ಬೆಂಗಳೂರು: ನಗರದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಈ ವರ್ಷ ಸುಮಾರು ₹20 ಕೋಟಿ ವೆಚ್ಚ ಮಾಡಿದೆ ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.
ರಸ್ತೆ ಗುಂಡಿಗಳನ್ನು ಮುಚ್ಚಲು ಸುಮಾರು ₹30 ಕೋಟಿ ವೆಚ್ಚ ಮಾಡಲಾಗುತ್ತಿತ್ತು. ಈ ಬಾರಿ ಹೊಸ ಸಾಫ್ಟ್‌ವೇರ್ ಅಳವಡಿಕೆಯಿಂದ ವೆಚ್ಚ ಕಡಿಮೆಯಾಗಿದೆ. ಸುಮಾರು 22 ಸಾವಿರ ಗುಂಡಿಗಳನ್ನು ಮುಚ್ಚಲು ಈವರೆಗೆ ₹20 ಕೋಟಿ ವೆಚ್ಚ ಮಾಡಲಾಗಿದೆ ಎಂದು ಅವರು ಸುದ್ದಿಗಾರರಿಗೆ ಮಂಗಳವಾರ ವಿವರ ನೀಡಿದರು.
ನಗರದಲ್ಲಿ ಗುಂಡಿಗಳನ್ನು ಮುಚ್ಚಲು ಸಾಕಷ್ಟು ಕ್ರಮ ವಹಿಸಲಾಗಿದೆ. ಕೆಲವು ಬಾರಿ ತುರ್ತಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಆದರೆ ಮಳೆ ಬಿಡುವು ಕೊಡದೆ ಎಲ್ಲ ರೀತಿಯ ಗುಂಡಿಗಳನ್ನು ಮುಚ್ಚಲು ಸಾಧ್ಯವಾಗುತ್ತಿಲ್ಲ. ಇರುವ ಸೌಲಭ್ಯ ಬಳಸಿಕೊಂಡು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
ಈ ಹಿಂದೆ ಸಂಚಾರ ಪೊಲೀಸರು ನೀಡಿದ್ದ ರಸ್ತೆಗಳ ಪೈಕಿ ಇನ್ನೂ ಒಂದೂವರೆ ಸಾವಿರ ಗುಂಡಿಗಳನ್ನು ಮುಚ್ಚಬೇಕಿದೆ. ಸತತ ಮಳೆಯಿಂದ ಇದೀಗ ಗುಂಡಿಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ರಸ್ತೆ ಗುಂಡಿಗಳನ್ನು ತುರ್ತಾಗಿ ಮುಚ್ಚಲು ಕ್ರಮ ಕೈಗೊಳ್ಳಲಾಗಿದೆ. ಕಲ್ಲು ಹಾಗೂ ಮರಳಿನ ಮಿಶ್ರಣವನ್ನು ಹಾಕಲಾಗುತ್ತಿದೆ ಎಂದು ಬಿಬಿಎಂಪಿ ಯೋಜನೆ ವಿಭಾಗ ವಿಶೇಷ ಆಯುಕ್ತ ರವೀಂದ್ರ
ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.