ADVERTISEMENT

ಬೆಂಗಳೂರಿಗೆ ನೀರು ಪೂರೈಕೆಯಲ್ಲಿ ಲೋಪ: ಖಾಲಿ ಕೊಡ ಹಿಡಿದು ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2024, 15:45 IST
Last Updated 12 ಮಾರ್ಚ್ 2024, 15:45 IST
ಕುಡಿಯುವ ನೀರು ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು
– ಪ್ರಜಾವಾಣಿ ಚಿತ್ರ
ಕುಡಿಯುವ ನೀರು ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು – ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯ ರಾಜಧಾನಿಯ ಜನರಿಗೆ ಸಮಪರ್ಕವಾಗಿ ಕುಡಿಯುವ ನೀರು ಪೂರೈಸುವಲ್ಲಿ ಕಾಂಗ್ರೆಸ್‌ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಖಾಲಿ ಕೊಡ ಹಿಡಿದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬಿಜೆಪಿಯ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಕೇಂದ್ರ ಜಿಲ್ಲಾ ಘಟಕಗಳು ಪ್ರತಿಭಟನೆಯ ನೇತೃತ್ವ ವಹಿಸಿದ್ದವು. ಮಹಿಳೆಯರು ಖಾಲಿ ಕೊಡ ಹಿಡಿದು ಪ್ರತಿಭಟಿಸಿದರೆ, ಪುರುಷರು ಖಾಲಿ ಬ್ಯಾರೆಲ್‌ಗಳನ್ನು ಹಿಡಿದು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೆಲವರು ಬ್ಯಾರೆಲ್‌ಗಳನ್ನು ಹಿಡಿದು ಕುದುರೆ ಗಾಡಿಯಲ್ಲಿ ಪ್ರತಿಭಟನಾ ಸ್ಥಳಕ್ಕೆ ಬಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಮುಖವಾಡಗಳನ್ನು ತೊಟ್ಟ ಕೆಲವು ಪ್ರತಿಭಟನಾಕಾರರು, ಇಬ್ಬರ ವಿರುದ್ಧವೂ ಘೋಷಣೆಗಳನ್ನು ಕೂಗಿದರು.

ADVERTISEMENT

ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್‌. ರವಿಕುಮಾರ್‌ ಮಾತನಾಡಿ, ‘ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ಕರ್ನಾಟಕದ ಜನರಿಗೆ ಕುಡಿಯುವ ನೀರು ಕೊಡಲು ವಿಫಲವಾಗಿದೆ. ಜನರಿಗೆ ಮದ್ಯ ಕುಡಿಸುವುದಕ್ಕೆ ಹೆಚ್ಚಿನ ಆಸಕ್ತಿ ಹೊಂದಿದೆ. ಹೀಗಾಗಿ ಮದ್ಯ ಮಾರಾಟದ ಗುರಿಯನ್ನು ಹೆಚ್ಚಳ ಮಾಡುತ್ತಿದೆ’ ಎಂದು ಟೀಕಿಸಿದರು.

ಸಂಸದರಾದ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್, ಶಾಸಕ ರವಿ ಸುಬ್ರಹ್ಮಣ್ಯ, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಕೆ.ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷ ಸಪ್ತಗಿರಿ ಗೌಡ, ರಾಜ್ಯ ಘಟಕದ ಮುಖ್ಯ ವಕ್ತಾರ ಅಶ್ವತ್ಥ್ ನಾರಾಯಣ ಗೌಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.