ಬೆಂಗಳೂರು: ‘ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದ ನಂತರ ಮುಂದಿನ ವಾರ ಹೊಸ ವರ್ಷಾಚರಣೆ ಮಾರ್ಗಸೂಚಿ ಪ್ರಕಟಿಸಲಾಗುವುದು’ ಎಂದು ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ ಹೇಳಿದರು.
ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ವರ್ಷಾಚರಣೆ ಸಂದರ್ಭದಲ್ಲಿ ಈ ಹಿಂದೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿತ್ತು ಎಂಬುದನ್ನು ಅವಲೋಕಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಸಂಭ್ರಮಾಚರಣೆ ಮಾಡುವವರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸುರಕ್ಷತಾ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮಹಾತ್ಮ ಗಾಂಧಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿ ನಗರದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ನೀಡಲಾಗುತ್ತದೆ. ಆದರೆ, ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಜತೆ ಸಭೆ ನಡೆಸಿ, ಅವರು ನೀಡುವ ಸಲಹೆಗಳ ಪ್ರಕಾರವೇ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತದೆ. ಜತೆಗೆ ಭದ್ರತೆಯನ್ನು ಕೈಗೊಳ್ಳಲಾಗುತ್ತದೆ. ಇಲಾಖೆ ಹಂತದಲ್ಲಿ ಸಭೆ ನಡೆಸಲಾಗುವುದು ಎಂದು ಹೇಳಿದರು.
ಇತ್ತೀಚೆಗೆ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಬಂಧನಕ್ಕೊಳಗಾದ ವಿದೇಶಿ ಪೆಡ್ಲರ್ ಲಿಯೋ ನಾರ್ಡ್‌ನ ವಿಚಾರಣೆ ಮುಂದುವರಿಸಿದ್ದು, ಸದ್ಯ ಆರೋಪಿ ಪೊಲೀಸರ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಆತನ ಮೊಬೈಲ್ ಜಪ್ತಿ ಮಾಡಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.