ADVERTISEMENT

ಬಸವನಗುಡಿ ವಿಧಾನಸಭಾ ಕ್ಷೇತ್ರ :ಕಾಂಗ್ರೆಸ್‌ ವೆಂಕಟೇಶ್‌ಗೆ ಟಿಕೆಟ್‌ ಬಹುತೇಕ ಖಚಿತ

ಬಸವನಗುಡಿ ವಿಧಾನಸಭಾ ಕ್ಷೇತ್ರ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2023, 19:37 IST
Last Updated 18 ಫೆಬ್ರುವರಿ 2023, 19:37 IST
ನಗರದಲ್ಲಿ ನಡೆದ ಕಾಂಗ್ರೆಸ್‌ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ, ಡಾ. ಶಂಕರ್‌ ಗುಹಾ ಮತ್ತು ಯು.ಬಿ. ವೆಂಕಟೇಶ್, ಬಿ.ಕೆ. ಹರಿಪ್ರಸಾದ್ ಮತ್ತು ಡಿ.ಕೆ. ಶಿವಕುಮಾರ್‌ ಪಾಲ್ಗೊಂಡಿದ್ದರು
ನಗರದಲ್ಲಿ ನಡೆದ ಕಾಂಗ್ರೆಸ್‌ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ, ಡಾ. ಶಂಕರ್‌ ಗುಹಾ ಮತ್ತು ಯು.ಬಿ. ವೆಂಕಟೇಶ್, ಬಿ.ಕೆ. ಹರಿಪ್ರಸಾದ್ ಮತ್ತು ಡಿ.ಕೆ. ಶಿವಕುಮಾರ್‌ ಪಾಲ್ಗೊಂಡಿದ್ದರು   

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಸವನಗುಡಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ವಿಧಾನ ಪರಿಷತ್‌ ಸದಸ್ಯ ಯು.ಬಿ. ವೆಂಕಟೇಶ್‌ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಈ ಕ್ಷೇತ್ರದ ಪ್ರಬಲ ಟಿಕೆಟ್‌ ಆಕಾಂಕ್ಷಿಯಾಗಿದ್ದ ಕೆಪಿಸಿಸಿ ವಕ್ತಾರ ಡಾ. ಶಂಕರ್‌ ಗುಹಾ ಅವರ ಮನವೊಲಿಸುವಲ್ಲಿ ಕಾಂಗ್ರೆಸ್‌ ನಾಯಕರು ಯಶಸ್ವಿಯಾಗಿದ್ದಾರೆ.

ನಗರದ ರ‍್ಯಾಡಿಸನ್‌ ಬ್ಲ್ಯೂ ಹೋಟೆಲ್‌ನಲ್ಲಿ ಶುಕ್ರವಾರ ರಾತ್ರಿ ನಡೆದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯ ಸಂದರ್ಭದಲ್ಲಿ ಇಬ್ಬರ ಜೊತೆಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್‌ ಚರ್ಚೆ ನಡೆಸಿದ್ದಾರೆ. ಈ ವೇಳೆ, ವೆಂಕಟೇಶ್‌ ಅವರಿಗೆ ಎಲ್ಲ ರೀತಿಯಲ್ಲೂ ಬೆಂಬಲ ನೀಡುವು
ದಾಗಿ ಶಂಕರ್‌ ಗುಹಾ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ ಹಗರಣದಲ್ಲಿ ಹಣ ಕಳೆದುಕೊಂಡ ಗ್ರಾಹಕರ ಪರ ಹೋರಾಟ ನಡೆಸುವ ಮೂಲಕ ಯು.ಬಿ. ವೆಂಕಟೇಶ್‌ ಮತ್ತು ಶಂಕರ್‌ ಗುಹಾ ಕ್ಷೇತ್ರ ವ್ಯಾಪ್ತಿಯಲ್ಲಿ ಪರಿಚಿತರಾಗಿದ್ದಾರೆ.

ADVERTISEMENT

ಕೋವಿಡ್ ಸಂದರ್ಭದಲ್ಲಿ ಕೂಲಿ ಕಾರ್ಮಿಕರು ಮತ್ತು ನಿರ್ಗತಿಕರಿಗೆ ಆಹಾರ ಕಿಟ್ ವಿತರಿಸಿದ್ದ ಶಂಕರ್ ಗುಹಾ ಅವರೂ ಸ್ಥಳೀಯವಾಗಿ ಜನಪ್ರಿಯತೆ ಪಡೆದಿದ್ದಾರೆ. ಜೊತೆಗೆ, ಕಾಂಗ್ರೆಸ್‌ ಪಕ್ಷ ಸಂಘಟನೆಯಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ತಂದೆ ರಾಮಚಂದ್ರ ಗುಹಾ ಅವರ ಜನಪ್ರಿಯತೆ ಹಾಗೂ ಪ್ರಭಾವದ ಜತೆಗೆ ಶಂಕರ್ ಕೂಡ ತಮ್ಮದೇ ಆದ ವರ್ಚಸ್ಸು ಬೆಳೆಸಿ
ಕೊಂಡಿದ್ದಾರೆ. ಹೀಗಾಗಿ, ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್‌ ವಲಯದಲ್ಲಿ ಚರ್ಚೆ
ನಡೆದಿತ್ತು.

‌ಬಿಜೆಪಿಯಿಂದ ಹಾಲಿ ಶಾಸಕ ರವಿಸುಬ್ರಹ್ಮಣ್ಯ ಮತ್ತೆ ಕಣಕ್ಕಿಳಿಯಲಿದ್ದು, ಅವರಿಗೆ ಪೈಪೋಟಿ ನೀಡಲು ಯು.ಬಿ. ವೆಂಕಟೇಶ್‌ ಸೂಕ್ತ ಅಭ್ಯರ್ಥಿ ಎಂಬ ನಿರ್ಧಾರಕ್ಕೆ ಬಂದಿರುವ ಕಾಂಗ್ರೆಸ್‌ ನಾಯಕರು, ಅವರಿಗೆ ಮಣೆ ಹಾಕಲು ಮುಂದಾಗಿದ್ದಾರೆ. ಪಕ್ಷದಲ್ಲಿ ಶಂಕರ್‌ ಗುಹಾ ಅವರಿಗೆ ಉತ್ತಮ ಸ್ಥಾನಮಾನ ನೀಡುವ ಜೊತೆಗೆ ಮುಂದಿನ ಅವಧಿಗೆ ಅವಕಾಶ ನೀಡುವ ಭರವಸೆ ನೀಡಲಾಗಿದೆ. ಅದಕ್ಕೆ ಅವರು ಒಪ್ಪಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.