ADVERTISEMENT

ಹಡಪದ ಜಾತಿ ಪ್ರಮಾಣಪತ್ರ ಸಮಸ್ಯೆ ಪರಿಹರಿಸಲು ಕ್ರಮ: ಸಚಿವ ಶಿವರಾಜ ತಂಗಡಗಿ

ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 21 ಜುಲೈ 2024, 15:57 IST
Last Updated 21 ಜುಲೈ 2024, 15:57 IST
ನಗರದಲ್ಲಿ ಭಾನುವಾರ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ (ಎಡದಿಂದ) ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಅವರು ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು - ಪ್ರಜಾವಾಣಿ ಚಿತ್ರ
ನಗರದಲ್ಲಿ ಭಾನುವಾರ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ (ಎಡದಿಂದ) ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್. ತಂಗಡಗಿ ಅವರು ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು - ಪ್ರಜಾವಾಣಿ ಚಿತ್ರ   

ಬೆಂಗಳೂರು: ಹಡಪದ ಸಮಾಜದ ಮಕ್ಕಳು ಜಾತಿ ಪ್ರಮಾಣ ಪತ್ರ ಪಡೆಯಲು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್‌. ತಂಗಡಗಿ ಭರವಸೆ ನೀಡಿದರು.

ನಗರದಲ್ಲಿ ಭಾನುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈಗ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನ ಮುಗಿದ ಕೂಡಲೇ ಹಡಪದ ಸಮಾಜದ ಮುಖ್ಯಸ್ಥರು, ಸ್ವಾಮೀಜಿಗಳು ಹಾಗೂ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಕೂಡಲೇ ಜಾತಿ ಪ್ರಮಾಣ ಪತ್ರ ವಿತರಣೆಗೆ ಸಂಬಂಧಿಸಿದ ಗೊಂದಲ ಬಗೆಹರಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಹಡಪದ ಸಮಾಜದ ಕಟ್ಟಡಕ್ಕಾಗಿ ಬೆಂಗಳೂರಿನಲ್ಲಿ ಈ ಹಿಂದೆ ನಿವೇಶನವನ್ನು ಗುರುತಿಸಲಾಗಿದ್ದು ಕಾನೂನು ತೊಡಕಿನಿಂದಾಗಿ ಇನ್ನೂ ಮಂಜೂರಾತಿ ಆದೇಶ ಬಂದಿಲ್ಲ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದರು.

ಹಡಪದ ಅಭಿವೃದ್ಧಿ ನಿಗಮ ಸೇರಿ 11 ನಿಗಮಗಳನ್ನು ಹಿಂದಿನ ಸರ್ಕಾರ ಘೋಷಣೆ ಮಾಡಿ ಆದೇಶ ಹೊರಡಿಸಿತ್ತು. ಈ ಘೋಷಣೆ ಕೇವಲ ಕಾಗದದ ಮೇಲೆ ಉಳಿದಿದೆ. ಅದಕ್ಕೆ ಪೂರಕವಾದ ಯಾವುದೇ ಸಿದ್ಧತೆಗಳನ್ನು ಹಿಂದಿನ ಸರ್ಕಾರ ಮಾಡಿರಲಿಲ್ಲ. ಪ್ರತಿ ನಿಗಮಕ್ಕೆ ಕನಿಷ್ಠ ₹ 5 ಕೋಟಿ ರೂಪಾಯಿಗಳನ್ನು ಮೀಸಲಾಗಿಡಬೇಕಿತ್ತು. ಅದನ್ನು ಸಹ ಮಾಡಿರಲಿಲ್ಲ. ಹೀಗಾಗಿ ಈಗ ಸಮಸ್ಯೆ ಎದುರಾಗಿದೆ ಎಂದು ವಿವರಿಸಿದರು.

ಹಡಪದ ಅಪ್ಪಣ್ಣ ದೇವರ ಮಹಾಸಂಸ್ಥಾನ ಮಠದ ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿ ಅಜಯ್ ನಾಗಭೂಷಣ್, ನಿರ್ದೇಶಕಿ ಧರಣಿದೇವಿ ಮಾಲಗತ್ತಿ, ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್, ಬನಶಂಕರಿ ಅಂಗಡಿ, ರಾಜ್ಯ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಸಿದ್ದಪ್ಪ ಹಡಪದ, ಉಪಾಧ್ಯಕ್ಷ ಸಂತೋಷ್ ಹಡಪದ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಹಡಪದ ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.