ADVERTISEMENT

ಬ್ರ್ಯಾಂಡ್ ಬೆಂಗಳೂರು | ಸರ್ಕಾರಿ ವೈದ್ಯಕೀಯ ವ್ಯವಸ್ಥೆ ಬಲವರ್ಧನೆ

ನಗರದ ಪ್ರಮುಖ ಆಸ್ಪತ್ರೆಗಳಲ್ಲಿ ಹಾಸಿಗೆ ಸಂಖ್ಯೆ ಹೆಚ್ಚಳ * ನೂತನ ಕಟ್ಟಡಗಳ ನಿರ್ಮಾಣ

ವರುಣ ಹೆಗಡೆ
Published 22 ಅಕ್ಟೋಬರ್ 2024, 0:30 IST
Last Updated 22 ಅಕ್ಟೋಬರ್ 2024, 0:30 IST
ಸಂಜಯ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ಆವರಣದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾ ಚಿಕಿತ್ಸಾ ಸಂಕೀರ್ಣ
ಸಂಜಯ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ಆವರಣದಲ್ಲಿ ನಿರ್ಮಾಣಗೊಂಡಿರುವ ಕ್ರೀಡಾ ಚಿಕಿತ್ಸಾ ಸಂಕೀರ್ಣ   

ಬೆಂಗಳೂರು: ಖಾಸಗಿ ವೈದ್ಯಕೀಯ ವ್ಯವಸ್ಥೆಯಡಿ ಚಿಕಿತ್ಸೆ ದುಬಾರಿ ಆಗಿರುವುದರಿಂದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಈ ಕಾರಣದಿಂದಾಗಿ ಇಲ್ಲಿನ ಪ್ರಮುಖ ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಹೊಸ ಕಟ್ಟಡಗಳ ನಿರ್ಮಾಣ, ಅತ್ಯಾಧುನಿಕ ತಂತ್ರಜ್ಞಾನಗಳ ಅಳವಡಿಕೆ, ಸಿಬ್ಬಂದಿ ಹೆಚ್ಚಳದಂತಹ ಉಪಕ್ರಮಗಳೊಂದಿಗೆ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಲಾರಂಭಿಸಿವೆ.

ಬೆಂಗಳೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಲು ಇಲ್ಲಿನ ಆಸ್ಪತ್ರೆಗಳು ಕೂಡ ಕಾರಣ. ನಗರದಲ್ಲಿ ಲಭ್ಯವಿರುವ ವೈದ್ಯಕೀಯ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರೆತಿದೆ. ಇದರಿಂದಾಗಿ ಹೊರ ರಾಜ್ಯದ ಜತೆಗೆ ಹೊರ ದೇಶದಿಂದಲೂ ರೋಗಿಗಳು ಶಸ್ತ್ರಚಿಕಿತ್ಸೆಗಳಿಗೆ ಬರುತ್ತಿದ್ದಾರೆ. ಹೀಗಾಗಿ, ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ‘ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ’ದಂತಹ ಯೋಜನೆಗಳು ಇಲ್ಲಿನ ರೋಗಿಗಳಿಗೆ ಆಶಾಕಿರಣವಾಗಿದ್ದು, ಲಕ್ಷಾಂತರ ರೂಪಾಯಿ ವೆಚ್ಚದ ಶಸ್ತ್ರಚಿಕಿತ್ಸೆಗಳನ್ನೂ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ನಡೆಸಲಾಗುತ್ತಿದೆ. ರೋಗಿಗಳ ದಟ್ಟಣೆ ಹೆಚ್ಚುತ್ತಿರುವುದರಿಂದ ಆಸ್ಪತ್ರೆಗಳಲ್ಲಿನ ಹಾಸಿಗೆಗಳ ಸಂಖ್ಯೆ ಹೆಚ್ಚಳಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದೆ.

‌ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ, ನೆಫ್ರೊ-ಯುರಾಲಜಿ ಸಂಸ್ಥೆ, ವಿಕ್ಟೋರಿಯಾ ಆಸ್ಪತ್ರೆ, ಸಂಜಯ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ, ಕೆ.ಸಿ.ಜನರಲ್ ಸೇರಿ ವಿವಿಧ ಆಸ್ಪತ್ರೆಗಳಲ್ಲಿ ನೂತನ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಕೆಲವೆಡೆ ಈಗಾಗಲೆ ಕಟ್ಟಡಗಳ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಜ್ಜಾಗಿವೆ. ಇದರಿಂದಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಾಸಿಗೆಗಳು ಲಭ್ಯವಾಗಲಿವೆ. 

ADVERTISEMENT

ಕಳೆದ ಐದು ವರ್ಷಗಳ ಅವಧಿಯಲ್ಲಿ ಇನ್ಫೊಸಿಸ್‌ ಪ್ರತಿಷ್ಠಾನ ಸೇರಿ ವಿವಿಧ ಸಂಸ್ಥೆಗಳು ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಅಡಿ ಜಯದೇವ ಹಾಗೂ ಕಿದ್ವಾಯಿ ಸಂಸ್ಥೆಯಲ್ಲಿ ಹಾಸಿಗೆಗಳ ಹೆಚ್ಚಳಕ್ಕೆ ನೆರವಾಗಿದ್ದವು. ಇಲ್ಲಿನ ಜಯದೇವ ಹೃದ್ರೋಗ ಸಂಸ್ಥೆಯು ಜಾಗತಿಕ ಮಟ್ಟದಲ್ಲಿ ಚಿಕಿತ್ಸೆಗೆ ಹೆಸರಾಗಿದೆ. ಅಮೆರಿಕದಂತಹ ಮುಂದುವರಿದ ದೇಶಗಳಿಂದಲೂ ಹೃದ್ರೋಗ ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಿದ್ದಾರೆ. ಬೆಂಗಳೂರಿನ ಜಯನಗರದಲ್ಲಿರುವ ಸಂಸ್ಥೆಯು 1,050 ಹಾಸಿಗೆಗಳನ್ನು ಒಳಗೊಂಡಿದೆ. ಇದು ವಿಶ್ವದಲ್ಲೇ ಅತಿದೊಡ್ಡ ಹೃದ್ರೋಗ ಆಸ್ಪತ್ರೆಯಾಗಿದೆ. ಕ್ಯಾನ್ಸರ್ ಚಿಕಿತ್ಸೆಗೆ ಹೆಸರಾದ ಕಿದ್ವಾಯಿ ಸಂಸ್ಥೆಯು 850 ಹಾಸಿಗೆಗಳನ್ನು ಹೊಂದಿದೆ. ಈಗ ಸರ್ಕಾರವು ಉಳಿದ ಸಂಸ್ಥೆಗಳಲ್ಲಿನ ಹಾಸಿಗೆಗಳ ಸಂಖ್ಯೆ ಹೆಚ್ಚಳಕ್ಕೂ ಕ್ರಮವಹಿಸಿದೆ.

ಸಾವಿರ ಹಾಸಿಗೆಯ ಕಟ್ಟಡ: ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ಸಾವಿರ ಹಾಸಿಗೆಗಳ 11 ಮಹಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. 2 ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿದ್ದು, ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಿದೆ. ಸದ್ಯ ವಿಕ್ಟೋರಿಯಾ ಆಸ್ಪತ್ರೆಯು 530 ಸಾಮಾನ್ಯ ಹಾಸಿಗೆ ಹಾಗೂ 27 ಐಸಿಯು ಹಾಸಿಗೆ ಒಳಗೊಂಡಿದೆ. 

‌ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಯಲ್ಲಿ 1 ಎಕರೆ 33 ಗುಂಟೆ ಪ್ರದೇಶದಲ್ಲಿ ‘ಮಕ್ಕಳ ಅಂಗಾಗ ಕಸಿ ಕೇಂದ್ರ’ವನ್ನು ನಿರ್ಮಾಣ ಮಾಡಲಾಗುತ್ತಿದೆ. ಒಂಬತ್ತು ಮಹಡಿಗಳ ಕಟ್ಟಡವು 500 ಹಾಸಿಗೆಗಳನ್ನು ಒಳಗೊಂಡಿರಲಿದೆ. ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಈ ಕಟ್ಟಡವೂ ಇದೇ ವರ್ಷ ಕಾರ್ಯಾರಂಭ ಮಾಡುವ ಸಾಧ್ಯತೆಯಿದೆ. ಮಕ್ಕಳ ಅಂಗಾಂಗ ಕಸಿಗೆ ಈ ಕೇಂದ್ರ ನೆರವಾಗಲಿದೆ.

‌ಕೆ.ಸಿ. ಜನರಲ್ ಆಸ್ಪತ್ರೆಯ ಆವರಣದಲ್ಲಿ ಒಟ್ಟು 12,824 ಚದರ ಮೀಟರ್ ವಿಸ್ತೀರ್ಣದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ನಿರ್ಮಾಣವಾಗಲಿದೆ. ಈ ಕಟ್ಟಡ ನಿರ್ಮಾಣ ಕಾಮಗಾರಿಗೆ ಸೆಪ‍್ಟೆಂಬರ್‌ನಲ್ಲಿ ಚಾಲನೆ ದೊರೆತಿದೆ. ಇದರಲ್ಲಿ ಕಟ್ಟಡದ ಅಡಿಪಾಯದ ವಿಸ್ತೀರ್ಣ 2,131 ಚದರ ಮೀಟರ್ ಇರಲಿದೆ. ಇದಕ್ಕೆ ₹ 66.78 ಕೋಟಿ ವೆಚ್ಚವಾಗಲಿದೆ. ನಾಲ್ಕು ಮಹಡಿಯ ಈ ಆಸ್ಪತ್ರೆಯು, 200 ಹಾಸಿಗೆಗಳನ್ನು ಒಳಗೊಂಡಿರಲಿದೆ. 

ನೆಫ್ರೊ-ಯುರಾಲಜಿ ಸಂಸ್ಥೆ ಆವರಣದಲ್ಲಿ 150 ಹಾಸಿಗೆಗಳ ಅನೆಕ್ಸ್ ಕಟ್ಟಡ ತಲೆಯೆತ್ತಿದೆ. ನೂತನ ಕಟ್ಟಡವು 30 ಹಾಸಿಗೆಗಳ ಡಯಾಲಿಸಿಸ್ ಘಟಕ, 20 ಹಾಸಿಗೆಗಳ ತೀವ್ರ ನಿಗಾ ಘಟಕವನ್ನೂ ಒಳಗೊಂಡಿದೆ. ಇದೂ ಸಹ ಶೀಘ್ರದಲ್ಲಿಯೇ ಕಾರ್ಯಾರಂಭಿಸಲಿದೆ. ಬೌರಿಂಗ್ ಆಸ್ಪತ್ರೆಗೆ 500 ಹಾಸಿಗೆಗಳ ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ₹212.23 ಕೋಟಿ ವೆಚ್ಚದಲ್ಲಿ ನೂತನ ಆಸ್ಪತ್ರೆ ನಿರ್ಮಾಣವಾಗಲಿದೆ. 2027ರಲ್ಲಿ ಹೊಸ ಆಸ್ಪತ್ರೆ ಕಾರ್ಯಾರಂಭ ಮಾಡುವ ಗುರಿ ಹಾಕಿಕೊಳ್ಳಲಾಗಿದ್ದು, ಶೀಘ್ರ ಕಾಮಗಾರಿ ಪ್ರಾರಂಭವಾಗಲಿದೆ.

ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯ (ನಿಮ್ಹಾನ್ಸ್‌) ಇನ್ನೊಂದು ಶಾಖೆಯನ್ನು ಪ್ರಾರಂಭಿಸುವ ಪ್ರಸ್ತಾವ ಕೇಂದ್ರ ಸರ್ಕಾರದ ಮುಂದಿದೆ. ಕ್ಯಾಲಸನಹಳ್ಳಿ ಸಮೀಪ 40 ಎಕರೆ ಜಮೀನನ್ನೂ ಗುರುತಿಸಲಾಗಿದೆ. 

‘ಇಲ್ಲಿನ ಸರ್ಕಾರಿ ವೈದ್ಯಕೀಯ ಸಂಸ್ಥೆಗಳಲ್ಲಿ ಗುಣಮಟ್ಟದ ಚಿಕಿತ್ಸೆ ಸಿಗುವ ಕಾರಣ ಹೊರ ರಾಜ್ಯಗಳಿಂದಲೂ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದಾರೆ. ಅಗತ್ಯ ಮೂಲಸೌಕರ್ಯ‌ಗಳನ್ನು ಒದಗಿಸುವ ಜತೆಗೆ ಹಾಸಿಗೆಗಳ ಸಂಖ್ಯೆ ಹೆಚ್ಚಳ, ಅತ್ಯಾಧುನಿಕ ವೈದ್ಯಕೀಯ ಉಪಕರಣಗಳ ಅಳವಡಿಕೆಗೆ ಆದ್ಯತೆ ನೀಡಲಾಗಿದೆ’ ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು.

ಇತ್ತೀಚೆಗೆ ಲೋಕಾರ್ಪಣೆಗೊಂಡಿರುವ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವಾರ್ಡ್

ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ನಿರ್ಮಾಣ ಆಗುತ್ತಿರುವ 11 ಮಹಡಿಗಳ ಕಟ್ಟಡ

ಆರೋಗ್ಯ ವ್ಯವಸ್ಥೆಯ ಸಮಗ್ರ ಸುಧಾರಣೆಗೆ ಕ್ರಮವಹಿಸಲಾಗಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣ ಸೇರಿ ವಿವಿಧ ಕಾಮಗಾರಿ ಕೈಗೊಳ್ಳಲಾಗಿದೆ
ದಿನೇಶ್ ಗುಂಡೂರಾವ್ ಆರೋಗ್ಯ ಸಚಿವ
ಚರಕ ಆಸ್ಪತ್ರೆ ಲೋಕಾರ್ಪಣೆಯಿಂದ ಬಡ–ಮಧ್ಯಮ ವರ್ಗದವರಿಗೆ ಅನುಕೂಲವಾಗಿದೆ. ಸರ್ಕಾರಿ ವೈದ್ಯಕೀಯ ಸಂಸ್ಥೆಗಳ ಉನ್ನತೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ
ಡಾ. ಶರಣಪ್ರಕಾಶ ಪಾಟೀಲ ವೈದ್ಯಕೀಯ ಶಿಕ್ಷಣ ಸಚಿವ

ಅತ್ಯಾಧುನಿಕ ಕ್ರೀಡಾ ಚಿಕಿತ್ಸಾಲಯ

ಸಂಜಯ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯಲ್ಲಿ (ಎಸ್‌ಜಿಐಟಿಒ) ಕ್ರೀಡಾ ಗಾಯಗಳ ಚಿಕಿತ್ಸೆಗೆ ಅತ್ಯಾಧುನಿಕ ಸೌಲಭ್ಯಗಳುಳ್ಳ ಕಟ್ಟಡ ತಲೆಯೆತ್ತಿದೆ. ಕ್ರೀಡಾ ಗಾಯಗಳ ಚಿಕಿತ್ಸೆ ಬಗ್ಗೆ ತರಬೇತಿಯ ಜತೆಗೆ ಗಾಯಾಳು ಕ್ರೀಡಾಪಟುಗಳಿಗೆ ಚಿಕಿತ್ಸೆ ಹಾಗೂ ಪುನರ್ವಸತಿ ಕಲ್ಪಿಸಲು ಸಹಕಾರಿಯಾಗಲಿದೆ. ಕಟ್ಟಡದ ಕಾಮಗಾರಿ ಪೂರ್ಣಗೊಂಡಿದ್ದು ಇದಕ್ಕೆ ಶೀಘ್ರದಲ್ಲಿಯೇ ಚಾಲನೆ ದೊರೆಯಲಿದೆ.

ಹೊರರೋಗಿಗಳ ಸಂಖ್ಯೆಯೂ ಏರಿಕೆ

ಕಳೆದೊಂದು ವರ್ಷದಿಂದ ನಗರದ ಸರ್ಕಾರಿ ಆಸ್ಪತ್ರೆಗಳಿಗೆ ನಿತ್ಯ ಭೇಟಿ ನೀಡುವ ಹೊರ ರೋಗಿಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ. ವಾಣಿವಿಲಾಸ ಆಸ್ಪತ್ರೆಯಲ್ಲಿ 300ರ ಆಸುಪಾಸಿನಲ್ಲಿದ್ದ ಸಂಖ್ಯೆ ಈಗ 500ರ ಗಡಿ ಸಮೀಪಿಸಿದೆ. ಜಯದೇವ ಹೃದ್ರೋಗ ಆಸ್ಪತ್ರೆಗೆ ಸುಮಾರು 2200 ಮಂದಿ ಭೇಟಿ ನೀಡುತ್ತಿದ್ದು ಈ ಸಂಖ್ಯೆ ಹಿಂದೆ 1600 ರಷ್ಟಿತ್ತು. ಕಿದ್ವಾಯಿ ಆಸ್ಪತ್ರೆಗೆ ಸುಮಾರು 1900 ಹೊರ ರೋಗಿಗಳು ಭೇಟಿ ನೀಡುತ್ತಿದ್ದಾರೆ. ಮೊದಲು ಈ ಸಂಖ್ಯೆ 1700ರಷ್ಟಿತ್ತು. ಅದೇ ರೀತಿ ಕೆ.ಸಿ ಜನರಲ್ ಆಸ್ಪತ್ರೆಗೆ ಸುಮಾರು 950 ವಿಕ್ಟೋರಿಯಾ ಆಸ್ಪತ್ರೆಗೆ ಅಂದಾಜು 1300 ರೋಗಿಗಳು ಭೇಟಿ ನೀಡುತ್ತಿದ್ದಾರೆ.

ಚರಕ ಆಸ್ಪತ್ರೆ ಕಾರ್ಯಾರಂಭ

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (ಎಬಿವಿಎಂಸಿಆರ್‌ಐ) ಅಧೀನದಲ್ಲಿರುವ ಶಿವಾಜಿನಗರದ ಬ್ರಾಡ್‌ವೇ ರಸ್ತೆಯಲ್ಲಿರುವ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯು ಸೆಪ್ಟೆಂಬರ್ ತಿಂಗಳಲ್ಲಿ ಕಾರ್ಯಾರಂಭಿಸಿದೆ. ₹ 24.38 ಕೋಟಿ ವೆಚ್ಚದಲ್ಲಿ ಬಿಬಿಎಂಪಿ ವತಿಯಿಂದ 2020ರಲ್ಲಿಯೇ ನಿರ್ಮಿಸಲಾಗಿದ್ದ ಈ ಆಸ್ಪತ್ರೆಗೆ ವೈದ್ಯರು ಹಾಗೂ ಸಿಬ್ಬಂದಿಯ ನೇಮಕಾತಿ ನಡೆಯದಿದ್ದರಿಂದ ನಿರೂಪಯುಕ್ತವಾಗಿತ್ತು. ಈಗ ಆಸ್ಪತ್ರೆಗೆ ಅಗತ್ಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 20 ತೀವ್ರ ನಿಗಾ ಘಟಕ (ಐಸಿಯು) ಹಾಸಿಗೆ ಸೇರಿ ಒಟ್ಟು 130 ಹಾಸಿಗೆಗಳನ್ನು ನಾಲ್ಕು ಮಹಡಿಗಳ ಈ ಆಸ್ಪತ್ರೆ ಒಳಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.