ಬೆಂಗಳೂರು: ‘ಶೋಷಿತರ ಸಮುದಾಯಗಳ ಧ್ವನಿಯಾಗಿರುವ, ಸಿದ್ದರಾಮಯ್ಯ ಅವರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಷಡ್ಯಂತ್ರ ಮಾಡಿವೆ’ ಎಂದು ಆರೋಪಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪದಾಧಿಕಾರಿಗಳು ಸ್ವಾತಂತ್ರ್ಯ ಉದ್ಯಾನದಲ್ಲಿ ಬುಧವಾರ ಕಪ್ಟು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು.
ಒಕ್ಕೂಟದ ಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಮಾತನಾಡಿ, ‘ಗ್ಯಾರಂಟಿ ಯೋಜನೆಗಳ ಮೂಲಕ ಬಡವರಿಗೆ ಶಕ್ತಿ ತುಂಬಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಲು ಜೆಡಿಎಸ್–ಬಿಜೆಪಿ ಕುತಂತ್ರ ಮಾಡುತ್ತಿವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸಂಚಾಲಕರಾದ ಮಾವಳ್ಳಿ ಶಂಕರ್, ಅನಂತ ನಾಯಕ್ ಮಾತನಾಡಿ, ‘ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಮುಖಂಡರಾದ ಮುರುಗೇಶ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಶಶಿಕಲಾ ಜೊಲ್ಲೆ ವಿರುದ್ಧ ತನಿಖೆಗೆ ರಾಜ್ಯಪಾಲರು ಯಾಕೆ ಅನುಮತಿ ನೀಡುತ್ತಿಲ್ಲ? ಮೋದಿ ಮತ್ತು ಅಮಿತ್ ಶಾ ಅವರಿಗೆ ಸಿಂಹಸ್ವಪ್ನ ಆಗಿರುವ, ಸಿದ್ದರಾಮಯ್ಯ ಅವರನ್ನು ಹಣಿಯಲು ರಾಜ್ಯಪಾಲರನ್ನು ಬಳಸಿಕೊಳ್ಳಲಾಗುತ್ತಿದೆ. ಮೋದಿ–ಅಮಿತ್ ಶಾ ಜೋಡಿ ದೆಹಲಿ, ಜಾರ್ಖಂಡ್, ಕೇರಳ, ತಮಿಳುನಾಡು ಸರ್ಕಾರವನ್ನು ರಾಜ್ಯಪಾಲರ ಮೂಲಕ ಅಸ್ಥಿರಗೊಳಿಸಲು ಯತ್ನಿಸಿದ್ದರು. ಈಗ ಕರ್ನಾಟಕದಲ್ಲಿಯೂ ಅಂಥದ್ದೇ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ಒಕ್ಕೂಟದ ಆದರ್ಶ ಯಲ್ಲಪ್ಪ, ಸಿ.ನಂಜಪ್ಪ, ಕೆ.ವೆಂಕಟಸುಬ್ಬರಾಜು, ಗುಂಜಾಲು ರಾಮಕೃಷ್ಣ, ಡಿ. ವೆಂಕಟೇಶ, ರಂಗಪ್ಪ ಅಲೆಮಾರಿ, ಮಂಜಪ್ಪ ಶಿಳ್ಳೆಕ್ಯಾತ, ಅಂಜಲಿ, ಸುಭಾಶ್, ಸತೀಶ್ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.