ಬೆಂಗಳೂರು: ಚಲಿಸುವ ರೈಲಿಗೆ ಕಲ್ಲು ತೂರಾಟ ನಡೆಸುವುದು, ದಹಿಸುವ ವಸ್ತುಗಳನ್ನು ರೈಲಿನಲ್ಲಿ ಒಯ್ಯುವುದರ ವಿರುದ್ಧ ಜಾಗೃತಿ ಮೂಡಿಸುವ ಮತ್ತು ಕಾರ್ಯಾಚರಣೆ ನಡೆಸುವ ಒಂದು ತಿಂಗಳ ಕಾರ್ಯಕ್ರಮಕ್ಕೆ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದಲ್ಲಿ ಸೋಮವಾರ ಚಾಲನೆ ನೀಡಲಾಯಿತು.
ಬೆಂಗಳೂರು ವಿಭಾಗದ ಅಧಿಕಾರಿಗಳು, ಸಿಬ್ಬಂದಿ ಮತ್ತು ರೈಲ್ವೆ ಸಂರಕ್ಷಣಾ ಪಡೆ (ಆರ್‌ಪಿಎಫ್) ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಲಿದೆ. ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಬೀದಿ ನಾಟಕ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ನಗರದ ‘ಕೃಷ್ಣ ದೇವರಾಯ ಹಾಲ್ಟ್’ ರೈಲು ನಿಲ್ದಾಣದಲ್ಲಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೀಶ್ ಮೋಹನ್ ಈ ಅಭಿಯಾನಕ್ಕೆ ಚಾಲನೆ ನೀಡಿದರು.
ರೈಲುಗಳ ಮೇಲೆ ಕಲ್ಲು ತೂರಾಟ ನಡೆಸುವುದು ಕ್ರಿಮಿನಲ್ ಅಪರಾಧವಾಗಿದ್ದು, ದಂಡ, ಐದು ವರ್ಷಗಳವರೆಗೆ ಜೈಲು ಶಿಕ್ಷೆ, ದಹನಕಾರಿ ವಸ್ತುಗಳನ್ನು ರೈಲಿನಲ್ಲಿ ಒಯ್ದರೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲು ಅವಕಾಶವಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.