ADVERTISEMENT

ಹಾಲಿನ ದರ ಇಳಿಕೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಜೂನ್ 2024, 20:16 IST
Last Updated 29 ಜೂನ್ 2024, 20:16 IST
<div class="paragraphs"><p>ಹಾಲಿನ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. </p></div>

ಹಾಲಿನ ದರ ಇಳಿಕೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಸದಸ್ಯರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

   

ಬೆಂಗಳೂರು: ಹಾಲಿನ ದರ ಏರಿಕೆ ಹಿಂಪಡೆಯುವಂತೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ಸದಸ್ಯರು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳದಲ್ಲೇ ಹಾಲು ಕಾಯಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌, ‘ಹಾಲಿನ ದರ ಏರಿಕೆಯಿಂದ ಗ್ರಾಹಕರಿಗೆ ಹೊರೆಯಾಗಿದೆ. ಇದರಿಂದ ರೈತರಿಗೂ ಅನುಕೂಲ ಆಗಿಲ್ಲ. ದರ ಏರಿಕೆಯ ಮೂಲಕ ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರವು ಜನರ ಮೇಲೆ ಬರೆ ಎಳೆದಿದೆ’ ಎಂದು ಟೀಕಿಸಿದರು.

ADVERTISEMENT

‘ಈ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆಯನ್ನು ಸ್ಥಗಿತಗೊಳಿಸಿದೆ. ಹಾಲಿನ ಪ್ರೋತ್ಸಾಹ ಧನವನ್ನೂ ಎಂಟು ತಿಂಗಳಿಂದ ರೈತರಿಗೆ ಪಾವತಿಸಿಲ್ಲ. ರೈತರ ನೆರವಿಗೆ ಬಾರದ ಸರ್ಕಾರ, ಅವರ ಹೆಸರಿನಲ್ಲಿ ದರ ಹೆಚ್ಚಿಸುವುದು ಯಾವ ನ್ಯಾಯ’ ಎಂದು ಕೇಳಿದರು.

ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ಮಾತನಾಡಿ, ‘ಹಾಲಿನ ದರ ಏರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಮೊಂಡು ವಾದ ಬಿಡಬೇಕು. ತಕ್ಷಣವೇ ದರ ಹೆಚ್ಚಳ ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಕೆ. ರಾಮಮೂರ್ತಿ, ಪಕ್ಷದ ಪದಾಧಿಕಾರಿಗಳು, ಮೋರ್ಚಾದ ಪ್ರಮುಖರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.