ADVERTISEMENT

ಬೆಂಗಳೂರು | ಕಟ್ಟಡ ಕುಸಿದ ಸ್ಥಳಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 18:15 IST
Last Updated 22 ಅಕ್ಟೋಬರ್ 2024, 18:15 IST
<div class="paragraphs"><p>ಡಿ.ಕೆ. ಶಿವಕುಮಾರ್</p></div>

ಡಿ.ಕೆ. ಶಿವಕುಮಾರ್

   

ಬೆಂಗಳೂರು: ಕಟ್ಟಡಗಳ ಸುಭದ್ರತೆಯ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುತ್ತಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಆದಷ್ಟು ಬೇಗ ಇದರ ಬಗ್ಗೆ ಸಮೀಕ್ಷೆ ಕಾರ್ಯ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ನಗರದ ಬಾಬುಸಾ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಭೇಟಿ ನೀಡಿ ಅವರು ಮಾತನಾಡಿದರು.

ADVERTISEMENT

'60x40 ಅಳತೆಯ ನಿವೇಶನದಲ್ಲಿ ಇಷ್ಟು ದೊಡ್ಡ ಕಟ್ಟಡ ಕಟ್ಟಿರುವುದು ದೊಡ್ಡ ಅಪರಾಧ. ಅಧಿಕಾರಿಗಳು ಮೂರು ಬಾರಿ ನೋಟಿಸ್ ನೀಡಿದ್ದೇವೆ ಎಂದು ತಿಳಿಸಿದ್ದಾರೆ. ನೋಟೀಸ್ ನೀಡಿದರೆ ಸಾಲದು ಅದರ  ಬದಲು ಕಠಿಣ ಕ್ರಮ ತೆಗೆದುಕೊಳ್ಳಬೇಕಿತ್ತು. ಇದು ನಮಗೆ ದೊಡ್ಡ ಪಾಠವಾಗಿದೆ. ರಕ್ಷಣಾ ಕಾರ್ಯ ಮುಗಿದ ನಂತರ ಮುಂದಿನ ಎರಡು ದಿನಗಳಲ್ಲಿ ಇದರ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು‌ ಎಂದರು.

ನಗರದಾದ್ಯಂತ  ಅಕ್ರಮ ಕಟ್ಟಡಗಳ ಬಗ್ಗೆ ಸರ್ವೆ ಕಾರ್ಯ ಮಾಡಲಾಗುವುದು. ಕಟ್ಟಡ ವಿನ್ಯಾಸ ಹೊಂದಿರದವರಿಗೆ ಯಾವುದೇ ಕಾರಣಕ್ಕೂ ನೋಂದಣಿ ಮಾಡಿಕೊಡಬಾರದು ಎಂದು ಕಂದಾಯ ಇಲಾಖೆಗೆ ಸೂಚನೆ ನೀಡಲಾಗುವುದು. ಕಡಿಮೆ ದುಡ್ಡಿಗೆ ನಿವೇಶನ ತೆಗೆದುಕೊಂಡು ಮಾರಾಟ ಮಾಡಲು ಈ ರೀತಿ ಮಾಡಲಾಗುತ್ತದೆ. ಇಂತಹ ಅಕ್ರಮಗಳನ್ನು ತಡೆಗಟ್ಟುವ  ಕಾರಣಕ್ಕಾಗಿ ರೇರಾ ಕಾಯ್ದೆ ಜಾರಿಯಲ್ಲಿದೆ ಎಂದರು.

ಎನ್ ಡಿಆರ್ ಎಫ್ ಮತ್ತು ಎಸ್ ಡಿ ಆರ್ ಎಫ್ ತಂಡದವರು ಅತ್ಯಂತ ಜಾಗರೂಕವಾಗಿ ರಕ್ಷಣಾ ಕೆಲಸ ಮಾಡುತ್ತಿದ್ದಾರೆ. ಆಂಧ್ರ ಮತ್ತು ಬಿಹಾರ್ ರಾಜ್ಯದ ಕಾರ್ಮಿಕರು ಇಲ್ಲಿ ಕೆಲಸ ಮಾಡುತ್ತಿದ್ದರು. ಮೃತಪಟ್ಟಿರುವ ಒಬ್ಬ ಕಾರ್ಮಿಕರ ಗುರುತು ಸಿಕ್ಕಿದ್ದು, ಆತ ಬಿಹಾರದವರು ಎಂದು ತಿಳಿದುಬಂದಿದೆ ಎಂದರು.

ಕಟ್ಟಡ ನಿರ್ಮಾಣ ಗುತ್ತಿಗೆದಾರ, ನಿವೇಶನದ ಮಾಲೀಕ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ರಕ್ಷಣೆ ಕಾರ್ಯ ಮುಗಿದ ನಂತರ ಕಾರ್ಮಿಕರಿಗೆ ಪರಿಹಾರವನ್ನು ಕೊಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.