ADVERTISEMENT

ಬಿಜೆಪಿ, ಜೆಡಿಎಸ್‌ ಅಪವಿತ್ರ ಮೈತ್ರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 10 ಮಾರ್ಚ್ 2024, 23:54 IST
Last Updated 10 ಮಾರ್ಚ್ 2024, 23:54 IST
ಸಿದ್ದರಾಮಯ್ಯ, ಮುಖ್ಯಮಂತ್ರಿ 
ಸಿದ್ದರಾಮಯ್ಯ, ಮುಖ್ಯಮಂತ್ರಿ    

ಕೆಂಗೇರಿ: ‘ಅಪವಿತ್ರ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್‌ಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ಪ್ರಜ್ಞಾವಂತ ಶಿಕ್ಷಕರು ಬುದ್ದಿ ಕಲಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪುಟ್ಟಣ್ಣ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಇಲ್ಲಿನ ಸೂಲಿಕೇರಿ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಶಿಕ್ಷಕರ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ‘ಈ ಉಪಚುನಾವಣೆಯ ಫಲಿತಾಂಶ ಲೋಕಸಭೆ ಚುನಾವಣೆಯ ದಿಕ್ಸೂಚಿಯಾಗಲಿದೆ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದರು. ಶಿಕ್ಷಕರ ಈ ತೀರ್ಮಾನವನ್ನು ಅಪವಿತ್ರ ಮೈತ್ರಿ ಪಕ್ಷಗಳು ‌ಒಪ್ಪಲಿವೆಯೇ’ ಎಂದು ಚುಚ್ಚಿದರು.

‘ಬೆಂಗಳೂರು ಗ್ರಾಮಾಂತರದಿಂದ ಡಿ.ಕೆ. ಸುರೇಶ್ ಅವರು ನಾಲ್ಕನೇ ಬಾರಿ ಖಂಡಿತ ಗೆಲುವು ಸಾಧಿಸಲಿದ್ದಾರೆ. ಬಿಜೆಪಿಯವರು ನರೇಂದ್ರ ಮೋದಿಯವರ ಹೆಸರಿನಲ್ಲಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆಯೇ ಹೊರತು ಬಿಜೆಪಿಯವರಿಗೆ ಜನರ ಬಳಿ ಹೋಗಲು ವಿಷಯಗಳೇ ಇಲ್ಲ’ ಎಂದರು.

ADVERTISEMENT

‘ರಾಜ್ಯದ ನೀರಾವರಿ ಯೋಜನೆಗಳು, ಬರ ಪರಿಹಾರ ಹಾಗೂ ಜಿಎಸ್‌ಟಿ ಹಣ ಬಿಡುಗಡೆ ಹೋರಾಟಕ್ಕೆ ಬೆಂಬಲ ನೀಡದೆ ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದೆ. ರಾಜ್ಯಕ್ಕೆ ಬರಬೇಕಾದ ಪಾಲು ಕೇಳಿದರೆ ಸಂಸದ ಡಿ.ಕೆ. ಸುರೇಶ್ ವಿರುದ್ಧ ದೇಶದ್ರೋಹದ ಕಳಂಕ ಹೊರಿಸುತ್ತಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಪುಟ್ಟಣ್ಣ ಮಾತನಾಡಿ, ‘ಆರೋಗ್ಯ ವಿಮೆ, ಪಿಂಚಣಿ, ಶಿಕ್ಷಕರ ರಕ್ಷಣಾ ಕಾಯ್ದೆ, ಎಲ್.ಆರ್. ವೈದ್ಯನಾಥನ್ ವರದಿ ಜಾರಿ ಸೇರಿದಂತೆ ಶಿಕ್ಷಕರ ಬೇಡಿಕೆ ಹಾಗೂ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಕೆಲ ದಿನಗಳಲ್ಲೇ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಚರ್ಚೆ ನಡೆಸಿ, ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಹೇಳಿದರು.

ಸಚಿವರಾದ ಎನ್‌. ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ಶಾಸಕ ಎಚ್‌.ಸಿ. ಬಾಲಕೃಷ್ಣ, ಸಂಸದ ಡಿ.ಕೆ. ಸುರೇಶ್, ಮುಖಂಡರಾದ ಆನೇಕಲ್ ರಾಮೋಜಿ ಗೌಡ, ಕುಸುಮಾ ಹನುಮಂತರಾಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.