ಬೆಂಗಳೂರು: ‘ಲಾಭದಾಯಕ ಹುದ್ದೆ ಆಕ್ಷೇಪಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂಬ ಕೋರಿಕೆಯನ್ನು ಪರಿಗಣಿಸಲು ಹೈಕೋರ್ಟ್ ನಿರಾಕರಿಸಿದೆ.
ಈ ಕುರಿತಂತೆ ವಕೀಲ ಎ.ಎಸ್.ಹರೀಶ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಶನಿವಾರ ಪ್ರಕಟಿಸಿತು. ‘ಅರ್ಜಿದಾರರ ಮನವಿ ರಾಜ್ಯಪಾಲರ ಪರಿಶೀಲನೆಯಲ್ಲಿದ್ದು, ರಾಜ್ಯಪಾಲರ ಕಚೇರಿಗೆ ನಿರ್ದೇಶನ ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಹೇಳಿದೆ.
‘ಬಿಡಿಎ ಅಧ್ಯಕ್ಷ ಹುದ್ದೆಯಲ್ಲಿರುವ ಎಸ್.ಆರ್. ವಿಶ್ವನಾಥ್, ವೇತನ ಮತ್ತು ಭತ್ಯೆ ಪಡೆಯುತ್ತಿದ್ದಾರೆ.ಲಾಭದಾಯಕ ಹುದ್ದೆ ಹೊಂದಿರುವ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು’ ಎಂದು ಅರ್ಜಿದಾರರು ಕೋರಿದ್ದರು.
ಎಸ್.ಆರ್.ವಿಶ್ವನಾಥ್ 2018ರ ವಿಧಾನಸಭೆ ಚುನಾವಣೆಯಲ್ಲಿ ಬೆಂಗಳೂರಿನ ಯಲಹಂಕ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.