ADVERTISEMENT

ಬಿಬಿಎಂಪಿ ವ್ಯಾಪ್ತಿಯಲ್ಲಿ ಹಗಲು ವೇಳೆ ಪಟಾಕಿ ಸ್ಫೋಟಕ್ಕೆ ನಿಷೇಧ

ರಾತ್ರಿ 8ರಿಂದ 10ರವರೆಗೆ ಹಸಿರು ಪಟಾಕಿ ಸ್ಫೋಟಕ್ಕಷ್ಟೇ ಅನುಮತಿ: ಬಿಬಿಎಂಪಿ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2024, 16:00 IST
Last Updated 28 ಅಕ್ಟೋಬರ್ 2024, 16:00 IST
ಪಟಾಕಿ
ಪಟಾಕಿ   

ಬೆಂಗಳೂರು: ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಯಂತ್ರಿಸಿ ಸುಪ್ರೀಂ ಕೋರ್ಟ್‌ ನೀಡಿರುವ ಆದೇಶ, ನಿರ್ದೇಶನಗಳನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಪಾಲಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪಟಾಕಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಹಲವು ನಿರ್ದೇಶನಗಳನ್ನು ನೀಡಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ರಾತ್ರಿ 8ರಿಂದ 10 ಗಂಟೆಯವರೆಗೆ  ಹಸಿರು ಪಟಾಕಿಗಳನ್ನು ಮಾತ್ರ ಸ್ಫೋಟಿಸಲು ಅವಕಾಶ ನೀಡಿದೆ. ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಸುಪ್ರೀಂ ಕೋರ್ಟ್‌ ನಿರ್ದೇಶನಗಳಲ್ಲಿ ಅನುಮತಿಸಿರುವ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಯಾವುದೇ ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಹ ನಿಷೇಧಿಸಿರಲಾಗಿರುತ್ತದೆ. ‘ಹಸಿರು ಪಟಾಕಿ’ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ವೆಬ್‌ಸೈಟ್‌ನಲ್ಲಿ (https://kspcb.karnataka.gov.in/honble-supreme-court-directions-fire-crrackers) ಮಾಹಿತಿ ಲಭ್ಯವಿರುತ್ತದೆ ಎಂದು ಬಿಬಿಎಂಪಿ ತಿಳಿಸಿದೆ.

ADVERTISEMENT

ಸಾರ್ವಜನಿಕರು 2024ರ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸಬೇಕು. ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಅಧಿಕಾರಿಗಳು ಜನರಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು. ನಿಷೇಧಿತ ಪಟಾಕಿಗಳ ಮಾರಾಟ, ದಾಸ್ತಾನು ಮಾಡುವವರ ವಿರುದ್ಧ ಕ್ರಮ ಕೈಗೊಂಡು, ಇಡೀ ಗೋದಾಮನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಂಬಂಧಿಸಿದ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ತುಷಾರ್ ಗಿರಿನಾಥ್‌ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.