ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗದೆ ಫಲಾನುಭವಿಗಳನ್ನೇ ಕಡಿಮೆ ಮಾಡಲು ಕಾಂಗ್ರೆಸ್ ನೇತೃತ್ವದ ಸರ್ಕಾರ ಹೊರಟಿದೆ. ಇದರ ಭಾಗವಾಗಿ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದುಪಡಿಸಲಾಗುತ್ತಿದೆ ಎಂದು ಎಎಪಿ ಆರೋಪಿಸಿದೆ.
‘ಸುಮಾರು 11 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಯಾವುದೇ ಪರಿಶೀಲನೆ ನಡೆಸದೆ ಅವೈಜ್ಞಾನಿಕವಾಗಿ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಬಡವರು, ರೈತರು, ವಿಧವೆಯರು ಸೇರಿದಂತೆ ಅಶಕ್ತರು ತೊಂದರೆಗೆ ಒಳಗಾಗುತ್ತಾರೆ’ ಎಂದು ಆಮ್ ಆದ್ಮಿ ಪಕ್ಷದ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ ತಿಳಿಸಿದರು.
ಗ್ಯಾರಂಟಿ ಯೋಜನೆ ಜಾರಿಗೆ ವರ್ಷಕ್ಕೆ ₹ 54 ಸಾವಿರ ಕೋಟಿ ಖರ್ಚಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಇಷ್ಟೊಂದು ಹಣ ಹೊಂದಿಸಲು ಸಾಧ್ಯವಾಗದೆ ಸರ್ಕಾರವು ಬಿಪಿಎಲ್ ಕಾರ್ಡ್ ಸಂಖ್ಯೆ ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದೆ ಎಂದು ಆರೋಪಿಸಿದರು.
‘ಯಾವುದೇ ಅಧಿಕಾರಿಗಳು ಮನೆಗಳಿಗೆ ಹೋಗಿ ಪರಿಶೀಲನೆ ಮಾಡಿಲ್ಲ. ಕೂತಲ್ಲೇ ಸಿಕ್ಕ ಸಿಕ್ಕ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುತ್ತಿದ್ದಾರೆ. ದುಡ್ಡು ಕೊಟ್ಟವರಿಗೆ ರೇಷನ್ ಕಾರ್ಡ್ ಮಾಡಿಕೊಡಲಾಗಿದೆ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.