ADVERTISEMENT

ಬೆಸ್ಕಾಂಗೆ 'ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್' ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2024, 15:45 IST
Last Updated 5 ನವೆಂಬರ್ 2024, 15:45 IST
ಪ್ರಶಸ್ತಿ ಫಲಕ
ಪ್ರಶಸ್ತಿ ಫಲಕ   

ಬೆಂಗಳೂರು: ಎಲೆಕ್ಟ್ರಿಕ್‌ ವಾಹನಗಳ(ಇವಿ) ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಉತ್ತಮ ಚಾರ್ಜಿಂಗ್‌ ಮೂಲಸೌಕರ್ಯ ಕಲ್ಪಿಸಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ (ಬೆಸ್ಕಾಂ) ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್‘ ಪ್ರಶಸ್ತಿ ಸಂದಿದೆ.

ಇ-ಮೊಬಿಲಿಟಿ ಸಂಸ್ಥೆ ಇತ್ತೀಚೆಗೆ ಆಯೋಜಿಸಿದ್ದ ಸಮಾರಂಭದಲ್ಲಿ ಬೆಸ್ಕಾಂಗೆ ‘ಚಾರ್ಜ್ ಇಂಡಿಯಾ 2024 ಎಕ್ಸಲೆನ್ಸ್' ಪ್ರಶಸ್ತಿ ಪ್ರದಾನ ಮಾಡಲಾಯಿತು.

ಬಿಎಂಟಿಸಿ, ಇ.ವಿ ಚಾರ್ಚಿಂಗ್‌ ಸೇವೆ ಒದಗಿಸುವ ಖಾಸಗಿ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಇ.ವಿ ಉದ್ಯಮದ ಪ್ರಮುಖರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

'ಸುಸ್ಥಿರ ಮತ್ತು ಶುದ್ಧ ಇಂಧನ ಬಳಕೆ ವಿಚಾರದಲ್ಲಿ ರಾಜ್ಯ ಸರ್ಕಾರದ ಬದ್ಧತೆಗೆ ಸಂದ ಪ್ರಶಸ್ತಿ ಇದು. ಖಾಸಗಿ ಪ್ರಾಬಲ್ಯಕ್ಕೆ ಅವಕಾಶ ಕೊಡೆದೇ, ಇ.ವಿ ಬಳಕೆದಾರರಿಗೆ ಕಡಿಮೆ ವೆಚ್ಚದಲ್ಲಿ ಚಾರ್ಜಿಂಗ್‌ ಮೂಲಸೌಕರ್ಯ ಒದಗಿಸುವಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನದಲ್ಲಿದೆ. ಇದು ಹೆಮ್ಮೆಯ ಸಂಗತಿ’ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯಿಸಿದ್ದಾರೆ.

ADVERTISEMENT

‘ಸಾರ್ವಜನಿಕ–ಖಾಸಗಿ ಸಹಭಾಗಿತ್ವದ ಮಾದರಿಯಲ್ಲಿ ರಾಜ್ಯದಾದ್ಯಂತ ಸುಮಾರು 2,500 ಹೊಸ ಇ.ವಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವನೆ’ ಇದೆ ಎಂದು ಅವರು ತಿಳಿಸಿದ್ದಾರೆ.

‘ರಾಜ್ಯದಲ್ಲಿ ಇ.ವಿ ಚಾರ್ಜಿಂಗ್ ಮೂಲಸೌಕರ್ಯವನ್ನು ಕಲ್ಪಿಸುವ ನೋಡೆಲ್‌ ಏಜೆನ್ಸಿಯಾಗಿರುವ ಬೆಸ್ಕಾಂಗೆ ಪ್ರಶಸ್ತಿ ಸಂದಿರುವುದು ಹೆಮ್ಮೆ ಸಂಗತಿ. ಇದು ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ‘ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಸಂತಸ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ, ದೇಶದಲ್ಲೇ ಅತಿ ಹೆಚ್ಚು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್‌ ಕೇಂದ್ರಗಳನ್ನು ಹೊಂದಿರುವ ರಾಜ್ಯವಾಗಿದೆ. ರಾಜ್ಯದಲ್ಲಿ ಒಟ್ಟು 5,765 ಇ.ವಿ ಚಾರ್ಜಿಂಗ್‌ ಸ್ಟೇಷನ್‌ಗಳಿವೆ. 3,728 ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿರುವ ಮಹಾರಾಷ್ಟ್ರ, ಎರಡನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ- 1,989 ಮತ್ತು ದೆಹಲಿಯಲ್ಲಿ 1,941 ಚಾರ್ಜಿಂಗ್ ಸ್ಟೇಷನ್‌ಗಳಿದ್ದು, ನಂತರದ ಸ್ಥಾನದಲ್ಲಿವೆ.

ದೇಶದ ಪ್ರಮುಖ ನಗರಗಳಿಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಇ.ವಿ ಬಳಕೆದಾರರ ಸಂಖ್ಯೆ ಹೆಚ್ಚು. ಇದಕ್ಕೆ ಪೂರಕವಾಗಿ ಸರ್ಕಾರ, ಬೆಂಗಳೂರು ನಗರ ಜಿಲ್ಲೆಯಲ್ಲಿ 4,462 ಇವಿ ಚಾರ್ಜಿಂಗ್‌ ಸ್ಟೇಷನ್‌ಗಳನ್ನು ಆರಂಭಿಸಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.