ಕಲಬುರಗಿ: ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಪರಿವರ್ತಿಸುವ ಶತಮಾನದ ಸಮಸ್ಯೆಯನ್ನು ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಪರಿಹರಿಸಿದ್ದು, ಫೆಬ್ರವರಿ ಅಂತ್ಯದ ವೇಳೆಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಕುಡಚಿ ಶಾಸಕ ಪಿ.ರಾಜೀವ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 1,650 ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಗುರಿಯಿದ್ದು, ಈಗಾಗಲೇ 700 ತಾಂಡಾಗಳ ಪ್ರಕ್ರಿಯೆ ಚಾಲನೆಯಲ್ಲಿದೆ. ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಜಿಲ್ಲೆಗೆ ಆಗಮಿಸಲಿದ್ದು, ಸೇಡಂ ತಾಲ್ಲೂಕಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಮೂಲಕ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಇದು ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದ ಅತಿದೊಡ್ಡ ಸಾಧನೆಯಾಗಿದ್ದು, ಬ್ರಿಟಿಷ್ ಹಾಗೂ ಕಾಂಗ್ರೆಸ್ ಸರ್ಕಾರಗಳ ಅವಧಿಯಲ್ಲೂ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸಿರಲಿಲ್ಲ. ಕೇಂದ್ರ ಬಿಜೆಪಿ ಸರ್ಕಾರ ರೂಪಿಸಿದ ಸ್ವಾಮಿತ್ವ ಯೋಜನೆಯ ಫಲವಾಗಿ ಇದು ಸಾಧ್ಯವಾಗಿದೆ. ಜತೆಗೆ ಶಾಸಕ ಬಿ.ಎಸ್. ಯಡಿಯೂರಪ್ಪ, ಸಚಿವ ಆರ್.ಅಶೋಕ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಕ್ರಿಯಾಶೀಲತೆಯಿಂದ ಈ ಕಾರ್ಯ ಸಾಧ್ಯವಾಗಿದೆ ಎಂದರು.
ರಾಜಕುಮಾರ ಪಾಟೀಲ ತೇಲ್ಕೂರ ಅವರು ಮಾತನಾಡಿ, ಪ್ರಧಾನಿ ಮೋದಿಯವರ ಕಾರ್ಯಕ್ರಮದ ಸಿದ್ಧತೆ 5000 ಕಾರ್ಯಕರ್ತರು ಸ್ವಯಂಸೇವಕರಾಗಿ ಕಾರ್ಯಪ್ರವೃತ್ತರಾಗಿದ್ದು, ಸುಮಾರು 5 ಲಕ್ಷ ಜನರು ಸೇರುವ ನಿರೀಕ್ಷೆಯಿದೆ. ಊಟದ ವ್ಯವಸ್ಥೆ, ನೀರು, ಪಾರ್ಕಿಂಗ್, ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಹಾಗೂ ವೈದ್ಯರ ವ್ಯವಸ್ಥೆ ಹಾಗೂ ಅಗ್ನಿ ಅವಘಡ ಸಂಭವಿಸಿದರೆ ಅಗ್ನಿ ಶ್ಯಾಮಕ ದಳದ ಸಿಬ್ಬಂದಿ ಹಾಜರಿರಲಿದ್ದಾರೆ ಎಂದು ತಿಳಿಸಿದರು.
1 ಲಕ್ಷ ಯುವಕರು: ಪ್ರಧಾನಿಯವರ ಕಾರ್ಯಕ್ರಮಕ್ಕೆ ಸುಮಾರು 50,000 ಬೈಕ್‌ಗಳ ಮೂಲಕ 1 ಲಕ್ಷ ಯುವಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಲಂಬಾಣಿ ಮಹಿಳೆಯರು, ತಮ್ಮ ಸಾಂಪ್ರದಾಯಿಕ ಬಂಜಾರ ಉಡುಗೆ–ತೊಡುಗೆ ಧರಿಸುವ ಮೂಲಕ ಪ್ರಧಾನಿಯವರನ್ನು ಸ್ವಾಗತಿಸಲಿದ್ದಾರೆ. ಜತೆಗೆ ವಿವಿಧ ಲಂಬಾಣಿ ಕಲಾತಂಡಗಳು ಕೂಡ ಪ್ರಧಾನಿಯವರ ಸ್ವಾಗತ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲಿವೆ. ಸುಮಾರು 20 ಸಾವಿರಕ್ಕೂ ಹೆಚ್ಚು ಸಣ್ಣ ಉದ್ಯಮಿಗಳು, ಸ್ಟಾರ್ಟ್‌ಅಪ್‌ಗಳ, ವಕೀಲರು, ವೈದ್ಯರು, ವಿವಿಧ ಉದ್ಯೋಗಗಳಲ್ಲಿರುವ ವಿವಿಧ ವೃತ್ತಿಪರರಿಗೆ ಆಹ್ವಾನ ಪತ್ರಿಕೆ ನೀಡಿ, ವಿಶೇಷವಾಗಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.