ಬೆಂಗಳೂರು: ನಿಯಂತ್ರಣ ತಪ್ಪಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟಿರುವ ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿದೇಶದಿಂದ ಪೋಷಕರನ್ನು ನೋಡಲು ನಗರಕ್ಕೆ ಬಂದಿದ್ದ ಆರ್.ಆರ್.ನಗರ ನಿವಾಸಿ ಪ್ರಖ್ಯಾತ್ (26) ಮೃತ ಯುವಕ. ಬುಧವಾರ ತಡರಾತ್ರಿ 1 ಗಂಟೆ ಸುಮಾರಿಗೆ ಆರ್.ಆರ್.ನಗರ ಮುಖ್ಯರಸ್ತೆಯಿಂದ ಜಯಣ್ಣ ಸರ್ಕಲ್ ಕಡೆ ಹೋಗುವಾಗ ದುರ್ಘಟನೆ ನಡೆದಿದೆ ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಪ್ರಖ್ಯಾತ್ ನಾಲ್ಕು ತಿಂಗಳಿಂದ ಹಾಂಕಾಂಗ್ನ ವಿಮಾನಯಾನ ಸಂಸ್ಥೆಯಲ್ಲಿ ಪರಿಚಾರಕರಾಗಿದ್ದರು. ಕೆಲ ದಿನಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ ಅವರು, ಬಟ್ಟೆ ಹಾಗೂ ಇತರೆ ವಸ್ತುಗಳನ್ನು ಖರೀದಿಸಿದ್ದರು. ಆರ್.ಆರ್.ನಗರ ಗೇಟ್ ಬಳಿ ಸ್ನೇಹಿತರನ್ನು ಭೇಟಿ ಮಾಡಿ, ಬೈಕ್ನಲ್ಲಿ ವಾಪಸ್ ಮನೆಗೆ ಬರುವಾಗ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಇರುವ ಮರಕ್ಕೆ ಡಿಕ್ಕಿ ಹೊಡೆದಿದ್ದಾರೆ. ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿವೆ.
ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಪರೀಕ್ಷಿಸಿದ ವೈದ್ಯರು ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದರು.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಪೋಷಕರಿಗೆ ಹಸ್ತಾಂತರಿಸಲಾಯಿತು. ಕೆಂಗೇರಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.