ಬೆಳಗಾವಿ: ‘ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಸಮಸ್ಯೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದು, ಶೀಘ್ರವೇ ಪರಿಹಾರ ಒದಗಿಸಲಾಗುವುದು’ ಎಂದು ಕಾರ್ಮಿಕ ಸಚಿವ ಅರಬೈಲ್ ಶಿವರಾಮ ಹೆಬ್ಬಾರ ತಿಳಿಸಿದರು.
ರಾಜ್ಯದಲ್ಲಿರುವ ಸಕ್ಕರೆ ಉದ್ದಿಮೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರ ವೇತನ ಪರಿಷ್ಕರಣೆ ಕುರಿತು ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ನಡೆದ ತ್ರಿಪಕ್ಷೀಯ ವೇತನ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
‘ಸರ್ಕಾರದ ಆದೇಶಕ್ಕೆ ಅನುಗುಣವಾಗಿ ಕರ್ತವ್ಯಗಳನ್ನು ನಿರ್ವಹಿಸಲಾಗುವುದು. 2018ರಲ್ಲಿ ವೇತನ ಹೆಚ್ಚಳದ ಕುರಿತು ಮಾಡಲಾದ ಒಪ್ಪಂದದ ನಿಯಮಗಳನ್ನು ಜಾರಿಗೆ ತರಲಾಗುವುದು’ ಎಂದು ಭರವಸೆ ನೀಡಿದರು.
‘ಕಾರ್ಮಿಕರಿಗೆ ಕನಿಷ್ಠ ವೇತನದಲ್ಲಿ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಬೆಲೆ ಏರಿಕೆಯಿಂದಾಗಿ ಜೀವನ ನಡೆಸಲು ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಸಕ್ಕರೆ ಕಾರ್ಖಾನೆಯ ಮಂಡಳಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಸಕ್ಕರೆ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ವೇತನ ಪರಿಷ್ಕರಿಸುವ ಸಂಬಂಧ ದಕ್ಷಿಣ ಭಾರತದ ಸಕ್ಕರೆ ತಯಾರಕರ ಸಂಘ (ಕರ್ನಾಟಕ), ಕರ್ನಾಟಕ ಸಹಕಾರಿ ಸಕ್ಕರೆ ಕಾರ್ಖಾನೆಗಳ ಒಕ್ಕೂಟ ಮತ್ತು ಕರ್ನಾಟಕ ಸಕ್ಕರೆ ಕಾರ್ಮಿಕರ ಒಕ್ಕೂಟದ ನಡುವೆ ಒಪ್ಪಂದವಾಗಿದೆ. ಈ ಪ್ರಕಾರ ಕಾರ್ಮಿಕರ ವೇತನ ಪರಿಷ್ಕರಿಸಿ, ಮೂಲ ವೇತನದಲ್ಲಿ ಹೆಚ್ಚಳ ಮಾಡಲಾಗುವುದು’ ಎಂದು ತಿಳಿಸಿದರು.
‘ಕಾರ್ಮಿಕರ ಏಳಿಗೆಗೆ ಇಲಾಖೆ ಬದ್ಧವಾಗಿದೆ. ಎಲ್ಲ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು. ವಿಧಾನಮಂಡಲ ಅಧಿವೇಶನದಲ್ಲೂ ಚರ್ಚಿಸಲಾಗುವುದು’ ಎಂದು ಹೇಳಿದರು.
ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.