ಬೆಳಗಾವಿ: ಪ್ರವಾಹ ಹಾಗೂ ಅತಿವೃಷ್ಟಿಯಿಂದ ಇಡೀ ರಾಜ್ಯ ತತ್ತರಿಸಿ ಹೋಗಿದೆ. ರಾಜ್ಯವನ್ನು ಪುನಃ ಕಟ್ಟಲು ಹಾಗೂ ನೆರೆ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡಲು ಕೇಂದ್ರ ಸರ್ಕಾರ ತಕ್ಷಣ ₹ 50 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ಶನಿವಾರ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಆವರಣದಲ್ಲಿ ಪ್ರತಿಭಟನೆ ನಡೆಸಿದರು.
‘ನೆರೆಗೆ ಸಿಕ್ಕು ನಲುಗಿ ಹೋಗಿರುವ ಸಂತ್ರಸ್ತರಿಗೆ ಪರಿಹಾರ ವಿತರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ವಿಫಲವಾಗಿವೆ. ಬೆಳೆ ಹಾನಿ ಹಾಗೂ ಜಾನುವಾರು ಸಾವಿಗೆ ಪರಿಹಾರ ಕೂಡ ಇದುವರೆಗೆ ನೀಡಿಲ್ಲ. ಪ್ರಧಾನಿ ನರೇಂದ್ರ ಮೋದಿಗೆ ಕರ್ನಾಟಕ ಎಲ್ಲಿದೆ ಎನ್ನುವುದೇ ಗೊತ್ತಿಲ್ಲದಂತಾಗಿದೆ’ ಎಂದು ಟೀಕಿಸಿದರು.
‘ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಈ ಋಣಕ್ಕಾದರೂ ಹಣ ಬಿಡುಗಡೆ ಮಾಡಬೇಕಿತ್ತು. ಇಲ್ಲದಿದ್ದರೆ, ತಕ್ಷಣ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿ’ ಎಂದು ಒತ್ತಾಯಿಸಿದರು.
‘ರಾಜ್ಯ ಸರ್ಕಾರದ ಹತ್ತಿರ ಹಣವಿಲ್ಲ. ಸಂತ್ರಸ್ತರಿಗೆ ಸರಿಯಾಗಿ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕಕ್ಕೆ ಮೋಸ ಮಾಡುತ್ತಿದೆ. ನೆರೆ ಪರಿಹಾರ ನೀಡಿರುವ ಬಗ್ಗೆ ಶ್ವೇತಪತ್ರ ಹೊರಡಿಸಲಿ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲಿನಂತೆ ಬಲಿಷ್ಠರಾಗಿಲ್ಲ. ರಾಜ್ಯದ ಬಹುತೇಕ ಜನಪ್ರತಿನಿಧಿಗಳು ಯಡಿಯೂರಪ್ಪ ಅವರ ಹೆಸರಿನಲ್ಲಿ ಆಯ್ಕೆಯಾಗಿದ್ದಾರೆ. ಈಗ ಅವರೇ ಸರ್ಕಾರ ಕೆಡವಲು ಪ್ರಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು.
ತಾಕತ್ತಿದ್ದರೆ ಪಠ್ಯದಿಂದ ಟಿಪ್ಪು ವಿಷಯ ತೆಗೆಯಲಿ-ವಾಟಾಳ್
‘ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ ಅವರು ಕನ್ನಡ ಧ್ವಜ ಹಾಗೂ ಶಿಕ್ಷಣ ಸಚಿವ ಸುರೇಶಕುಮಾರ ಅವರು ಪಠ್ಯದಿಂದ ಟಿಪ್ಪು ಚರಿತ್ರೆ ತೆಗೆದು ಹಾಕುವ ಬಗ್ಗೆ ಮಾತನಾಡುತ್ತಿದ್ದಾರೆ. ರಾಜ್ಯ ಸರ್ಕಾರಕ್ಕೆ ತಾಕತ್ತಿದರೆ ಕನ್ನಡ ಧ್ವಜ ಹಾಗೂ ಪಠ್ಯ ಪುಸ್ತಕದಿಂದ ಟಿಪ್ಪು ಸುಲ್ತಾನರ ಚರಿತ್ರೆ ತೆಗೆದು ಹಾಕಲಿ ನೋಡೋಣ. ಆ ಕ್ಷಣವೇ ಸರ್ಕಾರ ಬಿದ್ದುಹೋಗಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರು ಕೈಗಾರಿಕೆ ಸಚಿವರಾಗಿದ್ದಾರೆ. ಅವರು ಉತ್ತರ ಕರ್ನಾಟಕ ಭಾಗದಲ್ಲಿ ಎಷ್ಟು ಜನರಿಗೆ ಕೆಲಸ ಕೊಡಿಸಿದ್ದಾರೆ? ಎಷ್ಟು ಕೈಗಾರಿಕೆಗಳನ್ನು ಸ್ಥಾಪಿಸಿದ್ದಾರೆ?’ ಎಂದು ಪ್ರಶ್ನಿಸಿದ ಅವರು, ‘ಜಗದೀಶ ಶೆಟ್ಟರ್ ಬಣ್ಣ ಹಚ್ಚದೇ ದೊಡ್ಡ ನಾಟಕ ಆಡುತ್ತಾರೆ’ ಎಂದು ವ್ಯಂಗ್ಯವಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.