ಬೆಂಗಳೂರು: ಬಿಬಿಎಂಪಿ ಆಸ್ತಿ ತೆರಿಗೆ ಸುಸ್ತಿದಾರರಿಗಾಗಿ ಜಾರಿಗೆ ತರಲಾಗಿದ್ದ ‘ಒಂದು ಬಾರಿ ಪರಿಹಾರ ಯೋಜನೆ’ (ಒಟಿಎಸ್)ಯ ಕಾಲಾವಧಿ ಜುಲೈ 31 ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಒತ್ತಡದ ಮೇರೆಗೆ ಆಗಸ್ಟ್ 31ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
13ನೇ ನ್ಯಾನೋ ತಂತ್ರಜ್ಞಾನ ಸಮ್ಮೇಳನ ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜತೆ ಶುಕ್ರವಾರ ಮಾತನಾಡಿದ ಅವರು, ಈವರೆಗೂ ₹ 3 ಸಾವಿರ ಕೋಟಿಯಷ್ಟು ಆಸ್ತಿ ತೆರಿಗೆ ಸಂಗ್ರಹವಾಗಿದೆ. ಹೆಚ್ಚುವರಿಯಾಗಿ ₹ 400 ಕೋಟಿ ತೆರಿಗೆ ಸಂಗ್ರಹವಾಗಿದೆ. ಕೆಲ ಬದಲಾವಣೆ ಮಾಡಿಕೊಳ್ಳಬೇಕು ಮತ್ತು ಒಟಿಎಸ್ ಕಾಲಾವಧಿ ಒಂದು ತಿಂಗಳು ವಿಸ್ತರಣೆ ಮಾಡಬೇಕು ಎಂದು ಅಧಿಕಾರಿಗಳು ಹಾಗೂ ಸಾರ್ವಜನಿಕರಿಂದ ಒತ್ತಡ ಬರುತ್ತಿದೆ. ಸರ್ವರ್ ಸಮಸ್ಯೆ ಹಾಗೂ ಮತ್ತೆ ಕೆಲವರು ಚೆಕ್ ನೀಡಿದ್ದು, ಜುಲೈ 31ರವರೆಗೆ ನೀಡಲಾಗಿದ್ದ ಕಾಲಾವಧಿಯನ್ನು ಒಂದು ತಿಂಗಳವರೆಗೆ ವಿಸ್ತರಣೆ ಮಾಡಲಾಗಿದೆ ಎಂದರು.
ಪ್ರಾಮಾಣಿಕವಾಗಿ ತೆರಿಗೆ ಪಾವತಿ ಮಾಡುತ್ತಿರುವವರಿಗೆ ತೊಂದರೆಯಾಗದ ರೀತಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಲಾಗುವುದು. ಒಂದು ವೇಳೆ ಯಾರಾದರೂ ಹೆಚ್ಚಿಗೆ ಹಣ ಪಾವತಿ ಮಾಡಿದ್ದರೆ, ಮುಂದಿನ ಬಾರಿ ಆಸ್ತಿ ತೆರಿಗೆ ಪಾವತಿ ವೇಳೆ ಅದನ್ನು ವಜಾಗೊಳಿಸಲಾಗುವುದು. ಈ ವಿಚಾರದಲ್ಲಿ ಅನಗತ್ಯವಾಗಿ ಗಾಬರಿಯಾಗುವುದು ಬೇಡ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.