಾಯೋಜಕತ್ವವನ್ನು ವಹಿಸಿಕೊಂಡಿವೆ‘ ಎಂದರು.

ADVERTISEMENT

ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಯ ಉದ್ಘಾಟನೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ, ಸಚಿವೆ ಲಕ್ಷ್ಮಿ ಹೆಬ್ಬಾಳಕರ, ಸಚಿವ ಮಧು ಬಂಗಾರಪ್ಪ ಸೇರಿದಂತೆ ಜಿಲ್ಲೆಯ ಸಂಸದರು, ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳ ಗೈರುಹಾಜರಿ ಎದ್ದು ಕಾಣುತ್ತಿತ್ತು.

ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲು ರಾಜ್ಯದ 32 ಜಿಲ್ಲೆಗಳ 940ಕ್ಕೂ ಹೆಚ್ಚು ಕುಸ್ತಿ ಪಟುಗಳು ಆಗಮಿಸಿದ್ದರು. ಪುರುಷ ಮತ್ತು ಮಹಿಳೆಯರ ಫ್ರೀ ಸ್ಟೈಲ್, ಪುರುಷರ ಗ್ರೀಸೋ ರೋಮನ್ ಸ್ಟೈಲ್ ಎಂಬ ಮೂರು ಪ್ರಕಾರಗಳಲ್ಲಿ ಪಂದ್ಯಾವಳಿ ನಡೆದವು. ಬುಧವಾರವೂ ಪಂದ್ಯಾವಳಿ ಮುಂದುವರೆಯಲಿವೆ ಎಂದು ಆಯೋಜಕರು ಘೋಷಿಸಿದರು.

ತೋಪಿನಕಟ್ಟಿ ಶ್ರೀ ಮಹಾಲಕ್ಷ್ಮಿ ಗ್ರೂಪ್ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿ ರಾಜೇಂದ್ರ ಪಾಟೀಲ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಮೋದ ಕೋಚೇರಿ, ಬ್ಲಾಕ್ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಕುಸ್ತಿ ಕೋಚ್ ಹಣಮಂತ ಪಾಟೀಲ ಮತ್ತಿತರರು ಇದ್ದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಂ.ಕಾಂಬಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವೇಕ ಕುರಗುಂದ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.