ADVERTISEMENT

ಬಿಜೆಪಿ ಸದಸ್ಯತ್ವ ಅಭಿಯಾನ: ಯಲಹಂಕ ದೇಶದಲ್ಲೇ ಪ್ರಥಮ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2024, 16:07 IST
Last Updated 31 ಅಕ್ಟೋಬರ್ 2024, 16:07 IST
ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ವಿಧಾನಸಭಾವಾರು ಸದಸ್ಯತ್ವ ನೋಂದಣಿಯಲ್ಲಿ ಯಲಹಂಕ ದೇಶದಲ್ಲಿಯೇ ಪ್ರಥಮ ಸ್ಥಾನ ಪಡೆದಿರುವ ಕಾರಣಕ್ಕೆ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅಭಿನಂದಿಸಿದರು.
ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ವಿಧಾನಸಭಾವಾರು ಸದಸ್ಯತ್ವ ನೋಂದಣಿಯಲ್ಲಿ ಯಲಹಂಕ ದೇಶದಲ್ಲಿಯೇ ಪ್ರಥಮ ಸ್ಥಾನ ಪಡೆದಿರುವ ಕಾರಣಕ್ಕೆ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅಭಿನಂದಿಸಿದರು.   

ಯಲಹಂಕ: ಕ್ಷೇತ್ರದಲ್ಲಿ 2.13 ಲಕ್ಷಕ್ಕೂ ಹೆಚ್ಚು ಜನರನ್ನು ಬಿಜೆಪಿ ಸದಸ್ಯರನ್ನಾಗಿ ನೋಂದಾಯಿಸಿರುವ ಮೂಲಕ ದೇಶದಲ್ಲೇ ಯಲಹಂಕ ಮೊದಲ ಸ್ಥಾನದಲ್ಲಿರುವುದು ಅತೀವ ಸಂತಸ ತಂದಿದೆ ಎಂದು ಶಾಸಕ ಎಸ್‌.ಆರ್‌.ವಿಶ್ವನಾಥ್‌ ಹೇಳಿದರು.

ಬಿಜೆಪಿ ದೇಶದಾದ್ಯಂತ ಕೈಗೊಂಡಿರುವ ಸದಸ್ಯತ್ವ ಅಭಿಯಾನದಲ್ಲಿ ಯಲಹಂಕ ವಿಧಾನಸಭಾ ಕ್ಷೇತ್ರವು ದೇಶಕ್ಕೆ ಪ್ರಥಮ ಸ್ಥಾನ ಪಡೆದಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ನೇತೃತ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು. 

ಪಕ್ಷಕ್ಕೆ ಹೊಸದಾಗಿ ಸದಸ್ಯರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ವಿಶೇಷವಾಗಿ ಯುವಕರು ಮತ್ತು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯತ್ವ ಪಡೆಯುವ ಮೂಲಕ ಬಿಜೆಪಿ ಪರವಾಗಿ ಒಲವು ತೋರಿಸುತ್ತಿದ್ದಾರೆ ಎಂದರು.

ADVERTISEMENT

‘ಸದಸ್ಯತ್ವ ಅಭಿಯಾನದ ಆರಂಭದಲ್ಲಿ ಕನಿಷ್ಠ 2 ಲಕ್ಷ ನೂತನ ಸದಸ್ಯರನ್ನು ನೋಂದಾಯಿಸಿ ಕೊಳ್ಳಬೇಕೆಂಬ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ನಿರೀಕ್ಷೆಗೂ ಮೀರಿ ಕ್ಷೇತ್ರದಲ್ಲಿ ನೋಂದಣಿ ಆಗಿದ್ದು, ಕಾರ್ಯಕರ್ತರು ಮನೆಮನೆಗೆ ತೆರಳಿ ಜನರ ಜೊತೆಗೆ ಸಂಪರ್ಕ ಸಾಧಿಸಿ, ನಿಸ್ವಾರ್ಥ ಸೇವೆ ಮಾಡಿದ್ದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು. ಸದಸ್ಯತ್ವ ನೋಂದಣಿಯ ಕೊನೇ ದಿನಾಂಕದೊಳಗೆ ಇನ್ನೂ 10 ಸಾವಿರಕ್ಕೂ ಹೆಚ್ಚಿನ ಸದಸ್ಯರನ್ನು ನೋಂದಾಯಿಸುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿಗಳಾದ ನಂದೀಶ್‌ ರೆಡ್ಡಿ, ಪಿ. ರಾಜೀವ್‌, ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್‌ ಸದಸ್ಯ ಎನ್‌. ರವಿಕುಮಾರ್‌, ಮಾಜಿ ಸದಸ್ಯ ಕ್ಯಾಪ್ಟನ್‌ ಗಣೇಶ್‌ ಕಾರ್ಣಿಕ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.