ಬೆಂಗಳೂರು: ‘ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಯಾವುದೇ ಸಮರ್ಪಕ ಕ್ರಮ ಕೈಗೊಳ್ಳದ ಈಗಿನ ಸರ್ಕಾರದ ನಡೆ ನನಗೆ ತೀವ್ರ ನಿರಾಸೆ ತರಿಸಿದೆ’ ಎಂದು ಸಾಹಿತಿ ಚಂದ್ರಶೇಖರ ಕಂಬಾರ ಅವರು ಬೇಸರ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಸಮನ್ವಯ ವೇದಿಕೆ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ‘ಸರ್ಕಾರಿ ಶಾಲೆಗಳ ಸಬಲೀಕರಣದಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ಪಾತ್ರ ಕುರಿತ ಸಮಾಲೋಚನಾ ಸಭೆ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ, ಶಿಕ್ಷಕರ ಕೊರತೆ ಇದೆ. ಸೌಲಭ್ಯವಂಚಿತ ಸರ್ಕಾರಿ ಶಾಲೆಗಳಿಂದ ಗಣನೀಯ ಪ್ರಮಾಣದಲ್ಲಿ ಮಕ್ಕಳು ತೊರೆಯುತ್ತಿದ್ದಾರೆ. ಇದೇ ವೇಳೆ ಇಂಗ್ಲಿಷ್ ಶಾಲೆಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆದಷ್ಟು ಬೇಗ ಸರ್ಕಾರ ಈ ವಿಚಾರದಲ್ಲಿ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.
ಶಿಕ್ಷಣತಜ್ಞ ವಿ.ಪಿ.ನಿರಂಜನಾರಾಧ್ಯ ಮಾತನಾಡಿ, ‘ಕಳೆದ ಎರಡೂವರೆ ವರ್ಷದ ಅವಧಿಯಲ್ಲಿ 564 ಸರ್ಕಾರಿ ಶಾಲೆಗಳನ್ನು ಮುಚ್ಚಲಾಗಿದೆ. 1,187 ಇಂಗ್ಲಿಷ್ ಶಾಲೆಗಳನ್ನು ತೆರೆಯಲಾಗಿದೆ. 1.36 ಲಕ್ಷ ಮಕ್ಕಳು ಸರ್ಕಾರಿ ಶಾಲೆಗಳನ್ನು ತೊರೆದಿದ್ದಾರೆ. 1.48 ಲಕ್ಷ ಮಕ್ಕಳು ಇಂಗ್ಲಿಷ್ ಮಾಧ್ಯಮ ಶಾಲೆಗಳಿಗೆ ಸೇರಿದ್ದಾರೆ’ ಎಂದು ವಿವರಿಸಿದರು.
‘ಎರಡು ವರ್ಷಗಳಿಂದ ಶೇ 4.7ರಷ್ಟು ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿದ್ದಾರೆ’ ಎಂದರು. ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಆಗ್ರಹಿಸಿ ಎಸ್‌ಡಿಎಂಸಿ ಹಾಗೂ ಶಿಕ್ಷಕರ ಸಂಘಗಳ ವತಿಯಿಂದ ಜನವರಿ ಮೊದಲ ವಾರದಲ್ಲಿ ತರಗತಿಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ ಮಾತನಾಡಿ, ‘ಈ ವರ್ಷದ ಎಸ್‌ಡಿಎಂಸಿ ನಿಧಿಯನ್ನು ಶಿಕ್ಷಣ ಇಲಾಖೆ ಇನ್ನೂ ಬಿಡುಗಡೆ ಮಾಡಿಲ್ಲ. ಶೀಘ್ರ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.