ಬೆಂಗಳೂರು: ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಯ್ಸಳ ನಗರದಲ್ಲಿ ನಡೆದ ಗಲಾಟೆಯಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಲಾಗಿದೆ.
ಹೊಯ್ಸಳ ನಗರ ನಿವಾಸಿ ಮನೋಜ್(22) ಕೊಲೆಯಾದವರು. ಶನಿವಾರ ಬೆಳಿಗ್ಗೆ 3ನೇ ಮುಖ್ಯರಸ್ತೆಯಲ್ಲಿ ಮನೋಜ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿದ್ದು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಪದವಿ ವ್ಯಾಸಂಗವನ್ನು ಅರ್ಧಕ್ಕೆ ಮೊಟಕುಗೊಳಿಸಿದ್ದ ಮನೋಜ್, ಪಿಜ್ಜಾ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಸೇಹಿತರ ಜತೆ ನಡೆದು ತೆರಳುತ್ತಿದ್ದ ವೇಳೆ ಎದುರಿಗೆ ಬಂದ ಆರೋಪಿಗಳು, ಮನೋಜ್ ಅವರನ್ನು ಗುರಾಯಿಸಿದ್ದಾರೆ. ಇದೇ ವಿಚಾರಕ್ಕೆ ಜಗಳವಾಗಿದ್ದು, ಅದು ವಿಕೋಪಕ್ಕೆ ಹೋಗಿದೆ.
ಈ ವೇಳೆ ಆರೋಪಿ ಮನೋಜ್ ತಲೆಗೆ ರಾಡ್‌ನಿಂದ ಬಲವಾಗಿ ಹೊಡೆದು ಆರೋಪಿ ಪರಾರಿ ಆಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮನೋಜ್‌ನನ್ನು ಸ್ನೇಹಿತರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಅವರು ಮೃತಪಟ್ಟಿದ್ಧಾರೆ. ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.