ಬೆಳಗಾವಿ: ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಆದಾಯ ತೆರಿಗೆ ಪಾವತಿದಾರರಿಗೆ ಗೃಹಲಕ್ಷ್ಮಿ ಯೋಜನೆ ಹಣ ಸಿಗುವುದಿಲ್ಲ. ಆದಾಯ ತೆರಿಗೆ ಪಾವತಿ ವ್ಯಾಪ್ತಿಯಿಂದ ಹೊರ ಉಳಿದವರಿಗೆ ಹಣ ಸಿಗುತ್ತದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
ಬಿಪಿಎಲ್ ಕಾರ್ಡ್ ರದ್ದುಗೊಳಿಸುವ ವಿಷಯಕ್ಕೆ ಸಂಬಂಧಪಟ್ಟಂತೆ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದಲ್ಲಿ 80 ಸಾವಿರ ಬಿಪಿಎಲ್ ಪಡಿತರ ಕಾರ್ಡುಗಳ ರದ್ದತಿ ಬದಲು ಅವುಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಲಾಗಿದೆ. ಇದರಿಂದ ಯಾವುದೇ ಗೊಂದಲ ಇಲ್ಲ. ಎಪಿಎಲ್, ಬಿಪಿಎಲ್ ಪಡಿತರ ಚೀಟಿ ಹೊಂದಿದ ಇಬ್ಬರಿಗೂ ಗೃಹಲಕ್ಷ್ಮಿ ಹಣ ಬರುತ್ತದೆ’ ಎಂದು ಸ್ಪಷ್ಟಪಡಿಸಿದರು.
‘ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನಿಸುತ್ತಿದೆ’ ಎಂಬ ಕಾಂಗ್ರೆಸ್ ಶಾಸಕ ರವಿ ಗಣಿಗ ಆರೋಪಕ್ಕೆ ಪ್ರತಿಕ್ರಿಯಿಸಿದ ಹೆಬ್ಬಾಳಕರ, ‘ಇಡೀ ದೇಶದಲ್ಲಿ ಇಂಥ ವ್ಯವಹಾರ ನಡೆದಿದೆ. ಬಿಜೆಪಿಯವರು ನಿರಂತರವಾಗಿ ಹೀಗೆ ಪ್ರಯತ್ನಿಸುತ್ತಿದ್ದಾರೆ. ನಾವು ಗಟ್ಟಿಯಾಗಿದ್ದೇವೆ. ಸುಭದ್ರವಾದ ಸರ್ಕಾರವನ್ನು ಯಾರೂ ಏನೂ ಮಾಡಲಾಗದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.