ADVERTISEMENT

ಭೌತಿಕ ತರಗತಿಗಳು ಬೇಡ: ಎಐಡಿಎಸ್‌ಒ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಜನವರಿ 2022, 17:34 IST
Last Updated 18 ಜನವರಿ 2022, 17:34 IST

ಬೆಂಗಳೂರು: ‘ಎಸ್ಸೆಸ್ಸೆಲ್ಸಿ, ಪಿಯುಸಿ, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ನಡೆಸಲಾಗುತ್ತಿದೆ. ಕೋವಿಡ್‌ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಸೋಂಕು ತಗಲುವ ಅಪಾಯ ಇದೆ. ಹೀಗಾಗಿ ತರಗತಿಗಳನ್ನು ಕೂಡಲೇ ಸ್ಥಗಿತಗೊಳಿಸಬೇಕು’ ಎಂದುಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಆನ್‌ಲೈನ್‌ ಪ್ರತಿಭಟನೆ ಮೂಲಕ ಒತ್ತಾಯಿಸಿದೆ.

‘ರಾಜ್ಯದ ಒಟ್ಟಾರೆ ಕೋವಿಡ್‌ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲೇ ಗರಿಷ್ಠ (ಶೇ 85) ಪ್ರಕರಣಗಳು ಪತ್ತೆಯಾಗಿವೆ. ವಿದ್ಯಾರ್ಥಿಗಳು ಭಯದಿಂದಲೇ ತರಗತಿಗಳಿಗೆ ಹಾಜರಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವು ಶಾಲೆ ಹಾಗೂ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಉಪನ್ಯಾಸಕರಿಗೂ ಸೋಂಕು ತಗುಲಿರುವುದು ವರದಿಯಾಗಿದೆ. ಸರ್ಕಾರವು ನಿರ್ಲಕ್ಷ್ಯ ಧೋರಣೆ ಅನುಸರಿಸುವ ಮೂಲಕ ಶಾಲೆ ಹಾಗೂ ಕಾಲೇಜುಗಳನ್ನು ಕೋವಿಡ್‌ ಪ್ರಸರಣ ಕೇಂದ್ರಗಳನ್ನಾಗಿ ಮಾಡಲು ಹೊರಟಿದೆ’ ಎಂದು ಬೆಂಗಳೂರು ಜಿಲ್ಲಾ ಕಾರ್ಯದರ್ಶಿ ಕಲ್ಯಾಣ ಕುಮಾರ್ ದೂರಿದ್ದಾರೆ.

‘ಮಕ್ಕಳನ್ನು ಶಾಲೆ ಹಾಗೂ ಕಾಲೇಜುಗಳಿಗೆ ಕಳುಹಿಸಲು ಪೋಷಕರು ಹೆದರುತ್ತಿದ್ದಾರೆ. ಕಾಲೇಜುಗಳಲ್ಲಿ ಅಂತರ ನಿಯಮ ಪಾಲನೆಯಾಗುತ್ತಿಲ್ಲ. ಮುಖಗವಸು ಧರಿಸುವುದನ್ನೂ ಗಂಭೀರವಾಗಿ ಪರಿಗಣಿಸಲಾಗುತ್ತಿಲ್ಲ. ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕು. ಶಾಲೆ ಹಾಗೂ ಕಾಲೇಜುಗಳನ್ನು ಮುಚ್ಚುವಂತೆ ಕೂಡಲೇ ಆದೇಶಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.