ADVERTISEMENT

ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ: ಎಂ.ಸಿ. ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 30 ಜೂನ್ 2023, 12:56 IST
Last Updated 30 ಜೂನ್ 2023, 12:56 IST
   

ಬೆಳಗಾವಿ: ‘ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ಎರಡು ವರ್ಷಗಳ ಹಿಂದೆ ರಾಜ್ಯದಲ್ಲಿ ಜಾರಿಗೆ ತಂದಿದೆ. ಆದರೆ, ದೇಶದಲ್ಲಿ ಬಿಜೆಪಿ ಆಡಳಿತದಲ್ಲಿರುವ ಕೆಲವು ರಾಜ್ಯಗಳಲ್ಲಿ ಎನ್‌ಇಪಿ ಜಾರಿಯಾಗಿಲ್ಲ. ಹಾಗಾಗಿ ನಾವು ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ, ಎನ್‌ಇಪಿ ಜಾಗದಲ್ಲಿ ರಾಜ್ಯ ಶಿಕ್ಷಣ ನೀತಿಯನ್ನು ವ್ಯವಸ್ಥಿತವಾಗಿ ಜಾರಿಗೆ ತರುತ್ತೇವೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್‌ ಹೇಳಿದರು.

ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಯಣ್ಣನ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಮಾತನಾಡಿದ ಅವರು, ‘ಇಂದಿನ ಔದ್ಯೋಗಿಕ ಬೇಡಿಕೆಗೆ ತಕ್ಕಂತೆ ನಮ್ಮ ಪಠ್ಯಕ್ರಮ ಬದಲಾಗಬೇಕು. ಆ ಕೆಲಸವನ್ನು ಹಂತ–ಹಂತವಾಗಿ ಮಾಡುತ್ತೇವೆ. ವಿದ್ಯಾರ್ಥಿಗಳ ಭವಿಷ್ಯ ಗಮನದಲ್ಲಿಟ್ಟುಕೊಂಡು ಶೈಕ್ಷಣಿಕ ವ್ಯವಸ್ಥೆಯಲ್ಲಿ ಯಾವ ರೀತಿಯ ಬದಲಾವಣೆ ತರಬೇಕೆಂದು ಚರ್ಚಿಸುತ್ತಿದ್ದೇವೆ’ ಎಂದು ಹೇಳಿದರು.

‘ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ವಿಷಯ ನ್ಯಾಯಾಲಯ ಮೆಟ್ಟಿಲೇರಿದೆ. ಈ ಗೊಂದಲ ಬಗೆಹರಿಸಿ, ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುತ್ತೇವೆ. ರಾಜ್ಯದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.5 ಹುದ್ದೆಗಳನ್ನು ಭರ್ತಿಗೊಳಿಸುತ್ತೇವೆ’ ಎಂದು ಭರವಸೆ ನೀಡಿದರು.

ADVERTISEMENT

‘ರಾಣಿ ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣನ ಸಾಹಸ, ಬಲಿದಾನ ಪ್ರೇರಣಾದಾಯಕ. ಆ ಮಹಾನ್‌ ನಾಯಕರ ಚರಿತ್ರೆಯನ್ನು ಯಾರಿಂದಲೂ ತಿರುಚಲು ಸಾಧ್ಯವಿಲ್ಲ. ಭೂಮಂಡಲ ಇರುವವರೆಗೂ ಅದು ಶಾಶ್ವತ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.