ADVERTISEMENT

ಮಹಿಳೆಯರಿಗಾಗಿ ವಿವಿಧೋದ್ದೇಶ ಸಹಕಾರಿ ಸಂಘ: ಬಸವರಾಜ ಬೊಮ್ಮಾಯಿ ಘೋಷಣೆ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 19:30 IST
Last Updated 20 ಮಾರ್ಚ್ 2022, 19:30 IST
ಕಾರ್ಯಕ್ರಮದಲ್ಲಿ ಸಾಧಕರಿಗೆ ‘ಸಹಕಾರ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ಜಿ.ಟಿ.ದೇವೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಹಕಾರ ಸಚಿವ ಎಸ್.ಟಿ.ಸೋಮಶೇಖರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಡಿ.ವಿ.ಸದಾನಂದಗೌಡ ಪರಿಸರ ಸಚಿವ ಆನಂದ್ ಸಿಂಗ್ ಹಾಗೂ ಇತರರು ಇದ್ದಾರೆ
ಕಾರ್ಯಕ್ರಮದಲ್ಲಿ ಸಾಧಕರಿಗೆ ‘ಸಹಕಾರ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ಜಿ.ಟಿ.ದೇವೇಗೌಡ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು, ಸಹಕಾರ ಸಚಿವ ಎಸ್.ಟಿ.ಸೋಮಶೇಖರ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಡಿ.ವಿ.ಸದಾನಂದಗೌಡ ಪರಿಸರ ಸಚಿವ ಆನಂದ್ ಸಿಂಗ್ ಹಾಗೂ ಇತರರು ಇದ್ದಾರೆ   

ಬೆಂಗಳೂರು: ‘ಸರ್ಕಾರದ ಶೇ 90ರಷ್ಟು ಷೇರು ಬಂಡವಾಳದೊಂದಿಗೆ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲೂ ಮಹಿಳೆಯರಿಗಾಗಿ ವಿವಿಧೋದ್ದೇಶ ಸಹಕಾರಿ ಸಂಘಗಳನ್ನು ಆರಂಭಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯ ಸಹಕಾರ ಮಹಾಮಂಡಳ, ರಾಜ್ಯ ಸಹಕಾರ ವಸತಿ ಮಹಾಮಂಡಳ ಹಾಗೂ ಸಹಕಾರ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಸಾಧಕರಿಗೆ ‘ಸಹಕಾರ ರತ್ನ’ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಸೇರಿ ಒಟ್ಟು 60 ಮಂದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

‘ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದವರುಸಹಕಾರ ರಂಗದ ವಿವಿಧ ಸಂಘ ಸಂಸ್ಥೆಗಳಲ್ಲಿ ಸದಸ್ಯರಾಗಬೇಕು. ಇದನ್ನು ಉತ್ತೇಜಿಸಲು ಈ ಸಮುದಾಯದವರ ಸದಸ್ಯತ್ವ ಶುಲ್ಕವನ್ನು ಸರ್ಕಾರವೇ ಭರಿಸಲಿದೆ. ಸಹಕಾರ ರಂಗದ ಯಶಸ್ಸಿನಲ್ಲಿ ದುಡಿಯುವ ವರ್ಗ ಹಾಗೂ ಮಹಿಳೆಯರ ಪಾಲ್ಗೊಳ್ಳುವಿಕೆ ಮಹತ್ವದ್ದಾಗಿದೆ. ನಾವು ಸಹಕಾರಿ ಕ್ಷೇತ್ರದಲ್ಲಿ ಔದ್ಯೋಗಿಕ ಕ್ರಾಂತಿ ಮಾಡಲು ನಿರ್ಧರಿಸಿದ್ದೇವೆ’ ಎಂದರು.

ADVERTISEMENT

‘ಹಾಲು ಉತ್ಪಾದನೆಯ ಲಾಭವು ನೇರವಾಗಿ ಹೈನುಗಾರರಿಗೆ ಸೇರಬೇಕು. ಇದನ್ನು ಗಮನದಲ್ಲಿಟ್ಟುಕೊಂಡು ‘ಕ್ಷೀರ ಸಮೃದ್ಧಿ ಬ್ಯಾಂಕ್‌’ ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಇದಕ್ಕಾಗಿ ಬಜೆಟ್‌ನಲ್ಲಿ ₹100 ಕೋಟಿ ಅನುದಾನ ಒದಗಿಸಿದ್ದೇವೆ. ಪ್ರತಿ ತಾಲ್ಲೂಕಿನಲ್ಲೂ ಶೀಘ್ರವೇಬ್ಯಾಂಕ್‌ ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಬ್ಯಾಂಕ್‌ ಮೂಲಕ ಹಾಲು ಉತ್ಪಾದಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸಿಗಲಿದೆ’ ಎಂದು ತಿಳಿಸಿದರು.

‘ಪಠ್ಯಪುಸ್ತಕಗಳಲ್ಲಿ ಸಹಕಾರ ಕ್ಷೇತ್ರದ ಮಾಹಿತಿ ಅಳವಡಿಕೆಗೆ ಮನವಿ ಮಾಡಲಾಗಿದೆ. ಸಹಕಾರ ಕ್ಷೇತ್ರದ ಅಭಿವೃದ್ಧಿಗೆ ಶಾಸಕರ ನಿಧಿ ಬಳಸಲು ಅವಕಾಶ ನೀಡುವಂತೆ ಹಲವರು ಒತ್ತಾಯಿಸಿದ್ದಾರೆ. ಈ ಬೇಡಿಕೆಗಳನ್ನು ಪರಿಶೀಲಿ‌ಸುತ್ತೇವೆ’ ಎಂದರು.

‘ಅಧ್ಯಕ್ಷರು ಬದಲಾಗಬೇಕು’
‘ಸಹಕಾರ ರಂಗದಲ್ಲಿರುವವರೇ ಸಾಹುಕಾರರಾಗಬಾರದು. ಅಧ್ಯಕ್ಷ ಸ್ಥಾನದ ಅವಧಿ ಮುಗಿದ ಬಳಿಕ ಮತ್ತೊಬ್ಬರಿಗೆ ಅವಕಾಶ ನೀಡಿ ನಂತರದ ಅವಧಿಗೆ ಅವರೇ ಅಧ್ಯಕ್ಷರಾಗುತ್ತಿದ್ದಾರೆ. ಈ ಧೋರಣೆ ಬದಲಾಗಬೇಕು’ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

‘ಸಹಕಾರ ರಂಗ ಸಹಕಾರಿಯಾಗಿಯೇ ಉಳಿಯಬೇಕು. ಬಂಡವಾಳಶಾಹಿ ಮತ್ತು ಸಮತಾವಾದಕ್ಕೆ ಸಹಕಾರ ರಂಗವೇ ಉತ್ತರ’ ಎಂದರು.

33 ಲಕ್ಷ ಮಂದಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ
‘ಪ್ರಸಕ್ತ ಸಾಲಿನಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸುಮಾರು ₹23 ಸಾವಿರ ಕೋಟಿ ಸಾಲ ನೀಡಲಾಗುತ್ತದೆ’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದರು.

‘ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ₹5 ಪ್ರೋತ್ಸಾಹ ಧನ ನೀಡಲು ₹1,050 ಕೋಟಿ ಅನುದಾನ ಮೀಸಲಿಡಲಾಗಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.