ADVERTISEMENT

ಈ ವರ್ಷ 11,760 ಕಿ.ಮೀ ರಸ್ತೆ ಮೇಲ್ದರ್ಜೆಗೆ ತೀರ್ಮಾನ

ಲೋಕೋಪಯೋಗಿ ಇಲಾಖೆ ಸಭೆಯಲ್ಲಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 3 ಜೂನ್ 2020, 21:18 IST
Last Updated 3 ಜೂನ್ 2020, 21:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ 1,650 ಕಿ.ಮೀ ಗ್ರಾಮೀಣ ರಸ್ತೆಯನ್ನು ಜಿಲ್ಲಾ ಮುಖ್ಯ ರಸ್ತೆಯನ್ನಾಗಿ ಮತ್ತು 10,110 ಕಿ.ಮೀ ಜಿಲ್ಲಾ ಮುಖ್ಯರಸ್ತೆಯನ್ನು ರಾಜ್ಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು ತೀರ್ಮಾನಿಸಲಾಗಿದೆ.

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಲೋಕೋಪಯೋಗಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು.

ರಾಜ್ಯದಲ್ಲಿ ಒಟ್ಟು 4,813 ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳನ್ನು ₹30,675 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಕಳೆದ ವರ್ಷ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಹಾಳಾದ ರಸ್ತೆ ಮತ್ತು ಸೇತುವೆಗಳ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು ಎಂದು ಯಡಿಯೂರಪ್ಪ ತಿಳಿಸಿದರು.

ADVERTISEMENT

ಪ್ರವಾಹ ಕಾಮಗಾರಿಗಳನ್ನು ₹500 ಕೋಟಿ ವೆಚ್ಚದಲ್ಲಿ ಕೈಗೊಂಡಿದ್ದು, ಪ್ರವಾಹದಿಂದ ಹಾಳಾಗಿರುವ 1,800 ರಸ್ತೆ ಕಾಮಗಾರಿಗಳ ಪೈಕಿ 1,700 ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿವೆ. ಸೇತುವೆ ನಿರ್ಮಾಣ ಮತ್ತು ದುರಸ್ತಿ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಎಂಜಿನಿಯರ್‌ಗಳ ನೇಮಕಾತಿ ಪ್ರಕ್ರಿಯೆ ವಿಳಂಬವಾಗಿರುವುದರಿಂದ ನಿರುದ್ಯೋಗಿ ಎಂಜಿನಿಯರ್‌
ಗಳನ್ನು ಟ್ರೈನಿಗಳೆಂದು ನೇಮಕ ಮಾಡಬೇಕು ಎಂದೂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಶಿವಮೊಗ್ಗ ನಗರದ ಸೋಗಾನೆ ಗ್ರಾಮದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದ ಅವಧಿಯಲ್ಲಿ ಪೂರ್ಣಗೊಳಿಸಬೇಕು ಮತ್ತು ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಹೇಳಿದರು.

ವಿವಿಧ ಎಂಜಿನಿಯರಿಂಗ್‌ ಇಲಾಖೆಗಳ ದರಪಟ್ಟಿಯನ್ನು ಪರಿಶೀಲಿಸಿ ರಾಜ್ಯದಾದ್ಯಂತ ಏಕರೂಪದ ದರಪಟ್ಟಿಯನ್ನು ಪ್ರಕಟಿಸಲು ಇಲಾಖೆಯ ನಿವೃತ್ತ ಅಧಿಕಾರಿಗಳ ತಾಂತ್ರಿಕ ಸಮಿತಿ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲಿಯೇ ವರದಿ ಸಲ್ಲಿಸಲಿದ್ದಾರೆ.

ಏಕರೂಪ ಪಟ್ಟಿ ಹೊರಬಂದಲ್ಲಿ ಇಲಾಖೆಗೆ ನೂರಾರು ಕೋಟಿ ಉಳಿಸಬಹುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದರು.

‘ಸುವರ್ಣಸೌಧಕ್ಕೆ ಕಚೇರಿಗಳ ಸ್ಥಳಾಂತರಿಸಿ’
‘ರಾಜ್ಯಮಟ್ಟದ ಹಲವು ಇಲಾಖಾ ಕಚೇರಿಗಳನ್ನು ಗುರುತಿಸಿ, ಒಂದು ತಿಂಗಳಲ್ಲಿ ಬೆಳಗಾವಿಯ ಸುವರ್ಣಸೌಧಕ್ಕೆ ಸ್ಥಳಾಂತರಿಸಬೇಕು’ ಎಂದು ಯಡಿಯೂರಪ್ಪ ಕಟ್ಟಪ್ಪಣೆ ಮಾಡಿದರು.

‘ಮುಂದಿನ ಪ್ರಗತಿ ಪರಿಶೀಲನಾ ಸಭೆಯೊಳಗೆ ಕಚೇರಿಗಳು ಅಲ್ಲಿ ಕೆಲಸ ನಿರ್ವಹಿಸುವುದನ್ನು ನಾನು ಖುದ್ದಾಗಿ ಪರಿಶೀಲಿಸುತ್ತೇನೆ’ ಎಂದು ಅವರು ಪ್ರಗತಿ ಪರಿಶೀಲನಾ ಸಭೆ ಹೇಳಿದರು.

ಯಾವ ಯಾವ ಇಲಾಖಾ ಕಚೇರಿಗಳನ್ನು ಸ್ಥಳಾಂತರಿಸಬೇಕು ಎಂಬುದನ್ನು ತಕ್ಷಣವೇ ಪಟ್ಟಿ ಮಾಡಬೇಕು. ಸ್ಥಳಾಂತರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು. ಯಾವುದೇ ಸಬೂಬು ನೀಡಬಾರದು ಎಂದು ಎಚ್ಚರಿಸಿದರು.

ಸುವರ್ಣಸೌಧದಲ್ಲಿ ವರ್ಷಕ್ಕೊಮ್ಮೆ ಅಧಿವೇಶನ ನಡೆಸುವುದನ್ನು ಬಿಟ್ಟರೆ ಬೇರೆ ಯಾವುದೇ ಚಟುವಟಿಕೆ ನಡೆಯುತ್ತಿಲ್ಲ. ಉತ್ತರಕರ್ನಾಟಕ ಭಾಗದ ಜನರಿಗೆ ಆಡಳಿತ ಹತ್ತಿರವಾಗಬೇಕು ಎಂಬ ಕಾರಣಕ್ಕೆ ಸುವರ್ಣಸೌಧವನ್ನು ನಿರ್ಮಿಸಲಾಯಿತು. ಕೆಲವು ಇಲಾಖೆಗಳ ಕಚೇರಿಗಳಾದರೂ ಅಲ್ಲಿರಬೇಕು ಎಂದೂ ಯಡಿಯೂರಪ್ಪ ಬಯಸಿದ್ದರು. ಆದರೆ, ಅವರ ಆಶಯ ಇನ್ನೂ ಈಡೇರಿಲ್ಲ. ಹೀಗಾಗಿ ಕಟ್ಟುನಿಟ್ಟಿನ ಸೂಚನೆ ನೀಡಿದರು ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.