ADVERTISEMENT

ಸಂಚಿನಿಂದ ಕೇಜ್ರಿವಾಲ್‌ ಬಂಧನ: ಎಎಪಿ ಕಾರ್ಯಕರ್ತರ ಸಾಮೂಹಿಕ ಉಪವಾಸ ಸತ್ಯಾಗ್ರಹ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2024, 23:30 IST
Last Updated 7 ಏಪ್ರಿಲ್ 2024, 23:30 IST
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಭಾನುವಾರ ಉಪವಾಸ ಸತ್ಯಾಗ್ರಹ ನಡೆಸಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ವಿರೋಧಿಸಿ ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಭಾನುವಾರ ಉಪವಾಸ ಸತ್ಯಾಗ್ರಹ ನಡೆಸಿದರು.   

ಬೆಂಗಳೂರು: ‘ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ನೇರವಾಗಿ ಎದುರಿಸಲಾಗದೆ ಪಿತೂರಿ ನಡೆಸಿ ಬಂಧನಕ್ಕೆ ಒಳಗಾಗುವಂತೆ ಮಾಡಿದ್ದಾರೆ‘ ಎಂದು ಆಮ್‌ ಆದ್ಮಿ ಪಕ್ಷದ(ಆಪ್‌) ರಾಜ್ಯ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅರವಿಂದ ಕೇಜ್ರಿವಾಲ್‌ ಬಂಧನವನ್ನು ವಿರೋಧಿಸಿ ಎಎಪಿ ಭಾನುವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ನಡೆಸಿದ ಸಾಮೂಹಿಕ ಉಪವಾಸ ಸತ್ಯಾಗ್ರಹದ ವೇಳೆ ಮಾತನಾಡಿದ ಅವರು, ‘ಚುನಾವಣಾ ಬಾಂಡ್‌ ಮೂಲಕ ಅತಿದೊಡ್ಡ ಹಗರಣ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಲಿ’ ಎಂದು ಆಗ್ರಹಿಸಿದರು.

ಪ್ರಕರಣದ ಪ್ರಮುಖ ಆರೋಪಿ ಶರತ್‌ಚಂದ್ರ ರೆಡ್ಡಿ ಹೇಳಿಕೆ ಆಧರಿಸಿ, ಪ್ರಕರಣಕ್ಕೆ ಸಂಬಂಧವಿರದ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ. ಕೇಜ್ರಿವಾಲ್‌ ವಿರುದ್ಧ ಹೇಳಿಕೆ ನೀಡಿದರೆ, ಚುನಾವಣಾ ಬಾಂಡ್‌ ಮೂಲಕ ಬಿಜೆಪಿಗೆ ದೇಣಿಗೆ ನೀಡಿದರೆ ಬಂಧಮುಕ್ತಗೊಳಿಸುವುದಾಗಿ ಪುಸಲಾಯಿಸಿ ಶರತ್‌ ಚಂದ್ರ ರೆಡ್ಡಿ ಅವರನ್ನು ಸಾಕ್ಷೀದಾರರನ್ನಾಗಿಸಲಾಗಿದೆ. ಶರತ್‌ ಚಂದ್ರ ರೆಡ್ಡಿ ಒಡೆತನದ ಕಂಪನಿ ಬಿಜೆಪಿಗೆ ಚುನಾವಣಾ ಬಾಂಡ್‌ ಮೂಲಕ ಕೋಟ್ಯಂತರ ರೂಪಾಯಿ ದೇಣಿಗೆ ನೀಡಿದೆ. ನಂತರ ಬೆನ್ನು ನೋವು ಎಂಬ ಯಃಕಶ್ಚಿತ್‌ ಕಾರಣಕ್ಕೆ ಪ್ರಮುಖ ಆರೋಪಿಯನ್ನೇ ಬಿಡುಗಡೆ ಮಾಡಲಾಗಿದೆ. ಈ ಅವ್ಯವಹಾರದಲ್ಲಿ ನೇರವಾಗಿ ಭಾಗಿಯಾಗಿರುವ ಬಿಜೆಪಿ ನಾಯಕರನ್ನು ಏಕೆ ಬಂಧಿಸಿಲ್ಲ? ಇದರ ರೂವಾರಿ ನರೇಂದ್ರ ಮೋದಿ ಅವರನ್ನು ಬಂಧಿಸಬೇಕಲ್ಲವೇ ಎಂದು ಚಂದ್ರು ಆಗ್ರಹಿಸಿದರು.

ADVERTISEMENT

ಇದೇ ವೇಳೆ ಮಾತನಾಡಿದ ಪಕ್ಷದ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿರೆಡ್ಡಿ , ರಾಜ್ಯ ಉಪಾಧ್ಯಕ್ಷ ಮೋಹನ್‌ ದಾಸರಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ. ನಾಗಣ್ಣ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಸತೀಶ್‌ ಕುಮಾರ್‌ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.