ಮಂಗಳೂರು/ಬೆಂಗಳೂರು: ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶನಿವಾರ ಬೆಳಿಗ್ಗೆ ಕರೆತರಲಾಗಿದ್ದು, ಸುಟ್ಟ ಗಾಯಗಳ ವಿಭಾಗದಲ್ಲಿ ಆತನಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.
ಮಂಗಳೂರು ಗರೋಡಿಯಲ್ಲಿ ನ. 19ರಂದು ಸಂಭವಿಸಿದ್ದ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಶಾರಿಕ್‌ಗೆ ಸ್ಥಳೀಯ ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದೇಹದ ಶೇ 45ರಷ್ಟು ಭಾಗ ಸುಟ್ಟಿದ್ದರಿಂದ ಶಾರಿಕ್‌ನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ.
ಆರೋಗ್ಯದಲ್ಲಿ ಸುಧಾರಣೆ ಕಾಣದಿದ್ದರಿಂದ ಎನ್‌ಐಎ ಅಧಿಕಾರಿಗಳ ವಿಚಾರಣೆಗೂ ಅಡ್ಡಿಯಾಗಿತ್ತು. ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಶಾರಿಕ್‌ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಎನ್‌ಐಎ ಅಧಿಕಾರಿಗಳು ಮೊಕ್ಕಾಂ: ವಿಕ್ಟೋರಿಯಾ ಆಸ್ಪತ್ರೆಯ ಕೊಠಡಿಯಲ್ಲಿ ಶಾರಿಕ್‌ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕಾವಲಿಗಾಗಿ ಎನ್‌ಐಎ ಅಧಿಕಾರಿಗಳು ಆಸ್ಪತ್ರೆಯಲ್ಲಿ ಮೊಕ್ಕಾಂ ಹೂಡಿದ್ದಾರೆ. ಸ್ಥಳೀಯ ವಿ.ವಿ.ಪುರ ಠಾಣೆಯ ಇಬ್ಬರು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.
‘ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಶಾರಿಕ್‌ಗೆ ಚಿಕಿತ್ಸೆ ನೀಡಲಾರಂಭಿಸಿದ್ದಾರೆ. ಆತನ ಆರೋಗ್ಯ ಸ್ಥಿತಿ ಹಾಗೂ ಚಿಕಿತ್ಸಾ ಕ್ರಮಗಳ ಬಗ್ಗೆ ಎನ್‌ಐಎ ಅಧಿಕಾರಿಗಳು ನಿರಂತರವಾಗಿ ಮಾಹಿತಿ ಪಡೆಯುತ್ತಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.